20 ಕೋಟಿ ವೆಚ್ಚದಲ್ಲಿ 3 ವಿದ್ಯಾರ್ಥಿ ನಿಲಯ ನಿರ್ಮಾಣ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌

| Published : Oct 06 2024, 01:24 AM IST

20 ಕೋಟಿ ವೆಚ್ಚದಲ್ಲಿ 3 ವಿದ್ಯಾರ್ಥಿ ನಿಲಯ ನಿರ್ಮಾಣ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌
Share this Article
  • FB
  • TW
  • Linkdin
  • Email

ಸಾರಾಂಶ

ದಾವಣಗೆರೆ ಸಮೀಪದ ದೊಡ್ಡಬೂದಿಹಾಳು, ಚಿಕ್ಕಬೂದಿಹಾಳು ಗ್ರಾಮಗಳಲ್ಲಿ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಶಂಕುಸ್ಥಾಪನೆ ಹಾಗೂ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ದೊಡ್ಡಬೂದಿ ಹಾಳು ಹಾಗೂ ಚಿಕ್ಕಬೂದಿಹಾಳು ಗ್ರಾಮಗಳಲ್ಲಿ ₹20 ಕೋಟಿ ವೆಚ್ಚದಲ್ಲಿ ಸರ್ಕಾರದಿಂದ ಮೂರು ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ ತಿಳಿಸಿದರು.

ಲೋಕೋಪಯೋಗಿ ಇಲಾಖೆಯಿಂದ ದೊಡ್ಡಬೂದಿಹಾಳು ಗ್ರಾಮದಲ್ಲಿ 6.5 ಕೋಟಿ ರುಪಾಯಿ ವೆಚ್ಚದಲ್ಲಿ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶನಿವಾರ ಶಂಕುಸ್ಥಾಪನೆ ಹಾಗೂ ಗುದ್ದಲಿ ಪೂಜಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿ,

ಹಾಸ್ಟೆಲ್ ಸಮಸ್ಯೆಯಿಂದ ವಿದ್ಯಾರ್ಥಿಗಳು ಪರದಾಡುತ್ತಿದ್ದರು. ಅವರಿಗೆ ತಾತ್ಕಾಲಿಕ ವ್ಯವಸ್ಥೆಯನ್ನು ಬಾಡಿಗೆ ಕಟ್ಟಡಗಳಲ್ಲಿ ಮಾಡಲಾಗಿದೆ. ಪ್ರತಿ ವಿದ್ಯಾರ್ಥಿಯು ಹಾಸ್ಟೆಲ್ ವ್ಯವಸ್ಥೆಯಿಂದ ವಂಚಿತರಾಗದಂತೆ ಸೂಕ್ತ ಕ್ರಮಕ್ಕೆ ನಮ್ಮ ಸರ್ಕಾರ ಮುಂದಾಗಿದ್ದು ದೊಡ್ಡಬೂದಿಹಾಳು ಗ್ರಾಮದಲ್ಲಿ ಉತ್ಸಾಹದಿಂದ ಹಾಸ್ಟೆಲ್ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದರು.

ಚಿಕ್ಕಬೂದಿಹಾಳು ಗ್ರಾಮದಲ್ಲಿ ಎರಡು ಹೊಸ ಹಾಸ್ಟೆಲ್ ನಿರ್ಮಾಣ ಆಗಲಿವೆ. ಒಟ್ಟು 20 ಕೋಟಿ ರುಪಾಯಿ ವೆಚ್ಚದಲ್ಲಿ ಮೂರು ಮಾಡ್ರನ್ ಹಾಸ್ಟೆಲ್ ನಿರ್ಮಾಣ ಮಾಡಲಾಗುವುದು. ಕಾಡಜ್ಜಿ ಹಾಗೂ ಆವರಗೊಳ್ಳ ಗ್ರಾಮದಲ್ಲಿ ಪಶು ಆಸ್ಪತ್ರೆ ಮಂಜೂರಾಗಿವೆ. ದೊಡ್ಡ ಬೂದಿಹಾಳ್ ಗ್ರಾಮದಲ್ಲಿ ಪಶು ಆಸ್ಪತ್ರೆ ನಿರ್ಮಾಣಕ್ಕೆ ಅನುಮೊದನೆ ನೀಡಲಾಗಿದೆ ಎಂದ ಸಚಿವರು, ಅರಸಾಪುರದಿಂದ ಕೊಂಡಜ್ಜಿವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯ ಸರ್ವೋತಮುಖ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಮುಂದಾಗಿದೆ ಎಂದರು. ಬಡವರ, ದೀನ ದಲಿತರ ಕೈ ಹಿಡಿಯುವ ಪಕ್ಷ ಎಂದರೇ ಕಾಂಗ್ರೆಸ್ ಪಕ್ಷವಾಗಿದೆ. ಕುಂಕುಮ ಹಚ್ಚಿಕೊಂಡು ಸುಳ್ಳು ಹೇಳಿ ಗಲಾಟೆ ಸೃಷ್ಠಿಸುವವರಿಂದ ದೂರವಿರಿ ಎಂದು ಮತದಾರರಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಮೇಯರ್ ಕೆ.ಚಮನ್ ಸಾಬ್, ಉಪ ಮೇಯರ್ ಸೋಗಿ ಶಾಂತಕುಮಾರ, ಪಾಲಿಕೆ ಸದಸ್ಯರಾದ ಗಡಿಗುಡಾಳ ಮಂಜುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಸ್ಥಳೀಯ ಮುಖಂಡ ಬೂದಾಳ್ ಬಾಬು ಸೇರಿದಂತೆ ಲೋಕೋಪಯೋಗಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಿಬ್ಬಂದಿವರ್ಗದವರು ಇದ್ದರು.