ಸಾರಾಂಶ
ಕೊಪ್ಪಳ: ಕೊಪ್ಪಳ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯಲಬುರ್ಗಾ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ವಜ್ರಬಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಹಿರೇಅರಳಿಹಳ್ಳಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ “ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ” ಕುರಿತು ರಸಪ್ರಶ್ನೆ ಸ್ಪರ್ಧೆ ನಡೆಸಲಾಯಿತು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ರಾಷ್ಟ್ರೀಯ ಕಾರ್ಯಕ್ರಮಗಳು, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ಅಸಾಂಕ್ರಾಮಿಕ ರೋಗಗಳ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವ ಕುರಿತು, ನಿರಂತವಾಗಿ ವಿವಿಧ ಮಾಧ್ಯಮದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು.ಬಳಿಕ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಾದ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ, ಆರ್‌ಸಿಎಚ್ ಕಾರ್ಯಕ್ರಮ, ರಾಷ್ಟ್ರೀಯ ಶ್ರವಣದೋಷ ನಿವಾರಣಾ ಮತ್ತು ನಿಯಂತ್ರಣ ಕಾರ್ಯಕ್ರಮ, ಹದಿಹರೆಯದವರ ಆರೋಗ್ಯದ ಮಹತ್ವ, ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣ, ಕುಟುಂಬ ಕಲ್ಯಾಣ ಕಾರ್ಯಕ್ರಮ, ಮಾನಸಿಕ ಆರೋಗ್ಯ ಕಾರ್ಯಕ್ರಮ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ಐಡಿಎಸ್‌ಪಿ, ಅಸಾಂಕ್ರಾಮಿಕ ರೋಗಗಳ ಬಗ್ಗೆ ಹಾಗೂ ಇತರ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ವಿವರವಾಗಿ ಮಾತನಾಡಿದರು.
ಸ್ಪರ್ಧೆಯಲ್ಲಿ 6 ತಂಡಗಳು ಭಾಗವಹಿಸಿದ್ದು, ಅದರಲ್ಲಿ ರಾಣಿ ಅಬ್ಬಕ್ಕದೇವಿ ತಂಡ ಪ್ರಥಮ (₹750), ಕಿತ್ತೂರಾಣಿ ಚನ್ನಮ್ಮ ತಂಡ ದ್ವಿತೀಯ (₹500) ಹಾಗೂ ಇಮ್ಮಡಿ ಪುಲಿಕೇಶಿ ತಂಡ ತೃತೀಯ (₹250) ಬಹುಮಾನಗಳನ್ನು ಪಡೆದುಕೊಂಡವು.ಕಾಲೇಜು ಪ್ರಾಂಶುಪಾಲ ದೊಡ್ಡಪ್ಪ ತಳವಾರ ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಳ್ಳುವ ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಿವೆ ಎಂದರು.ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಂಕ್ರಯ್ಯ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶೋಭಾ ಪತ್ತಾರ, ಸಮುದಾಯ ಆರೋಗ್ಯಾಧಿಕಾರಿ ಬಸವರಾಜ ಮತ್ತು ಪ್ರಭು ಉಪಸ್ಥಿತರಿದ್ದರು.