ಸಾರಾಂಶ
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದೆ. ಭಾನುವಾರ ರಾತ್ರಿಯಿಂದ ಸೋಮವಾರ ಮುಂಜಾನೆವರೆಗೆ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿ ಹೋಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ರಾಜ್ಯಾದ್ಯಂತ ಮಳೆಗೆ ಐವರು ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ವೈಟ್‌ಫೀಲ್ಡ್‌ನಲ್ಲಿ ಮನೆಯ ಗೋಡೆ ಕುಸಿದು ಶಹಪುರ ಮೂಲದ ಶಶಿಕಲಾ (35) ಎಂಬುವರು ಮೃತಪಟ್ಟಿದ್ದಾರೆ. ಕುರಿ ಮೇಯಿಸುತ್ತಿದ್ದಾಗ ಸಿಡಿಲು ಬಡಿದು ರಾಯಚೂರು ಜಿಲ್ಲೆ ಅರಕೇರಾ ತಾಲೂಕಿನ ಭೋಗಿ ರಾಮನಗುಂಡದಲ್ಲಿ ಹನುಮಗೌಡ ನಾಯಕ (16), ಹಾವೇರಿ ತಾಲೂಕಿನ ಹೊಸರಿತ್ತಿಯಲ್ಲಿ ಹನಮಂತಗೌಡ ಶಿವನಗೌಡ ರಾಮನಗೌಡ (40) ಎಂಬುವರು ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಉಳುವರೆಯಲ್ಲಿ ತಮ್ಮಣ್ಣಿ ಅನಂತ ಗೌಡ (65) ಎಂಬುವರ ಮನೆಗೆ ಸಿಡಿಲು ಬಡಿದಿದ್ದು, ಅವರು ಸ್ಥಳದಲ್ಲೇ ಅಸುನೀಗಿದ್ದಾರೆ. ದಾವಣಗೆರೆಯ ನೂತನ ಕಾಲೇಜು ರಸ್ತೆಯ ಸ್ಮಾರ್ಟ್ ಸಿಟಿ ಬಸ್ ಸ್ಟಾಪ್ ನ ಶೆಲ್ಟರ್‌ಗೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಅಪರಿಚಿತ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.
ಬೆಂಗಳೂರಿನ ಕೆಂಗೇರಿ ಭಾಗದಲ್ಲಿ ದಾಖಲೆಯ 132 ಮಿ.ಮೀ. ಮಳೆ ಸುರಿದಿದ್ದು, ನಗರವ್ಯಾಪ್ತಿಯ 50ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡು ಜನರು ಪರದಾಡುವಂತಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಸುಮಾರು 3 ಗಂಟೆಗೂ ಅಧಿಕ ಕಾಲ ಸುರಿದ ಭಾರೀ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೂರಾರು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಗುಡಿಬಂಡೆ ತಾಲೂಕಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಂಡು ಹೂವುಗಳು ನೆಲಕಚ್ಚಿವೆ.
ಕಲಬುರಗಿ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಬಾಳೆ ತೋಟಗಳಿಗೆ ಅಪಾರ ಹಾನಿ ಸಂಭವಿಸಿದೆ. ನೂರಾರು ಎಕರೆಯಲ್ಲಿ ಬೆಳೆದ ಲಕ್ಷಕ್ಕೂ ಹೆಚ್ಚು ಬಾಳೆ ಗಿಡ ಹಾನಿಗೊಳಗಾಗಿವೆ. ಹೊನ್ನಾವರ, ಕುಮಟಾ, ಗೋಕರ್ಣ ಸೇರಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸುಮಾರು ಒಂದು ಗಂಟೆ ಕಾಲ ಭಾರಿ ಮಳೆ ಸುರಿದಿದ್ದು, ಕೆಲವೆಡೆ ವಿದ್ಯುತ್ ಹಾಗೂ ದೂರವಾಣಿ ಸಂಪರ್ಕ ವ್ಯತ್ಯಯವಾಗಿದೆ. ದೊಡ್ಡಬಳ್ಳಾಪುರದಲ್ಲಿ ಭಾನುವಾರ ಒಂದೇ ರಾತ್ರಿ 31 ಮಿ.ಮೀ. ಮಳೆಯಾಗಿದೆ. ರಾಯಚೂರು ಜಿಲ್ಲೆಯಾದ್ಯಂತ ಮಳೆಗೆ 15ಕ್ಕೂ ಹೆಚ್ಚು ಮನೆಗಳು ಬಿದ್ದಿದ್ದು, ಇದೇ ವೇಳೆ, ಮೈಸೂರು, ಮಂಡ್ಯ ಸೇರಿ ರಾಜ್ಯದ ಇತರೆಡೆಯೂ ಮಳೆಯಾದ ವರದಿಯಾಗಿದೆ.
ಇನ್ನೂ 3 ದಿನ ಭಾರಿ ಮಳೆ:ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಮುಂದಿನ ಮೂರು ದಿನ ರಾಜ್ಯದ ಬಹುತೇಕ ಕಡೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಅದರಲ್ಲೂ ಮಂಗಳವಾರ ಮತ್ತು ಬುಧವಾರ ಕರಾವಳಿ ಹಾಗೂ ಮಲೆನಾಡು ಭಾಗದ ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಮುಂಗಾರು ಪ್ರವೇಶಕ್ಕೂ ಮುನ್ನವೇ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದೆ. ಹವಾಮಾನ ಇಲಾಖೆ ವರದಿಯಂತೆ ಮಂಗಳವಾರ ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಗಾಳಿ ಸಹಿತ ಭಾರೀ ಮಳೆಯ ನಿರೀಕ್ಷೆಯಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬುಧವಾರವೂ ಭಾರೀ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿ ಜನರು ಎಚ್ಚರದಿಂದಿರುವಂತೆ ಸಲಹೆ ನೀಡಲಾಗಿದೆ. ಮಳೆ ಸಂದರ್ಭದಲ್ಲಿ ಭಾರೀ ಗಾಳಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಗುರುವಾರದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆ ಗುರುವಾರ ಮತ್ತು ಶುಕ್ರವಾರ ಬಹುತೇಕ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದೆ.