ಮದ್ಯವ್ಯಸನದಿಂದ ವ್ಯಕ್ತಿಗಳನ್ನು ಹೊರತಂದು ಉತ್ತಮ ಜೀವನ ನಡೆಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮದ್ಯವರ್ಜನ ಶಿಬಿರಗಳನ್ನು ಆಯೋಜಿಸುತ್ತಿದೆ. ಈ ಕಾರ್ಯಕ್ರಮಗಳ ಯಶಸ್ಸಿಗೆ ಯೋಜನೆಯ ಕಾರ್ಯಕರ್ತರು, ಜನಜಾಗೃತಿ ವೇದಿಕೆಯ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಕುಟುಂಬಸ್ಥರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
ಕನ್ನಡಪ್ರಭ ವಾರ್ತೆ ಹೊಸಕೋಟೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸುವ ಮದ್ಯವರ್ಜನ ಶಿಬಿರಗಳು ಗ್ರಾಮೀಣ ಭಾಗದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಮದ್ಯವ್ಯಸನದಿಂದ ದೂರ ಉಳಿಯಲು ಶಿಬಿರಾರ್ಥಿಗಳಿಗೆ ಕುಟುಂಬಸ್ಥರು ನಿರಂತರವಾಗಿ ಸಹಕಾರ ನೀಡಬೇಕು ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಕುರುಬರಹಳ್ಳಿ ವೆಂಕಟೇಶ್ ತಿಳಿಸಿದರು.ತಾಲೂಕಿನ ನಂದಗುಡಿಯ ಅಂಬೇಡ್ಕರ್ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಈ ಹಿಂದೆ ತಾಲೂಕಿನಲ್ಲಿ ಹಲವಾರು ಮದ್ಯವರ್ಜನ ಶಿಬಿರಗಳನ್ನು ಆಯೋಜಿಸಲಾಗಿದೆ. ಆದರೆ ಶಿಬಿರದಲ್ಲಿ ಭಾಗವಹಿಸಿದ ಎಲ್ಲರೂ ಮದ್ಯವ್ಯಸನದಿಂದ ಸಂಪೂರ್ಣವಾಗಿ ದೂರ ಉಳಿಯಲು ಸಾಧ್ಯವಾಗುತ್ತಿಲ್ಲ. ಬೆರಳೆಣಿಕೆಯಷ್ಟು ಮಂದಿ ಮಾತ್ರ ವ್ಯಸನದಿಂದ ದೂರ ಉಳಿದು ಉತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿ ಪ್ರಯತ್ನಗಳ ಅಗತ್ಯವಿದೆ. ಮದ್ಯವ್ಯಸನವು ವ್ಯಕ್ತಿಯ ಆರೋಗ್ಯದ ಮೇಲೆ ಮಾತ್ರವಲ್ಲದೆ, ಇಡೀ ಕುಟುಂಬದ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಹಾಗೂ ಸಾಮಾಜಿಕ ಬದುಕಿನ ಮೇಲೂ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ವ್ಯಸನಮುಕ್ತರಾಗಲು ಬಯಸುವವರಿಗೆ ಕುಟುಂಬದ ಸದಸ್ಯರು ಪ್ರೀತಿ, ತಾಳ್ಮೆ ಮತ್ತು ಪ್ರೋತ್ಸಾಹದೊಂದಿಗೆ ಬೆಂಬಲ ನೀಡಬೇಕು. ಶಿಬಿರದಲ್ಲಿ ದೊರೆಯುವ ಮಾರ್ಗದರ್ಶನವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ತರಬಹಳ್ಳಿ ಹರೀಶ್ ಮಾತನಾಡಿ, ಮದ್ಯವ್ಯಸನದಿಂದ ವ್ಯಕ್ತಿಗಳನ್ನು ಹೊರತಂದು ಉತ್ತಮ ಜೀವನ ನಡೆಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮದ್ಯವರ್ಜನ ಶಿಬಿರಗಳನ್ನು ಆಯೋಜಿಸುತ್ತಿದೆ. ಈ ಕಾರ್ಯಕ್ರಮಗಳ ಯಶಸ್ಸಿಗೆ ಯೋಜನೆಯ ಕಾರ್ಯಕರ್ತರು, ಜನಜಾಗೃತಿ ವೇದಿಕೆಯ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಕುಟುಂಬಸ್ಥರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಮದ್ಯವ್ಯಸನದ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು. ನವೆಂಬರ್ ತಿಂಗಳಿನಲ್ಲಿ ನಡೆಯುವ ಈ ಶಿಬಿರಕ್ಕೆ ಮದ್ಯವಸನಿಗಳನ್ನು ಕುಟುಂಬಸ್ಥರೇ ಸ್ವಯಂ ಪ್ರೇರಿತವಾಗಿ ದಾಖಲು ಮಾಡುವಂತಾಗಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪದ್ಮಯ್ಯ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ತರಬಹಳ್ಳಿ ಹರೀಶ್, ಸೂಲಿಬೆಲೆ ಕೃಷ್ಣಪ್ಪ, ಯೋಜನೆಯ ತಾಲೂಕು ಯೋಜನಾಧಿಕಾರಿ ಹರೀಶ್, ಪುರುಷೋತ್ತಮ್, ಒಕ್ಕೂಟದ ಅಧ್ಯಕ್ಷ ನಡುವಿನಪುರ ಮಂಜುನಾಥ್ ಸೇರಿ ವಿವಿಧ ಒಕ್ಕೂಟಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.