ಸಾರಾಂಶ
ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ । ಸವಲತ್ತುಗಳ ವಿತರಣೆ, ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಬಾಗಿ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲಾ ಕೇಂದ್ರದಲ್ಲಿ ಭಾನುವಾರ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಯೋಜನೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ.ನಗರದ ಜಿಲ್ಲಾ ಆಟದ ಮೈದಾನದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ವಿವಿಧ ಇಲಾಖೆಗಳ ಸಚಿವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧ್ಯಕ್ಷತೆಯಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲೆಯ ಶಾಸಕರು ಸಹ ಭಾಗವಹಿಸಿದ್ದರು.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ರಸ್ತೆ ಸಾರಿಗೆ ನಿಗಮ, ರಾಜ್ಯ ಪೊಲೀಸ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೆಸ್ಕಾಂ, ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ತೆ, ಆಯುಷ್ ಇಲಾಖೆ, ಕೃಷಿ ಇಲಾಖೆ, ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಗುವುದು.ಜಿಲ್ಲೆಯಲ್ಲಿ 392.84 ಕೋಟಿ ರು.ಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ, 244 ಕೋಟಿ ರು.ಗಳ ಕಾಮಗಾರಿಯನ್ನು ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ. 15 ಸಾವಿರ ಮಂದಿ: ಜಿಲ್ಲಾ ಆಟದ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದ ಹಿನ್ನಲೆಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಸುಮಾರು 10 ಸಾವಿರ ಆಸನದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸುಮಾರು 15 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಡಳಿತ ಅಂದಾಜು ಮಾಡಿದೆ.ಜಿಲ್ಲೆಯ ವಿವಿಧೆಡೆಯಿಂದ ಫಲಾನುಭವಿಗಳು ಆಗಮಿಸಲು ಸುಮಾರು 300 ಕೆಎಸ್ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಿ ಕೊಳ್ಳಲಾಗಿದೆ. ಕಾರ್ಯಕ್ರಮ ಮಧ್ಯಾಹ್ನ ನಡೆಯುವುದರಿಂದ ಇಲ್ಲಿ ನೆರವೇರಲಿರುವ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಯನ್ನು ಸಹ ಮಾಡಲಾಗಿದೆ.ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿ ಜಿಲ್ಲೆಯ ವಿವಿಧೆಡೆಯಿಂದ ಶನಿವಾರವೇ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಕಾರ್ಯಕ್ರಮ ನಡೆಯಲಿರುವ ಸ್ಧಳದ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಬಾರದೆಂಬ ಉದ್ದೇಶದಿಂದ ಕೆಲವೆಡೆ ನೋ ಪಾರ್ಕಿಂಗ್, ನೋ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ.---- ಬಾಕ್ಸ್ -----ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಚಿಕ್ಕಮಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಐಡಿಎಸ್ ಜಿ ಕಾಲೇಜಿನ ಹೆಲಿಪ್ಯಾಡಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸುವ ಮುಖ್ಯಮಂತ್ರಿಗಳು ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಧ್ಯಾಹ್ನ 12 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಯಿಂದ ನಗರದ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಿರುವ ಚಿಕ್ಕಮಗಳೂರು ಗ್ಯಾರಂಟಿ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಯೋಜನೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ಹಾಗೂ ಸವಲತ್ತುಗಳ ವಿತರಣಾ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 4 ಗಂಟೆಗೆ ಐಡಿಎಸ್ ಜಿ ಕಾಲೇಜು ಮೈದಾನದ ಹೆಲಿಪ್ಯಾಡಿನಿಂದ ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.-----2 ಕೆಸಿಕೆಎಂ 1ಗ್ಯಾರಂಟಿ ಸಮಾವೇಶದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಶನಿವಾರ ನಡೆಯಿತು.