ಆನ್‌ಲೈನ್‌ ಮೋಸದ ಬಗ್ಗೆ ಗ್ರಾಹಕರಿಗೆ ಎಚ್ಚರಿಕೆ ಬೇಕು: ಡಾ. ಕೆ ವಿದ್ಯಾಕುಮಾರಿ

| Published : Mar 18 2025, 12:34 AM IST

ಸಾರಾಂಶ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಪ್ರತಿಯೊಬ್ಬರೂ ಒಂದಲ್ಲಾ ಒಂದು ರೀತಿಯಲ್ಲಿ ಗ್ರಾಹಕರಾಗಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಜಾಹೀರಾತುಗಳ ಮೂಲಕ ವಿದ್ಯಾವಂತ ಗ್ರಾಹಕರು ಸಹ ತಮಗರಿವಿಲ್ಲದಂತೆ ಮೋಸ ಹೋಗುತ್ತಿದ್ದಾರೆ. ಮಾರುಕಟ್ಟೆಯಲ್ಲಿ ವ್ಯವಹರಿಸುವ ಸಂದರ್ಭದಲ್ಲಿ ತಮ್ಮ ಹಕ್ಕುಗಳು ಮತ್ತು ಕಾಯ್ದೆಗಳ ಬಗ್ಗೆ ತಿಳಿದುಕೊಂಡು ಅನ್ಯಾಯವಾಗದ ರೀತಿಯಲ್ಲಿ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.ಅವರು ಇಲ್ಲಿನ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಬಳಕೆದಾರರ ವೇದಿಕೆ ಸಂಚಾಲಕ ಯು.ಜಿ. ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಹಕರು ತಾವು ಪಡೆದ ವಸ್ತು/ಸೇವೆಯಲ್ಲಿ ನ್ಯೂನತೆಗಳು ಕಂಡುಬಂದಲ್ಲಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಗೆ ದೂರು ಸಲ್ಲಿಸಿ, ಅತಿ ಕಡಿಮೆ ಖರ್ಚಿನಲ್ಲಿ ನ್ಯಾಯ ಪಡೆಯಬಹುದಾಗಿದೆ. ಬಳಕೆದಾರರ ಕಾನೂನುಗಳು ಜನಸಾಮಾನ್ಯರಿಗೆ ಅರ್ಥವಾಗುವ ನಿಟ್ಟಿನಲ್ಲಿ ಸರಳವಾಗಿದ್ದು, ಅನ್ಯಾಯವಾದ ಸಂದರ್ಭದಲ್ಲಿ ಗ್ರಾಹಕರು ಶೀಘ್ರವಾಗಿ ನ್ಯಾಯ ಪಡೆಯಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದರು.

ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಜಿಲ್ಲಾ ಅಧ್ಯಕ್ಷ ಸುನೀಲ ತಿ. ಮಾಸರೆಡ್ಡಿ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್, ನಗರಸಭಾ ಸದಸ್ಯೆ ಗೀತಾ ಶೇಟ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಸುಜಾತಾ ಕೋರಳ್ಳಿ, ಕಾಲೇಜಿನ ಉಪನ್ಯಾಕಸರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಬಳಕೆದಾರರ ವೇದಿಕೆಯ ವಿಶ್ವಸ್ಥ ಹರಿಕೃಷ್ಣ ಶಿವತ್ತಾಯ ಸ್ವಾಗತಿಸಿ, ನಿರೂಪಿಸಿದರು. ಎನ್.ರಾಮ ಭಟ್ ವಂದಿಸಿದರು.