ಉದ್ಯೋಗ ಕ್ಷೇತ್ರದ ಬದಲಾಗುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ ಯುವಜನರು ತಮ್ಮ ಜ್ಞಾನ, ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ
ಕನ್ನಡಪ್ರಭ ವಾರ್ತೆ ಗದಗಉದ್ಯೋಗ ಕ್ಷೇತ್ರದ ಬದಲಾಗುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ ಯುವಜನರು ತಮ್ಮ ಜ್ಞಾನ, ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು. ಇಂತಹ ಉದ್ಯೋಗ ಮೇಳಗಳು ಶಿಕ್ಷಣ ಮತ್ತು ಉದ್ಯೋಗಾವಕಾಶಗಳ ನಡುವಿನ ಸಂಪರ್ಕವನ್ನು ಬಲಪಡಿಸುತ್ತವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ರಣದೀಪ್ ಡಿ. ತಿಳಿಸಿದರು.
ನಗರದ ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ನೈಪುಣ್ಯ ಕೇಂದ್ರ-ಪ್ಲೇಸ್‌ಮೆಂಟ್ ಸೆಲ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ನಡೆದ ಪದವೀಧರರ ಉದ್ಯೋಗಾರ್ಹತೆ ಹೆಚ್ಚಿಸುವ ಹಾಗೂ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಉನ್ನತಿ-2026 ಕ್ಯಾಂಪಸ್ ಪ್ಲೇಸ್‌ಮೆಂಟ್ ಡ್ರೈವ್ ಮತ್ತು ಉದ್ಯೋಗ ಮೇಳವನ್ನ ಉದ್ಘಾಟಿಸಿ ಮಾತನಾಡಿದರು.ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಶೈಕ್ಷಣಿಕ ಅರ್ಹತೆಯ ಜೊತೆಗೆ ಕೌಶಲ್ಯ, ಪ್ರಾಯೋಗಿಕ ಜ್ಞಾನ, ಕಲಿಯುವ ಮನೋಭಾವ, ಸಮಯಪಾಲನೆ ಹಾಗೂ ವೃತ್ತಿಪರ ಬದ್ಧತೆ ಇಂದಿನ ಉದ್ಯೋಗ ಕ್ಷೇತ್ರದಲ್ಲಿ ಪ್ರಮುಖವಾಗಿವೆ ಎಂದರು.
ಜಿಪಂ ಸಿಇಒ ಮುಕುಲ್ ಜೈನ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಸಮಾಜದ ಅಭಿವೃದ್ಧಿಗೆ ಬಳಸಬೇಕು ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಸುರೇಶ್ ವಿ. ನಾಡಗೌಡರ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದೇ ವಿಶ್ವವಿದ್ಯಾಲಯದ ಪ್ರಮುಖ ಧ್ಯೇಯ. ಶಿಕ್ಷಣದ ಜೊತೆಗೆ ಕೌಶಲ್ಯ, ಕ್ಷೇತ್ರಾನುಭವ ಹಾಗೂ ಉದ್ಯೋಗಾವಕಾಶಗಳನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಭದ್ರ ಬುನಾದಿ ಕಲ್ಪಿಸುವುದು ನಮ್ಮ ಉದ್ದೇಶ ಎಂದರು.
ಈ ವೇಳೆ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಅಮರೇಶ್ ಯಾತಗಲ್ ಮಾತನಾಡಿದರು. ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪ್ರಶಾಂತ್ ಜೆ.ಸಿ., ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಬಸವಂತ್ ಪಿ.ಎನ್., ಎಂ.ಬಿ. ಚೆನ್ನಪ್ಪಗೌಡರ, ಅಭಿಷೇಕ್ ಎಚ್.ಈ., ಡಾ. ಅಮಿತವಿಕ್ರಮ್ ನಾವಲಗಟ್ಟಿ, ದೇವರಾಜ ದೊಡ್ಡಮನಿ, ಅಲ್ವಿನಾ ಧರ್ಮದಾಸ್, ಮುಸ್ಕಾನ್ ಸಿಂದಗಿ ಸೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.