೬೩ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕನ್ನಡಫ್ರಭ ವಾರ್ತೆ ತಿಪಟೂರು
೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ ಅಥವಾ ತಾಲೂಕು ಮಟ್ಟದಲ್ಲಿ ಅತ್ಯುತ್ತಮ ಸ್ಥಾನ ಗಳಿಸಲು ಕೇವಲ ಒಬ್ಬಿಬ್ಬರ ಪ್ರಯತ್ನದಿಂದ ಸಾಧ್ಯವಿಲ್ಲ. ಬದಲಾಗಿ ತಾಲೂಕು ಆಡಳಿತ, ಶಿಕ್ಷಣ ಇಲಾಖೆ, ಪೋಷಕರ ಸಹಕಾರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದ ಮಾತ್ರ ದೊಡ್ಡ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.ನಗರದ ಶ್ರೀ ವಿದ್ಯಾಪೀಠ ವಿದ್ಯಾಸಂಸ್ಥೆಯ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ತಾಲೂಕು ಆಡಳಿತದ ವತಿಯಿಂದ ೨೦೨೫ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ೬೦೦ಕ್ಕೂ ಹೆಚ್ಚು ಅಂಕ ಗಳಿಸಿದ ೬೩ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಶೇ.೧೦೦ರಷ್ಟು ಫಲಿತಾಂಶ ದಾಖಲಿಸಿದ ೩೭ ಶಾಲೆಗಳಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಈಗಾಗಲೇ ಉತ್ತಮವಾಗಿ ಓದುವ ವಿದ್ಯಾರ್ಥಿಗಳನ್ನು ಪ್ರತಿಭಾವಂತರನ್ನಾಗಿ ರೂಪಿಸುವುದಷ್ಟೇ ಶಿಕ್ಷಣದ ಉದ್ದೇಶವಲ್ಲ. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನೂ ಪ್ರತಿಭಾವಂತರನ್ನಾಗಿ ರೂಪಿಸುವುದು ಶಿಕ್ಷಣದ ನಿಜವಾದ ಆಶಯವಾಗಿದೆ. ಮುಂದಿನ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಹಾಗೂ ಶಿಕ್ಷಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಸರ್ಕಾರವು ಮಕ್ಕಳ ವಿದ್ಯಾಭ್ಯಾಸಕ್ಕೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಸಾರ್ವಜನಿಕರು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡುವುದರ ಜೊತೆಗೆ ನೀರಾವರಿ ಹಾಗೂ ಕೃಷಿ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಗುಲ್ಬರ್ಗದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಾಯದ ನಿವೃತ್ತ ಕುಲಪತಿ ಹಾಗೂ ದಾನಿ ಮ.ನಾ.ಸುಧೀಂದ್ರರಾವ್ ತಾಲೂಕಿನ ಆರು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಟಿವಿಗಳನ್ನು ಕೊಡುಗೆಯಾಗಿ ನೀಡಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಸಂದರ್ಭದಲ್ಲಿ ಎದುರಾಗುವ ಅಡೆತಡೆಗಳನ್ನು ಮೆಟ್ಟಿ ನಿಂತು ಕಲಿಕೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಸಣ್ಣಪುಟ್ಟ ಆಸೆಗಳಿಗೆ ಸೀಮಿತವಾಗದೆ ದೊಡ್ಡ ಕನಸುಗಳನ್ನು ಕಂಡು ಅವುಗಳ ಸಾಕಾರಕ್ಕಾಗಿ ಶ್ರಮಿಸಬೇಕು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಕಾರ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಶಿಕ್ಷಣಕ್ಕೆ ಅಪಾರ ಶಕ್ತಿಯಿದ್ದು, ಉತ್ತಮ ವಿದ್ಯಾಭ್ಯಾಸದಿಂದ ಜೀವನದಲ್ಲಿ ಹಲವು ಅವಕಾಶಗಳನ್ನು ಪಡೆದುಕೊಳ್ಳಬಹುದು. ಹೆಚ್ಚು ಹೆಚ್ಚು ವಿದ್ಯಾಭ್ಯಾಸ ಮಾಡಿದಂತೆ ಉದ್ಯೋಗಾವಕಾಶಗಳೂ ಹೆಚ್ಚಾಗಲಿವೆ. ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮೋಹನ್ಕುಮಾರ್, ಎಚ್.ಎಮ್. ಸುದರ್ಶನ್, ಎಂ.ಎನ್.ಕಾಂತರಾಜು, ಪೌರಯುಕ್ತ ವಿಶ್ವೇಶ್ವರಬದರಗಡೆ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಮಣಿ, ಅಧ್ಯಕ್ಷ ರಾಜಶೇಖರ್.ಎಸ್.ಕೆ, ರಮೇಶ್.ಎಚ್.ಇ., ದಿನೇಶ್.ಎನ್. ಪದ್ಮರಾಜ್.ಎಚ್.ಎಂ., ತಾ ದೈಹಿಕ ಶಿಕ್ಷಣ ನಿರ್ದೇಶಕಿ ವೇದಾವತಿ, ದಕ್ಷಿಣಮೂರ್ತಿ, ಜಗದೀಶ್, ಕೆ.ಎನ್.ರೇಣುಕಯ್ಯ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು, ಶಿಕ್ಷಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.