ಸ್ಥಳೀಯ ಶಾಸಕ ದೇವೇಂದ್ರಪ್ಪ ಅವರೊಂದಿಗೆ ಕೈ ಜೋಡಿಸಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಹಾಗೂ ಕ್ಷೇತ್ರದ ಶಾಸಕರನ್ನು ಒಳಗೊಂಡಂತೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಮುಜುರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೆ.ಎಸ್.ಬಸವಂತಪ್ಪ ಭರವಸೆ ನೀಡಿದರು.
ಕನ್ನಡಪ್ರಭ ವಾರ್ತೆ ಜಗಳೂರು
ಸ್ಥಳೀಯ ಶಾಸಕ ದೇವೇಂದ್ರಪ್ಪ ಅವರೊಂದಿಗೆ ಕೈ ಜೋಡಿಸಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಹಾಗೂ ಕ್ಷೇತ್ರದ ಶಾಸಕರನ್ನು ಒಳಗೊಂಡಂತೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಮುಜುರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೆ.ಎಸ್.ಬಸವಂತಪ್ಪ ಭರವಸೆ ನೀಡಿದರು.ಸ್ವಾಂತ್ರ್ಯ ದಿನಾಚರಣೆ ಅಂಗವಾಗಿ ವಿಜಯನಗರ ಜಿಲ್ಲೆಗೆ ಆಗಮಿಸಿದ್ದ ಸಚಿವರು ದಾವಣಗೆರೆಗೆ ಸಂಚರಿಸುವ ಸಂದರ್ಭದಲ್ಲಿ ಜಗಳೂರು ಪಟ್ಟಣಕ್ಕೆ ಭೇಟಿ ನೀಡಿ, ಶಾಸಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಪೌರಕಾರ್ಮಿಕರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಜಗಳೂರು ಕ್ಷೇತ್ರ, ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರು, ರಸ್ತೆ, ದ್ವಿಪಥ ರಸ್ತೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯವಿರುವ ಹೆಚ್ಚಿನ ಅನುದಾನ ತರುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಸಾಮಾನ್ಯ ಕಾರ್ಯಕರ್ತನಾಗಿ, ಪೋಸ್ಟರ್- ಬ್ಯಾನರ್ ಕಟ್ಟುವ ಮೂಲಕ ಪಕ್ಷಕ್ಕಾಗಿ ಹೋರಾಟ ಮಾಡಿದ ತನಗೆ ಇಂದು ಕಾಂಗ್ರೆಸ್ ಪಕ್ಷ ಶಾಸಕ ಹಾಗೂ ಸಚಿವ ಸ್ಥಾನ ನೀಡಿದೆ. ಸಾಮಾನ್ಯ ವ್ಯಕ್ತಿಗೂ ಅಧಿಕಾರ ನೀಡುವ ಸಾಮಾಜಿಕ ನ್ಯಾಯ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್, ಪ್ರಿಯಾಂಕಾ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಧನ್ಯವಾದ ಅರ್ಪಿಸಿದರು.ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಹೊಣೆ ಹೊತ್ತಿದ್ದೇನೆ. ಈ ವ್ಯಾಪ್ತಿಗೆ ಬರುವ ಹರಪನಹಳ್ಳಿ ಹಾಗೂ ಜಗಳೂರು ಕ್ಷೇತ್ರದ ಅರಸೀಕೆರೆ ಹೋಬಳಿ ಸೇರಿದಂತೆ ಶೋಷಿತ ಮತ್ತು ಹಿಂದುಳಿದ ಹಳ್ಳಿಗಳಿಗೆ ಹೆಚ್ಚಿನ ಅನುದಾನ ನೀಡಲು ವಿಶೇಷ ಗಮನ ಹರಿಸಲಾಗುವುದು ಎಂದರು.
ಜಗಳೂರು ಕ್ಷೇತ್ರದ ಶಾಸಕ ದೇವೇಂದ್ರಪ್ಪ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿ, ಕಸ ಗುಡಿಸಿದ ಒಬ್ಬ ಸಾಮಾನ್ಯ ಕಾರ್ಯಕರ್ತರನ್ನು ಶಾಸಕರನ್ನಾಗಿ ಮಾಡಿ ಮಂತ್ರಿ ಸ್ಥಾನ ನೀಡಿದ್ದು ಕಾಂಗ್ರೆಸ್ ಸರ್ಕಾರ. ಎಸ್ಸಿ,ಎಸ್ಟಿ, ಹಿಂದುಳಿದ ಸೇರಿದಂತೆ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಮುನ್ನಡೆ ನೀಡಿದೆ. ನೂತನ ಸಚಿವರು ಜೋಡೆತ್ತುಗಳಾಗಿ ಜಗಳೂರು ಕ್ಷೇತ್ರದ ಅಭಿವೃದ್ಧಿ ಮಾಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಕೆ.ಪಿ.ಪಾಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಶಿರ್ ಅಹಮ್ಮದ್, ಕಾಂಗ್ರೆಸ್ ಕಾರ್ಯಕರ್ತರು, ಜಿ.ಎಸ್.ಶಂಭುಲಿಂಗಪ್ಪ, ತಿಪ್ಪೇಸ್ವಾಮಿ, ಮಂಜುನಾಥ್, ಮಹೇಶ್ವರಪ್ಪ ಸೇರಿದಂತೆ ದಲಿತ ಸಮಾಜದ ಮುಖಂಡರ ವಿವಿಧ ಜನಪ್ರತಿನಿಧಿಗಳು ಹಾಗೂ ನೂರಾರು ಬೆಂಬಲಿಗರು ಉಪಸ್ಥಿತರಿದ್ದರು.