ಧಾರವಾಡ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸುವ ಗುರಿ ಹೊಂದಲಾಗಿದೆ. ಆ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಶಿಕ್ಷಕರೊಂದಿಗೆ ಪಾಲಕರು ಮತ್ತು ಪೋಷಕರು ಮಕ್ಕಳಿಗೆ ಅಧ್ಯಯನದಲ್ಲಿ ಪ್ರೋತ್ಸಾಹ ನೀಡುವುದು ಅವಶ್ಯವಿದೆ.

ಹುಬ್ಬಳ್ಳಿ:

ಮಕ್ಕಳ ಕಲಿಕೆಗೆ ಪಾಲಕರು, ಪೋಷಕರು ಪ್ರೋತ್ಸಾಹ ನೀಡಬೇಕಿದ್ದು ಅವರ ಉತ್ತಮ ಭವಿಷ್ಯಕ್ಕಾಗಿ ಪಾಲಕರ, ಪೋಷಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.

ಮಂಗಳವಾರ ಇಲ್ಲಿನ ಘಂಟಿಕೇರಿಯ ಅಂಜುಮನ್ ಸಂಸ್ಥೆಯ ನೆಹರು ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಪಂ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಧಾರವಾಡ ಜಿಲ್ಲೆಯ ಉರ್ದು ಮಾಧ್ಯಮದ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಅಲ್ಪಸಂಖ್ಯಾತರ ವರ್ಗದ ಸಮುದಾಯದ ಪ್ರತಿನಿಧಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಶೈಕ್ಷಣಿಕ ಬಲವರ್ಧನ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.

ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸುವ ಗುರಿ ಹೊಂದಲಾಗಿದೆ. ಆ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಶಿಕ್ಷಕರೊಂದಿಗೆ ಪಾಲಕರು ಮತ್ತು ಪೋಷಕರು ಮಕ್ಕಳಿಗೆ ಅಧ್ಯಯನದಲ್ಲಿ ಪ್ರೋತ್ಸಾಹ ನೀಡುವುದು ಅವಶ್ಯವಿದೆ. ಪಾಲಕರು ಜವಾಬ್ದಾರಿ ಅರಿತು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ, ಎಸ್ಎಸ್ಎಲ್‌ಸಿ ಫಲಿತಾಂಶ ಸುಧಾರಣೆಗೆ ಪಣ ತೊಡಬೇಕು. ಕಳೆದ ಆರು ತಿಂಗಳಿನಿಂದ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಜಿಲ್ಲಾಡಳಿತಕ್ಕೆ ವಿವಿಧ ಸಂಘ-ಸಂಸ್ಥೆಗಳು ಸಹಾಯ ಹಸ್ತ ನೀಡುತ್ತಿವೆ ಎಂದರು.

ಜಿಪಂ ಸಿಇಒ ಭುವನೇಶ ಪಾಟೀಲ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಮಾತನಾಡಿದರು. ಡಿಡಿಪಿಐ ಎಸ್.ಎಸ್. ಕೆಳದಿಮಠ ಪ್ರಾಸ್ತಾವಿಕ ಮಾತನಾಡಿದರು.

ಹುಬ್ಬಳ್ಳಿ ಶಹರ ತಹಸೀಲ್ದಾರ್‌ ಮಹೇಶ ಗಸ್ತೆ, ತಾಪಂ ಇಒ ಡಾ. ರಾಮಚಂದ್ರ ಹೊಸಮನಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪೂರ್ಣಿಮಾ, ಹುಬ್ಬಳ್ಳಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. ಫಡ್ನೇಶಿ, ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಉಮೇಶ ಬೊಮ್ಮಕ್ಕನವರ, ಮುಖಂಡರಾದ ಅಲ್ತಾಫ ಹಳ್ಳೂರ, ಬಸೀರ ಹಳ್ಳೂರ, ಇಸಾರ್ ಅಹ್ಮದ್ ಬಳ್ಳಾರಿ ಸೇರಿದಂತೆ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.