ಸೆ.15ರಂದು 65 ಮಿಮೀ ಮಾನವ ಸರಪಳಿ ನಿರ್ಮಾಣ

| Published : Aug 31 2024, 01:41 AM IST

ಸಾರಾಂಶ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿಯಿಂದ ಕೋಲಾರ ಜಿಲ್ಲೆಯ ಗಡಿಯವರೆಗೆ ಒಟ್ಟು 65 ಕಿಲೋ ಮೀಟರ್ ಉದ್ದದ ಮಾನವ ಸರಪಳಿಯನ್ನು ನಿರ್ಮಿಸಿ ಅರ್ಥಪೂರ್ಣವಾಗಿ ಆಚರಿಸಬೇಕು. ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳೂ ಪಾಲ್ಗೊಳ್ಳಲಿವೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಅರ್ಥಪೂರ್ಣವಾಗಿ ಆಚರಿಸಲು ಸೂಕ್ತ ಸಿದ್ಧತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಜಿಪಂನ ಸರ್. ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ಜಿಲ್ಲೆಗಳಲ್ಲೂ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಸೆ. 15ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಆಚರಿಸಲಾಗುವುದು ಎಂದರು.

65 ಕಿಮೀ ಉದ್ದ ಮಾನವ ಸರಪಳಿ

ಅದರಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿಯಿಂದ ಕೋಲಾರ ಜಿಲ್ಲೆಯ ಗಡಿಯವರೆಗೆ ಒಟ್ಟು 65 ಕಿಲೋ ಮೀಟರ್ ಉದ್ದದ ಮಾನವ ಸರಪಳಿಯನ್ನು ನಿರ್ಮಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳು, ಸ್ವ-ಸಹಾಯ ಸಂಘಗಳ ಸದಸ್ಯರು ಪದಾಧಿಕಾರಿಗಳೆಲ್ಲರ ಸಹಕಾರ ಪಡೆದು ಆಚರಣೆ ಮಾಡಲು ಎಲ್ಲಾ ಇಲಾಖೆಗಳು ಸಮನ್ವಯ, ಸಹಕಾರದೊಂದಿಗೆ ಕಾರ್ಯ ನಿರ್ವಹಿಸಬೇಕು. ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಈಗಿನಿಂದಲೇ ಕೈಗೊಳ್ಳಬೇಕೆಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಜನವರಿಯಿಂದ ಈವರೆಗೆ ಜಿಲ್ಲೆಯಲ್ಲಿ 271 ಡೆಂಘೀ ಪ್ರಕರಣಗಳು ದಾಖಲಾಗಿವೆ. ಜುಲೈ ಮಾಹೆಯಲ್ಲಿ 120 ಡೆಂಗ್ಯು ಪ್ರಕರಣಗಳು ದಾಖಲಾಗಿದ್ದವು. ಆಗಸ್ಟ್ ಮಾಹೆಯಲ್ಲಿ 57 ಪ್ರಕರಣಗಳು ದಾಖಲಾಗಿವೆ. ಶೇ. 50 ರಷ್ಟು ಪ್ರಮಾಣದಲ್ಲಿ ಪ್ರಕರಣಗಳು ಇಳಿಕೆಯಾಗಿದ್ದರೂ ಕೂಡ ಗ್ರಾಮಾಂತರ ಪ್ರದೇಶಗಳಲ್ಲಿಯೇ ಶೇ. 79 ರಷ್ಟು ಪ್ರಕರಣಗಳು ವರದಿಯಾಗುತ್ತಿವೆ. ಪ್ರಕರಣಗಳು ಇಳಿಕೆ ಯಾಗುತ್ತಿವೆ ಎಂದು ನಿರ್ಲಕ್ಷ್ಯ ತಾಳದೆ ಮುನ್ನೆಚ್ಚರಿಕೆ ಮುಂದುವರೆಸಲು ಅಧಿಕಾರಿಗಳಿಗೆ ತಿಳಿಸಿದರು.

ಎಲ್ಲಿಬೇಕಾದರೂ ನೋಂದಣಿ

2024-25ನೇ ಸಾಲಿನ ಆಯಾವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಸರ್ಕಾರ ಘೋಷಿಸಿದೆ. ಈ ವ್ಯವಸ್ಥೆಯನ್ನು 2011ರಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ, ಮಾರ್ಚ್ 2024ರಲ್ಲಿ ತುಮಕೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಈ ಕಾರಣದಿಂದ ಎನಿವೇರ್ ನೋಂದಣಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಉಪನೋಂದಣಿ ಕಚೇರಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.