ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಸುತ್ತಮುತ್ತಲ ವಾತವರಣ ಸ್ವಚ್ಛತೆ ಮೂಲಕ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಿ ಮಲೇರಿಯಾ ರೋಗವನ್ನು ತಡೆಗಟ್ಟಲು ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಸಹಕಾರ ನೀಡಬೇಕೆಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎನ್.ಕಾಂತರಾಜು ತಿಳಿಸಿದರು.ಪಟ್ಟಣದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ನಡೆದ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಖಾಸಗಿ ವೈದ್ಯರು ಮತ್ತು ಪ್ರಯೋಗಶಾಲಾ ತಂತ್ರಜ್ಞರಿಗೆ ಮಲೇರಿಯಾ ಕುರಿತು ಅಡ್ವೋಕೇಸಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಮಳೆಗಾಲ ಇರುವುದರಿಂದ ನೀರು ನಿಲ್ಲುವ ಸ್ಥಳಗಳಲ್ಲಿ ಹೆಣ್ಣು ಅನಾಫಿಲಿಸ್ ಸೊಳ್ಳೆಗಳು ಉತ್ಪತ್ತಿಯಾಗಿ ಮನುಷ್ಯರಿಗೆ ಕಡಿತದಿಂದ ಮಲೇರಿಯಾ ಹೆಚ್ಚಾಗಿ ಹರಡುತ್ತದೆ. ಆದ್ದರಿಂದ ನೀರು ನಿಲ್ಲದಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕಿದೆ ಎಂದು ತಿಳಿವಳಿಕೆ ನೀಡಿದರು.ಮಲೇರಿಯಾ ರೋಗದ ಮೊದಲ ಲಕ್ಷಣಗಳು ಸೌಮ್ಯವಾಗಿರಬಹುದು ಅನೇಕ ಜ್ವರ ಕಾಯಿಲೆಗಳಂತೆಯೇ ಇರುತ್ತವೆ. ಮಲೇರಿಯಾ ಎಂದು ಗುರುತಿಸುವಲ್ಲಿ ನಿಧಾನವಾದರೇ ತೊಂದರೆಯಾಗಬಹುದು. ಆದ್ದರಿಂದ ಜ್ವರ, ಚಳಿ, ತಲೆನೋವು ಮತ್ತು ವಾಂತಿ ಲಕ್ಷಣಗಳು ಕಂಡು ಬಂದ ಕೂಡಲೇ ಹತ್ತಿರ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದರೇ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಿಕೊಳ್ಳಬಹುದು ಎಂದರು.
ಮಲೇರಿಯಾ ಸೇರಿದಂತೆ ಎಲ್ಲಾ ರೋಗವಾಹಕ ಆಶ್ರಿತ ರೋಗಗಳಾದ ಡೆಂಘೀ ಜ್ವರ, ಚಿಕನ್‌ಗುನ್ಯಾ, ಆನೆಕಾಲು ರೋಗ, ಮಿದುಳು ಜ್ವರದ ಲಕ್ಷಣಗಳು, ಚಿಕಿತ್ಸೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸಂಜಯ್, ಜಿಲ್ಲಾ ಕೀಟಶಾಸ್ತ್ರಜ್ಞ ಜಾನೆಟ್ ಮೆನೆಜಿಸ್ ಸೇರಿದಂತೆ ಇತರರಿ ಇದ್ದರು.
ಹಳೆಬೂದನೂರಿನಲ್ಲಿ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಹಳೆಬೂದನೂರು ಗ್ರಾಮದಲ್ಲಿರುವ ಶ್ರೀವೆಂಕಟೇಶ್ವರ ಚಾರಿಟಬಲ್ ಟ್ರಸ್ಟ್ ವತಿಯಿಂದ ನಡದ ಶ್ರೀವೆಂಕಟೇಶ್ವರ ವಿದ್ಯಾನಿಕೇತನ ಶಾಲೆ, ಡಿಎಂಆರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ತಾರಾ ಕಣ್ಣಿನ ಆಸ್ಪತ್ರೆ, ಹಳೆಬೂದನೂರು ಗ್ರಾಪಂ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಮಂಡ್ಯ ರಕ್ತನಿಧಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳಿಗಾಗಿ ಆರೋಗ್ಯ ಉಚಿತ ತಪಾಸಣೆ, ಕಣ್ಣಿನ ತಪಾಸಣೆ ಶಿಬಿರ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ಮತ್ತು ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.ಶಿಬಿರ ಉದ್ಘಾಟಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಮಕ್ಕಳ ಶಾರೀರಿಕ ಮತ್ತು ದೃಷ್ಟಿ ಆರೋಗ್ಯ ತುಂಬಾ ಮಹತ್ವದ್ದು. ಇಂತಹ ಶಿಬಿರಗಳ ಮೂಲಕ ಗ್ರಾಮೀಣ ಪ್ರದೇಶದ ಜನರಿಗೆ ಅತ್ಯಂತ ಅಗತ್ಯವಾದ ಆರೋಗ್ಯ ಸೇವೆಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಮಂಡ್ಯ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ.ಮುರಳೀಧರ್ ಭಟ್, ಶಾಲೆಯ ಶಿಕ್ಷಕ ವೃಂದ, ಗ್ರಾಮ ಪಂಚಾಯ್ತಿ ಸದಸ್ಯರು ಮತ್ತು ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಿದರು.