ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಗಣಿಗಾರಿಕೆ ಹಾಗೂ ಕೈಗಾರಿಕೆಗಳಿಂದ ಹಾಳಾಗುತ್ತಿರುವ ಪರಿಸರವನ್ನು ಮತ್ತು ವಿವಿಧ ಬಗೆಯಲ್ಲಿ ಆಗುತ್ತಿರುವ ಮಾಲಿನ್ಯವನ್ನು ನಿಯಂತ್ರಣ ಮಾಡಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರಂತರವಾಗಿ ಕೆಲಸ ಮಾಡುತ್ತಿದೆ.

 ಬಳ್ಳಾರಿ/ಹೊಸಪೇಟೆ : ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಗಣಿಗಾರಿಕೆ ಹಾಗೂ ಕೈಗಾರಿಕೆಗಳಿಂದ ಹಾಳಾಗುತ್ತಿರುವ ಪರಿಸರವನ್ನು ಮತ್ತು ವಿವಿಧ ಬಗೆಯಲ್ಲಿ ಆಗುತ್ತಿರುವ ಮಾಲಿನ್ಯವನ್ನು ನಿಯಂತ್ರಣ ಮಾಡಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರಂತರವಾಗಿ ಕೆಲಸ ಮಾಡುತ್ತಿದೆ. ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳು ನಮ್ಮ ಈ ಕಾರ್ಯಕ್ಕೆ ಕೈಜೋಡಿಸಿದರೆ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 50 ವರ್ಷ ಪೂರೈಸಿದ್ದು, ಇದರ ಅಂಗವಾಗಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಯೋಜಿಸಲಾಗುತ್ತಿದೆ. ಇದರಂಗವಾಗಿ ಶುಕ್ರವಾರ ಬಳ್ಳಾರಿ, ವಿಜಯನಗರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳನ್ನು ಒಳಗೊಂಡ ನಾಲ್ಕು ಜಿಲ್ಲೆಗಳ ವ್ಯಾಪ್ತಿಯ ಕಾರ್ಯಕ್ರಮ ಹೊಸಪೇಟೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

1974ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಡಿ ಮಾಲಿನ್ಯ ನಿಯಂತ್ರಣ ಮಂಡಳಿಗಳನ್ನು ಹುಟ್ಟು ಹಾಕಿ, ಪರಿಸರ ಸಂರಕ್ಷಣೆಗೆ ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಅಡಿಗಲ್ಲು ಹಾಕಿದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರನ್ನು ಈ ದಿನ ನಾವು ಸ್ಮರಿಸಬೇಕಾಗಿದೆ ಎಂದರು.

ಸಾಮಾನ್ಯವಾಗಿ ಇಂಥ ಸುವರ್ಣ ಮಹೋತ್ಸವವನ್ನು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಆದರೆ, ರಾಜ್ಯಾದ್ಯಂತ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವುದು ಅತ್ಯಗತ್ಯ. ಅದೇ ಕಾರಣಕ್ಕಾಗಿ ಮಂಡಳಿಯು ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಜೊತೆಗೆ, ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿಗಳು ಮತ್ತು ಯುವ ಸಮೂಹ ಇದರಲ್ಲಿ ಒಳಗೊಳ್ಳುವಂತೆ ಮಾಡುತ್ತಿದೆ ಎಂದು ತಿಳಿಸಿದರು.

ಬಳ್ಳಾರಿ, ವಿಜಯನಗರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಗಣಿಗಾರಿಕೆಯಿಂದ ಧೂಳು ಹೆಚ್ಚಾಗುತ್ತಿದೆ. ಇದರಿಂದ ಮಿತಿ ಮೀರುತ್ತಿರುವ ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ಸ್ಥಾಪಿಸಲಾಗಿದೆ. ನಿರಂತರವಾಗಿ ವಾಯು ಗುಣಮಟ್ಟ ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಕೈಗಾರಿಕೆಗಳು ಹೊರಸೂಸುವ ರಾಸಾಯನಿಕಯುಕ್ತ ಹೊಗೆಯಿಂದ ಬಹಳ ವೇಗವಾಗಿ ಪರಿಸರ ಹಾಳಾಗುತ್ತಿದೆ. ಇದಲ್ಲದೆ ಕಾರ್ಖಾನೆಗಳಿಂದ ವಿವಿಧ ರೀತಿಯ ತ್ಯಾಜ್ಯಗಳು ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನದಿ-ಕೆರೆಗಳನ್ನು ಸೇರುತ್ತಿವೆ. ಇವುಗಳ ಮೇಲೆ ನಿಗಾ ಇಟ್ಟು, ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವ ಕೆಲಸವನ್ನು ಮಂಡಳಿಯಿಂದ ಮಾಡಲಾಗುತ್ತಿದೆ. ಅಲ್ಲದೆ, ಎಲ್ಲಾ ಜಿಲ್ಲೆಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ಪ್ರತ್ಯೇಕ ಸಂಸ್ಕರಣಾ ಘಟಕಗಳನ್ನು ಅಳವಡಿಸುವಂತೆ ಸೂಚಿಸಲಾಗಿದೆ ಎಂದು ಮಂಡಳಿಯ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.