ಸಾರಾಂಶ
ರೈತರು ಮತ್ತು ಹೈನುಗಾರರು ತಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಹಾಕಿಸುವ ಮೂಲಕ ಸಹಕರಿಸಬೇಕು ಎಂದು ಕಾಗಲವಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕಾಗಲವಾಡಿ ಚಂದ್ರು ಹೇಳಿದರು. ಚಾಮರಾಜನಗರದಲ್ಲಿ 6ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಪಲ್ಸ್ ಪೊಲೀಯೋ ಮಾದರಿಯಲ್ಲಿ ಕಾಲುಬಾಯಿ ರೋಗವನ್ನು ದೇಶದಿಂದ ತೊಲಗಿಸಲು ರೈತರು ಮತ್ತು ಹೈನುಗಾರರು ತಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆ ಹಾಕಿಸುವ ಮೂಲಕ ಸಹಕರಿಸಬೇಕು ಎಂದು ಕಾಗಲವಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕಾಗಲವಾಡಿ ಚಂದ್ರು ಹೇಳಿದರು.ತಾಲೂಕಿನ ಕಾಗಲವಾಡಿ ಪಶು ಚಿಕಿತ್ಸಾಲಯದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಕಾಗಲವಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಅ.21ರಿಂದ ನ.20 ರವರಗೆ ನಡೆಯುವ 6ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯಡಿಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲೆಯಾದ್ಯಂತ ಆರನೇಯ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಅ.21 ರಿಂದ ನ.20 ವರಗೆ ಹಮ್ಮಿಕೊಂಡಿದೆ. ಇಂತಹ ಲಸಿಕಾ ಅಭಿಯಾನವನ್ನು ರೈತರು ಸದುಪಯೋಗಪಡಿಸಿಕೊಂಡು ಕಾಲಕಾಲಕ್ಕೆ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಕಾಲುಬಾಯಿ ರೋಗವನ್ನು ತಡೆಗಟ್ಟಬೇಕು ಎಂದರು. ಚಾಮುಲ್ ನಿರ್ದೇಶಕ ಎಚ್.ಎಸ್.ಬಸವರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಲುಬಾಯಿ ರೋಗ ಕಾಣಿಸಿಕೊಂಡ ಹಸು ತುಂಬಾ ಸೊರಗಿ ಹೋಗುತ್ತದೆ. ಹಾಲಿನ ಇಳುವರಿ ಕಡಿಮೆಯಾಗುತ್ತದೆ. ಕೆಲವು ಹಸುಗಳು ಬದುಕುವುದೇ ಕಷ್ಟ ಆಗುತ್ತದೆ. ಹಾಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಹಮ್ಮಿಕೊಂಡಿರುವ ಕಾಲುಬಾಯಿ ಲಸಿಕಾ ಅಭಿಯಾನದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಡಾ.ಹನುಮೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಚಾಮುಲ್ ನಿರ್ದೇಶಕ ಸದಾಶಿವಮೂರ್ತಿ, ಡೈರಿ ಉಪಾಧ್ಯಕ್ಷ ಮಹದೇವಸ್ವಾಮಿ, ಗ್ರಾಪಂ ಅಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷೆ ಲಕ್ಷ್ಮೀ, ನಿವೃತ್ತ ಅಧಿಕಾರಿ ಮಹದೇವಯ್ಯ, ಸಹಾಯಕ ನಿರ್ದೇಶಕ ಡಾ.ನಟರಾಜು ಡಾ.ಮನೋಹರ್, ಡಾ.ಲಕ್ಷ್ಮೀ ಸಾಗರ್, ಡಾ.ನವೀನ್, ಇಂದ್ರಮ್ಮ ಹಾಜರಿದ್ದರು.