ಸಾರಾಂಶ
ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಹೆದ್ದಾರಿಯಲ್ಲಿ ತಾಲೂಕಿನ ದಾ. ಸಾಲಾಪುರದಿಂದ ಎಂ.ಚಂದರಗಿ ವರಗೆ ಬೃಹತ್ ಮಾನವ ಸರಪಳಿ ಮಾಡಲಾಗುವುದು ಎಂದು ತಹಸೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು.
ಕನ್ನಡಪ್ರಭ ವಾರ್ತೆ ರಾಮದುರ್ಗ
ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯ ಹೆದ್ದಾರಿಯಲ್ಲಿ ತಾಲೂಕಿನ ದಾ. ಸಾಲಾಪುರದಿಂದ ಎಂ.ಚಂದರಗಿ ವರಗೆ ಬೃಹತ್ ಮಾನವ ಸರಪಳಿ ಮಾಡಲಾಗುವುದು ಎಂದು ತಹಸೀಲ್ದಾರ ಪ್ರಕಾಶ ಹೊಳೆಪ್ಪಗೋಳ ತಿಳಿಸಿದರು.ಗುರುವಾರ ತಾಪಂನಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಆದೇಶದಂತೆ ಸೆ.15ರಂದು ಬೆಳಗ್ಗೆ 9.30 ರಿಂದ 10.30ರವರೆಗೆ ಬೆಳಗಾವಿ ಜಿಲ್ಲೆಯ ಕೊನೆಯ ತಾಲೂಕು ರಾಮದುರ್ಗದ ಹದ್ದಿ ರಾಜ್ಯ ಹೆದ್ದಾರಿಯಲ್ಲಿ ಬರುವ ದಾ.ಸಾಲಾಪುರದಿಂದ ಎಂ.ಚಂದರಗಿವರೆಗೆ ಬೃಹತ್ ಮಾನವ ಸರಪಳಿ ನಿರ್ಮಾಣ ಮಾಡಲಾಗುವುದು ಎಂದರು.
ಈ ಕಾರ್ಯಕ್ರಮದಲ್ಲಿ ತಾಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ತಮ್ಮ ವಿದ್ಯಾರ್ಥಿಗಳೊಂದಿಗೆ ನಿಗದಿಪಡಿಸಿದ ಸ್ಥಳಕ್ಕೆ ಸರಿಯಾದ ಸಮಯಕ್ಕೆ ಬರುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ರಾಜ್ಯ ಸರ್ಕಾರಿ ನೌಕರರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು, ಸ್ಥಳೀಯ ಸಂಸ್ಥೆಯ ಚುನಾಯಿತ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅಗತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ತಾಪಂ ಸಿಇಒ ಪ್ರವೀಣಕುಮಾರ ಸಾಲಿ, ಸಿಪಿಐ ಐ.ಆರ್. ಪಟ್ಟಣಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪರಶುರಾಮ ಪತ್ತಾರ, ಸಹಾಯಕ ಕೃಷಿ ನಿರ್ದೇಶಕ ಎಸ್. ಎಫ್. ಬೆಳವಟಗಿ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.