ಶಾಂತಿ, ಸೌಹಾರ್ದಯುತ ಗಣೇಶೋತ್ಸವಕ್ಕೆ ಸಹಕರಿಸಿ: ಜಿಲ್ಲಾಧಿಕಾರಿ ನಿತೀಶ್ ಕೆ.

| Published : Aug 17 2025, 01:34 AM IST

ಶಾಂತಿ, ಸೌಹಾರ್ದಯುತ ಗಣೇಶೋತ್ಸವಕ್ಕೆ ಸಹಕರಿಸಿ: ಜಿಲ್ಲಾಧಿಕಾರಿ ನಿತೀಶ್ ಕೆ.
Share this Article
  • FB
  • TW
  • Linkdin
  • Email

ಸಾರಾಂಶ

ಇದೇ ಆ.27ರಂದು ಜಿಲ್ಲೆಯಲ್ಲಿ ಶ್ರೀಗೌರಿ ಗಣೇಶ ಚತುರ್ಥಿ ಹಬ್ಬವನ್ನು ಅರ್ಥಪೂರ್ಣವಾಗಿ, ಶಾಂತಿ ಸೌಹಾರ್ದಯುತವಾಗಿ ಆಚರಿಸಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ.ಅವರು ಹೇಳಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಇದೇ ಆ.27ರಂದು ಜಿಲ್ಲೆಯಲ್ಲಿ ಶ್ರೀಗೌರಿ ಗಣೇಶ ಚತುರ್ಥಿ ಹಬ್ಬವನ್ನು ಅರ್ಥಪೂರ್ಣವಾಗಿ, ಶಾಂತಿ ಸೌಹಾರ್ದಯುತವಾಗಿ ಆಚರಿಸಲು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ.ಅವರು ಹೇಳಿದರು.

ಸ್ಥಳೀಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಾಂತಿಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಶನಿವಾರ ಮಾತನಾಡಿದ ಅವರು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಹಬ್ಬವನ್ನು ಸಂಭ್ರಮದಿಂದ ಆಚರಿಸುವಂತೆ ವಿವಿಧ ಸಮಿತಿ ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಗಳು ತಿಳಿಸಿದರು.

ಹಬ್ಬದಲ್ಲಿ ಪಿಒಪಿ ಹಾಗೂ ರಾಸಾಯನಿಕ ಬಣ್ಣಗಳ ಮಿಶ್ರಿತ ಮೂರ್ತಿಗಳನ್ನು ಪ್ರತಿಷ್ಠಾಪಿಸದೇ ಪರಿಸರ ಸ್ನೇಹಿ ವಿಗ್ರಹಗಳನ್ನು ಸ್ಥಾಪಿಸಬೇಕು. ಜಿಲ್ಲೆಯಾದ್ಯಂತ ಮಣ್ಣಿನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಸ್ಥಾಪಿಸಿ ಸರ್ಕಾರ ನಿಗದಿಪಡಿಸಿದ ನಿಯಮಗಳನ್ನು ಪಾಲಿಸಬೇಕು ಎಂದು ಡಿಸಿ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಪ್ರತಿಮೆಯನ್ನು ಸಾರ್ವಜನಿಕ ರಸ್ತೆಯಲ್ಲಿ ಪ್ರತಿಷ್ಠಾಪನೆ ಮಾಡಬಾರದು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಭಾವೈಕ್ಯತೆಯಿಂದ ಹಬ್ಬ ಆಚರಿಸಿ: ರಾಯಚೂರಿನ ಎಲ್ಲ ಸಮಾಜ ಭಾಂದವರು ಭಾವೈಕ್ಯತೆಯಿಂದ ಎಲ್ಲರೂ ಒಡಗೂಡಿ ಹಬ್ಬ ಆಚರಿಸಬೇಕು. ಧ್ವನಿವರ್ಧಕ ಗಳಿಂದ ಯಾರಿಗೂ ಸಹ ತೊಂದರೆಯಾಗಬಾರದು. ಹಿರಿಯ ನಾಗರಿಕರು, ಮಕ್ಕಳು, ಪ್ರಾಣಿಗಳಿಗೆ ತೊಂದರೆಯಾಗದಂತೆ ಶ್ರೀ ಗಣೇಶ ಮಂಡಳಿಗಳು ಮಾರ್ಗ ಸೂಚಿ ಪಾಲನೆಯ ಬಗ್ಗೆ ನಿಗಾವಹಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ವಿವಿಧ ಸಮಾಜದ ಮುಖಂಡರಲ್ಲಿ ಕೋರಿದರು.

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಎಲ್ಲರೂ ತಪ್ಪದೇ ಪೂರ್ವ ಪರವಾನಿಗೆಯನ್ನು ಸಂಬಂಧಿಸಿದ ಇಲಾಖೆಯವರಿಂದ ಪಡೆಯಬೇಕು. ನಿಗದಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು. ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ ನಿಯಮಾನುಸಾರ ಪರವಾನಿಗೆಯನ್ನು ನೀಡಲು ಕ್ರಮ ವಹಿಸುತ್ತವೆ. ರಾತ್ರಿ 10.30ರೊಳಗಾಗಿ ವಿಗ್ರಹಗಳನ್ನು ವಿಸರ್ಜನೆ ಮಾಡುವಂತೆ ಸಮಯ ನಿಗದಿಗೊಳಿಸಲಾಗಿದೆ. ಅದರಂತೆ ನಿಯಮಾನುಸಾರ ವಿಸರ್ಜನೆ ಮಾಡಬೇಕು. ಶಬ್ದ ಮಾಲಿನ್ಯ ಮಾಡುವ ಬೃಹತ್ ಧ್ವನಿವರ್ಧಕಗಳನ್ನು ನಿಷೇಧಿಸಲಾಗಿದ್ದು, ಮಾರ್ಗಸೂಚಿಯನ್ವಯ ಧ್ವನಿವರ್ಧಕ ಬಳಸಬೇಕು. ನಿಯಮ ಉಲ್ಲಂಘಿಸಿದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

ಗಣೇಶ ವಿಸರ್ಜನೆಯ ದಿನಗಳಂದು ವಿದ್ಯುತ್ ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಪೂರೈಸಲು ಜೆಸ್ಕಾಂ ಇಲಾಖೆ ಕ್ರಮ ವಹಿಸಬೇಕು. ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಗಣೇಶ ವಿಸರ್ಜನೆಯ ದಿನದಂದು ಸಂಚಾರ ವ್ಯವಸ್ಥೆಗೆ ಅಡೆ ತಡೆಯಾಗದಂತೆ ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಸಹಕರಿಸಬೇಕು. ಅಲ್ಲದೆ ಅಗತ್ಯವಿರುವ ಕಡೆ ಸಿ.ಸಿ.ಕ್ಯಾಮರಾಗಳನ್ನು ಆಯೋಜಕರು ಮತ್ತು ಸಂಬಂಧಿತ ಇಲಾಖೆಗಳು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೊಹಪಾತ್ರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ ಜಿ.,ಮುಖಂಡರಾದ ರವೀಂದ್ರ ಜಲ್ದಾರ್ , ಶ್ರೀನಿವಾಸ ಪತಂಗೆ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಎರಡನೇ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಮಾಜದ ಮುಖಂಡರು, ಗಜಾನನ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.