ಸಾರಾಂಶ
- ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದು, ಯೋಜನೆ ಜಾರಿಯಾದಲ್ಲಿ ಆರ್ಥಿಕ ಬಲವರ್ಧನೆ । ಸಂಸದೆ ಡಾ.ಪ್ರಭಾ - - - ಕನ್ನಡಪ್ರಭ ವಾರ್ತೆ, ದಾವಣಗೆರೆ
ಜಿಲ್ಲೆಯ ಹರಿಹರ, ಹೊನ್ನಾಳಿ ಹಾಗೂ ವಿಜಯ ನಗರ ಜಿಲ್ಲೆಯ ಹರಪನಹಳ್ಳಿ ತಾಲೂಕುಗಳ ಹಾದುಹೋಗಿರುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗಮನಕ್ಕೆ ತರಲಾಗಿದೆ. ಯೋಜನೆ ಕಾರ್ಯರೂಪಕ್ಕೆ ಬಂದಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಬಲವರ್ಧನೆ ಆಗಲಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.ನಗರದ ಗೃಹ ಕಚೇರಿ "ಶಿವ ಪಾರ್ವತಿ "ಯಲ್ಲಿ ಗುರುವಾರ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಹೊನ್ನಾಳಿ, ಹರಿಹರ, ಹರಪನಹಳ್ಳಿ ತಾಲೂಕುಗಳನ್ನು ಹಾದುಹೋಗಿರುವ ರಾಜ್ಯ ಹೆದ್ದಾರಿಯನ್ನು ಆದಷ್ಟು ಬೇಗನೆ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸುವಂತೆ ಕೇಂದ್ರ ಸಚಿವ ಗಡ್ಕರಿ ಅವರಿಗೆ ಮನವಿ ಮಾಡಲಾಗಿದೆ ಎಂದರು.
ಮರಿಯಮ್ಮನಹಳ್ಳಿಯಿಂದ ಶಿವಮೊಗ್ಗಕ್ಕೆ 182 ಕಿಮೀ ಅಂತರವಿದೆ. ಇದು ರಾಜ್ಯ ಹೆದ್ದಾರಿ-25 ಆಗಿದ್ದು, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಹರಿಹರ, ವಿಜಯ ನಗರ ಜಿಲ್ಲೆ ಹರಪನಹಳ್ಳಿ ತಾಲೂಕನ್ನು ಹಾದುಹೋಗಿದೆ. ಈ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿ ಆಗುವುದರಿಂದ ಮಲೆನಾಡು ಹಾಗೂ ಬಯಲುಸೀಮೆ ಜಿಲ್ಲೆಗಳ ಜನರಿಗೆ ಸಾಕಷ್ಟು ಅನುಕೂಲ ಆಗಲಿದೆ ಎಂದು ಹೇಳಿದರು.ಅಲ್ಲದೇ, ಮರಿಯಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ-50 ಹಾಗೂ ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ-69 ಎರಡೂ ಹೆದ್ದಾರಿಗಳನ್ನು ಸೇರಿಸುವ ರಾಜ್ಯ ಹೆದ್ದಾರಿ ಇದಾಗಿದೆ. ವಿಜಯ ನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ 44 ಕಿಮೀ, ಜಿಲ್ಲೆಯ ಹರಿಹರ ತಾಲೂಕಿನ 37 ಕಿಮೀ, ಹೊನ್ನಾಳಿ ತಾಲೂಕಿನ 31 ಕಿಮೀ ಸೇರಿದಂತೆ ಒಟ್ಟು 112 ಕಿಮೀ ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಈಗಾಗಲೇ ಈ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಂಸದರ ಗಮನಕ್ಕೆ ತಂದರು.
ಲೋಕೋಪಯೋಗಿ ಕಾರ್ಯನಿರ್ವಾಹಕ ಅಭಿಯಂತರ ನರೇಂದ್ರಬಾಬು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವಮೂರ್ತಿ ಇದ್ದರು.- - -
ಕೋಟ್ 2016ರಲ್ಲಿ ₹800 ಕೋಟಿ ವೆಚ್ಚದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ. 2023ಕ್ಕೆ ಇದರ ವೆಚ್ಚವು ₹2017 ಕೋಟಿಗೆ ಏರಿಕೆಯಾಗಿದೆ. ಇದನ್ನು ಶೀಘ್ರವೇ ಅನುಮೋದನೆಗೆ ಮೊನ್ನೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಗಮನಕ್ಕೆ ತರಲಾಗಿದೆ. ಈ ಯೋಜನೆಯಿಂದ ಸಾಕಷ್ಟು ಅನುಕೂಲವಾಗಲಿದೆ- ಡಾ.ಪ್ರಭಾ ಮಲ್ಲಿಕಾರ್ಜುನ, ಸಂಸದೆ
- - --4ಕೆಡಿವಿಜಿ7, 8:
ದಾವಣಗೆರೆಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಗೃಹ ಕಚೇರಿಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.