ಜೀವ ಉಳಿಸಲು ರಕ್ತದಾನಿಗಳ ಕೊಡುಗೆ ಅಮೂಲ್ಯ: ಡಾ.ಸುವರ್ಣ ಕುಲಕರ್ಣಿ

| Published : Jun 16 2024, 01:46 AM IST / Updated: Jun 16 2024, 01:47 AM IST

ಸಾರಾಂಶ

ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಿಲ್ಲೆಯ 5 ಜನರ ರಕ್ತದಾನಿಗಳನ್ನು ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕದಿಂದ ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜಿಲ್ಲೆಯ 5 ಜನರ ಸ್ವಯಂ ಪ್ರೇರಿತ ರಕ್ತದಾನಿಗಳನ್ನು ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕದಿಂದ ಸನ್ಮಾನಿಸಲಾಯಿತು.

ಶುಕ್ರವಾರ ನಗರದ ನರ್ಸಿಂಗ್ ಕಾಲೇಜಿನಲ್ಲಿ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಸ್ವಯಂ ಪ್ರೇರಿತ ರಕ್ತ ದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಸಲ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದ ಗಣೇಶ ಪತಂಗೆ, ಮುತ್ತುರಾಜ ಹಲಗಲಿ, ವಿರೂಪಾಕ್ಷಪ್ಪ ಪೂಜಾರ, ದೇವೇಂದ್ರ ಗವರಿ ಹಾಗೂ ಬಾಗಲಕೋಟೆಯ ಕಿದ್ಮತ್-ಇ ಇನ್ಸಾನಿಯತ್‌ ಫೌಂಡೇಶನ್‌ ಪ್ರತಿನಿಧಿಯನ್ನು ಸನ್ಮಾನಿಸಲಾಯಿತು.

ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಸುವರ್ಣ ಕುಲಕರ್ಣಿ ಮಾತನಾಡಿ, ರಕ್ತದಾನಿಗಳೇ ನಿಮ್ಮ ಜೀವದಾನದ ಕೊಡುಗೆ ಅತ್ಯಮೂಲ್ಯವಾದದು. ರಕ್ತದಾನಿಗಳಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಇದಾಗಿದ್ದು, ಯುವಕ ಮತ್ತು ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದಾಗಬೇಕೆಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಯು.ಎನ್. ದಂಧರಗಿ ರಕ್ತದಾನ ಮಾಡಿ ಮಾತನಾಡಿ, ರಕ್ತ ಯಾವುದೇ ಕಾರ್ಖಾನೆಯಲ್ಲಿ ಉತ್ಪತ್ತಿಯಾಗುವುದಿಲ್ಲ. ಮನುಷ್ಯನ ದೇಹದಲ್ಲಿ ಮಾತ್ರ ಉತ್ಪತ್ತಿಯಾಗುತ್ತದೆ. ಆದ್ದರಿಂದ ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನ ಮಾಡಲು ಯಾವುದೇ ರೀತಿಯ ಭಯ ಬೇಡ ಎಂದರು.

ಡಾ.ಸುರೇಶಗೌಡ ಪಾಟೀಲ ರಕ್ತದಾನ ಮಾಡಿ ನಂತರ ಮಾತನಾಡಿ, ಇಲ್ಲಿಯವರೆಗೆ ಯಾರು ರಕ್ತದಾನ ಮಾಡಿಲ್ಲವೋ ಅವರು ರಕ್ತದಾನ ಮಾಡಲು ಮುಂದಾಗಿ. ಅದರಿಂದ ನಮ್ಮ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುವದಲ್ಲದೆ, ಇದರಿಂದ ಆರೋಗ್ಯ ಕೂಡ ಸುಧಾರಿಸುತ್ತದೆ ಎಂದು ತಿಳಿಸಿದರು.ಪ್ರಾರಂಭದಲ್ಲಿ ನರ್ಸಿಂಗ್ ಕಾಲೇಜಿನ ಆಡಳಿತಾಧಿಕಾರಿ ಡಾ.ಸುನಂದ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶ್ರೀಶೈಲ ಹಟ್ಟಿ ವಿಶ್ವ ಸ್ವಯಂ ಪ್ರೇರಿತ ರಕ್ತ ದಾನಿಗಳ ದಿನಾಚರಣೆಯ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಮಹಾವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಶಶಿಕಲಾ ಸಿನ್ನೂರ, ಮಹಾವಿದ್ಯಾಲಯದ ಪ್ರಾಧ್ಯಾಪಕ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.