ಬಾಲ್ಯ ವಿವಾಹ ನಿಯಂತ್ರಣ ಸಾಂಘಿಕ ಜವಾಬ್ದಾರಿ: ಡಾ. ಎಂ.ಆರ್. ರವಿ

| Published : Dec 06 2024, 09:00 AM IST

ಸಾರಾಂಶ

ಮಕ್ಕಳ ಹಿತಾಸಕ್ತಿಗೆ ಸಮಾಜದ ಎಲ್ಲ ಭಾಗಿದಾರರು ಒಟ್ಟಾಗಿ ಬೆರೆತು ಬಾಲ್ಯ ವಿವಾಹ ನಿಯಂತ್ರಣದ ದೃಢ ಸಂಕಲ್ಪ ಹೊಂದಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಸಾರ್ವಜನಿಕರೂ ಕೈಜೋಡಿಸಿ ಕೆಲಸ ನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ನಿರ್ದೇಶನಾಲಯದ ನಿರ್ದೇಶಕ ಡಾ. ಎಂ.ಆರ್. ರವಿ ಹೇಳಿದರು.

ಬಳ್ಳಾರಿ: ಸಮಾಜದಲ್ಲಿ ಪಿಡುಗಾಗಿ ಪರಿಗಣಿಸಿರುವ ಬಾಲ್ಯ ವಿವಾಹ ಪ್ರಕರಣಗಳ ನಿಯಂತ್ರಣವು ಸರ್ಕಾರ, ಸ್ಥಳೀಯ ಸಂಘ-ಸಂಸ್ಥೆಗಳ ಜತೆಗೆ ಪ್ರತಿಯೊಬ್ಬರ ಸಾಂಘಿಕ ಹಾಗೂ ಸಮುದಾಯದ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಕ್ಕಳ ನಿರ್ದೇಶನಾಲಯದ ನಿರ್ದೇಶಕ ಡಾ. ಎಂ.ಆರ್. ರವಿ ಹೇಳಿದರು.

ರೀಡ್ಸ್ ಸಂಸ್ಥೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಸಿಎಸಿಎಲ್-ಕೆ ಸಂಯುಕ್ತಾಶ್ರಯದಲ್ಲಿ ನಗರದ ಜಿಪಂ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ‘ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಹಾಗೂ ಬಾಲ್ಯವಿವಾಹ ತಡೆಗಟ್ಟುವಲ್ಲಿ ಸವಾಲುಗಳು ಮತ್ತು ಪರಿಹಾರಗಳು’ ಕುರಿತು ಏರ್ಪಡಿಸಿದ್ದ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಹಿತಾಸಕ್ತಿಗೆ ಸಮಾಜದ ಎಲ್ಲ ಭಾಗಿದಾರರು ಒಟ್ಟಾಗಿ ಬೆರೆತು ಬಾಲ್ಯ ವಿವಾಹ ನಿಯಂತ್ರಣದ ದೃಢ ಸಂಕಲ್ಪ ಹೊಂದಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಸಾರ್ವಜನಿಕರೂ ಕೈಜೋಡಿಸಿ ಕೆಲಸ ನಿರ್ವಹಿಸಿದಾಗ ಮಾತ್ರ ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಗಟ್ಟಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬಾಲ್ಯ ವಿವಾಹವು ಜ್ವಲಂತ ಸಮಸ್ಯೆಯಾಗಿ ಕಾಡುತ್ತಿದೆ. ಇದರಿಂದಾಗುವ ದುಷ್ಪರಿಣಾಮ ಹಾಗೂ ಕಾನೂನು ಕ್ರಮಗಳ ಕುರಿತು ಹಳ್ಳಿ-ಗ್ರಾಪಂ ಮಟ್ಟಗಳಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳುವ ಅವಶ್ಯಕತೆ ಇದ್ದು, ಬಾಲ್ಯವಿವಾಹ ಪ್ರಕರಣ ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಗೆ ಸಂಪರ್ಕಿಸಿ ಮಾಹಿತಿ ನೀಡುವ ಕುರಿತು ಅರಿವು ಮೂಡಿಸಬೇಕು ಎಂದು ತಿಳಿಸಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಮಾತನಾಡಿ, ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡುಬರುವ ಸ್ಥಳಗಳನ್ನು ಗುರುತಿಸಿ ಅವಲೋಕನ ಮಾಡಿ, ಬಾಲ್ಯ ವಿವಾಹ ನಿಷೇಧಿಸಲು ಕೈಗೊಳ್ಳಬೇಕಾದ ಕಾರ್ಯಗಳನ್ನು ಕ್ರಮಬದ್ಧವಾಗಿ ಅನುಸರಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳನ್ನು ನಿಯಂತ್ರಿಸಲು ವಿವಿಧ ಇಲಾಖೆಗಳ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಬೇಕು. ಸಾರ್ವಜನಿಕರಲ್ಲಿ ಹೆಚ್ಚಾಗಿ ಜಾಗೃತಿ ಮೂಡಿಸಬೇಕು ಎಂದರು.

ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಎಸ್. ಲೋಕೇಶ್ ಕುಮಾರ್ ಮಾತನಾಡಿ, ಬಾಲ್ಯವಿವಾಹವು ಕಾನೂನು ವಿರುದ್ಧವಾಗಿದೆ. ಅಂತಹ ಪ್ರಕರಣಗಳಿಗೆ ಶಿಕ್ಷೆ ಇದ್ದು, ಜನ ಸಾಮಾನ್ಯರು ಎಚ್ಚೆತ್ತುಕೊಳ್ಳಬೇಕಿದೆ ಎಂದರು. ಶಿಕ್ಷಣದಿಂದ ಮಾತ್ರ ಬಾಲ್ಯ ವಿವಾಹ ಪ್ರಕರಣ ನಿಯಂತ್ರಿಸಲು ಸಾಧ್ಯವಾಗಲಿದ್ದು, ಈ ನಿಟ್ಟಿನಲ್ಲಿ ಮಕ್ಕಳಿಗೆ ಶಿಕ್ಷಣ ಒದಗಿಸಿ ಸಾಮಾಜಿಕ ಪಿಡುಗುಗಳ ಬಗ್ಗೆ ಅರಿವು ಮೂಡಿಸೋಣ ಎಂದು ಕರೆ ನೀಡಿದರು.

ಇದೇ ವೇಳೆ ಗಣ್ಯರು “ನಿಲ್ಲಿಸಿ ಬಾಲ್ಯ ವಿವಾಹ” ಎನ್ನುವ ಫಲಕ ಬಿಡುಗಡೆಗೊಳಿಸಿದರು. ಪೊಲೀಸ್ ಇಲಾಖೆ ವತಿಯಿಂದ ಬಾಲ್ಯ ವಿವಾಹ ತಡೆ ವಿಡಿಯೋ ತುಣುಕುಗಳ ಪ್ರದರ್ಶಿಸಲಾಯಿತು. ಬಳಿಕ 2025ರ ಮಕ್ಕಳ ಸ್ನೇಹ ಹಾಗೂ ವಾಲ್ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್.ಕೆ.ಎಚ್., ರೀಡ್ಸ್ ಸಂಸ್ಥೆಯ ಅಧ್ಯಕ್ಷ ಬಿ. ಸಿದ್ದರಾಮಯ್ಯ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಮೈದೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ, ಮೈಸೂರಿನ ಆರ್‌ಎಲ್‌ಎಚ್‌ಪಿಯ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಸಿಎಸಿಎಲ್‌ಕೆ ಸಂಚಾಲಕಿ ಸರಸ್ವತಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಎಚ್.ಸಿ. ರಾಘವೇಂದ್ರ, ರೀಡ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸಿ. ತಿಪ್ಪೇಶಪ್ಪ, ಸಂಯೋಜಕ ಕೆ.ಎಂ. ತಿಪ್ಪೇಸ್ವಾಮಿ, ಯೋಜನಾ ವ್ಯವಸ್ಥಾಪಕರಾದ ಕೆ. ಸೀತಾಮಹಾಲಕ್ಷಿ, ಡಿ.ಆರ್. ಜಗತಾಪ್ ಉಪಸ್ಥಿತರಿದ್ದರು.