ಸಾರಾಂಶ
ಕಾರ್ಮಿಕ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಹಲವು ಬಾರಿ ಮಾತುಕತೆ ನಡೆದರೂ ಯಾವುದೇ ಪ್ರಯೋಜನವಾಗಿಲ್ಲ.
ಬಳ್ಳಾರಿ: ಕಟ್ಟಡ ಕಾರ್ಮಿಕರು ಮನೆ ನಿರ್ಮಿಸಿಕೊಳ್ಳಲು ₹5 ಲಕ್ಷ ಸಹಾಯಧನ ನೀಡಬೇಕು. ಸ್ಲಂ ಬೋರ್ಡ್ ಗೆ ನೀಡಿರುವ ₹54 ಕೋಟಿಯನ್ನು ಮಂಡಳಿಗೆ ಹಿಂಪಡೆಯಲು ಸೂಕ್ತ ಕ್ರಮ ವಹಿಸಬೇಕು ಎಂಬಿತ್ಯಾದಿ ಬೇಡಿಕಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಕಾರ್ಮಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಈ ಕುರಿತು ಕಾರ್ಮಿಕ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಹಲವು ಬಾರಿ ಮಾತುಕತೆ ನಡೆದರೂ ಯಾವುದೇ ಪ್ರಯೋಜನವಾಗಿಲ್ಲ. ನಕಲಿ ಕಾರ್ಮಿಕ ಕಾರ್ಡ್‌ಗಳನ್ನು ಮಾಡಿಸಿಕೊಡುವ ಬ್ರೋಕರ್‌ಗಳ ಸಂಖ್ಯೆ ಹೆಚ್ಚಾಗಿದ್ದು ಇದರಿಂದ ನೈಜ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ನಕಲಿ ಕಾರ್ಡ್‌ಗಳನ್ನು ರದ್ದುಗೊಳಿಸಬೇಕು. ಕಾರ್ಮಿಕರ ವೈದ್ಯಕೀಯ ತಪಾಸಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ₹258 ಕೋಟಿ ದುರ್ಬಳಕೆ ಆಗಿದೆ ಎಂದು ಸಿಎಜಿ ವರದಿ ನೀಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು ಕೂಡಲೇ ಹಣ ದುರ್ಬಳಕೆ ತನಿಖೆಯಾಗಬೇಕು. ಕಾರ್ಮಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಒದಗಿಸಲಾದ ಕ್ರಮಗಳನ್ನು ಪರಿಶೀಲಿಸಲು ಅಧಿಕಾರಿಗಳು ನೇರವಾಗಿ ನಿರ್ದಿಷ್ಟ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಸುರಕ್ಷತೆ ಒದಗಿಸದ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಮಹಿಳಾ ಕಾರ್ಮಿಕರಿಗೆ ಸಮಾನ ವೇತನ ನಿಗದಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಟು ಕಾರ್ಮಿಕ ಇಲಾಖೆ ಕಚೇರಿಗೆ ತಲುಪಿದ ಕಟ್ಟಡ ಕಾರ್ಮಿಕರು ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಮನವಿ ಸಲ್ಲಿಸಿ, ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಇದೇ ವೇಳೆ ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಶಿವನಾಯ್ಕ, ಕಾರ್ಯದರ್ಶಿ ಎರಿಸ್ವಾಮಿ ಹಾಗೂ ಕಾರ್ಮಿಕ ಮುಖಂಡ ಜೆ.ಸತ್ಯಬಾಬು ಮಾತನಾಡಿದರು.
ಸಂಘಟನೆಯ ಜಿಲ್ಲಾ ಸಮಿತಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.