ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕಾರ ಅಗತ್ಯ: ನ್ಯಾಯಾಧೀಶ ಎನ್.ವಿ. ವಿಜಯ

| Published : Jun 13 2024, 12:51 AM IST

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕಾರ ಅಗತ್ಯ: ನ್ಯಾಯಾಧೀಶ ಎನ್.ವಿ. ವಿಜಯ
Share this Article
  • FB
  • TW
  • Linkdin
  • Email

ಸಾರಾಂಶ

ಬಾಗಲಕೋಟೆ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಪಂ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಾಲ ಕಾರ್ಮಿಕ ಪದ್ಧತಿ ಪಿಡುಗಾಗಿ ಪರಿಣಮಿಸಿದ್ದು, ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ. ವಿಜಯ ಹೇಳಿದರು.

ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಾಲ ಕಾರ್ಮಿಕರು ಇನ್ನೂ ಅಲ್ಲಲ್ಲಿ ಕಂಡುಬರುತ್ತಿದ್ದಾರೆ. ಸಂಪೂರ್ಣ ನಿರ್ಮೂಲನೆಗೆ ಸರ್ಕಾರ ಕಾಯ್ದೆ ಜಾರಿಗೆ ತಂದಿದೆ. ಆದರೂ ಸಹ ನಿರೀಕ್ಷಿತ ಪ್ರಮಾಣದಲ್ಲಿ ನಿರ್ಮೂಲನೆ ಆಗಿಲ್ಲ. ನಿರ್ಮೂಲನೆಗೆ ವಿವಿಧ ಇಲಾಖೆ ಹಾಗೂ ಸಾರ್ವಜನಿಕರ ಸತತ ಪ್ರಯತ್ನ, ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಮಾತನಾಡಿ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಮಕ್ಕಳು ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಶಿಕ್ಷಣ ಅಗತ್ಯ. ಶಿಕ್ಷಣ ಕೊಡುವ ವೇಳೆಯಲ್ಲಿ ಕೆಲಸದಲ್ಲಿ ತೊಡಗಿಸುವುದರಿಂದ ಬಾಲ್ಯದ ಜೀವನ ಉತ್ತಮವಾಗಿರಲು ಸಾಧ್ಯವಾಗಲ್ಲ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕಾಯ್ದೆ ಸಮರ್ಪಕ ಅನುಷ್ಠಾನಗೊಳಿಸುವಲ್ಲಿ ಕಾರ್ಮಿಕ ಇಲಾಖೆಯ ಜೊತೆ ಇತರೆ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಉತ್ತಮ ಸಮಾಜ ನಿರ್ಮಾಣದಲ್ಲಿ ಎಲ್ಲರ ಪಾತ್ರ ಮುಖ್ಯವಾಗಿದ್ದು, ಉತ್ತಮ ಬಾಲ್ಯ ರೂಪಿಸುವುದರ ಜೊತೆಗೆ ಅನಿಷ್ಠ ಪದ್ಧತಿಯಿಂದ ಮುಕ್ತಗೊಳಿಸಬೇಕು. ಶಿಕ್ಷೆಗಿಂತ ಸುಧಾರಣೆ ಮುಖ್ಯವಾಗಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹೇಶ ಪಾಟೀಲ ಮಾತನಾಡಿ, ಮಕ್ಕಳ ಬಾಲ್ಯ ಕಸಿದುಕೊಳ್ಳುವ ಕೆಲಸವಾಗಬಾರದು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಬಾಲಕಾರ್ಮಿಕ ಪದ್ಧತಿ ವಿರೋಧಿ ಕಾಯ್ದೆ ಜಾರಿಗೆ ತರಲಾಗಿದೆ. ಮಕ್ಕಳ ಬಾಲ್ಯವನ್ನು ರಕ್ಷಿಸಿ ಬೆಳೆಸಲು ಬದ್ಧರಾಗಬೇಕಿದೆ ಎಂದು ತಿಳಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ ಮಾತನಾಡಿ, ಬಾಲ ಕಾರ್ಮಿಕ ನಿರ್ಮೂಲನೆಗೆ ಸಹಕಾರ ಅಗತ್ಯವಾಗಿದ್ದು, ಮಕ್ಕಳಿಂದ ಕೆಲಸ ಮಾಡಿಸಿಕೊಳ್ಳುವುದು ಕಂಡುಬಂದಲ್ಲಿ 1098ಗೆ ಕರೆ ಮೂಲಕ ಮಾಹಿತಿ ನೀಡಲು ತಿಳಿಸಿದರು.

ವಕೀಲರು ಹಾಗೂ ಉಪ ಕಾನೂನು ನೆರವು ಅಭೀರಕ್ಷಕ ಪ್ರಶಾಂತ ನಾರಾಯಣಕರ ಬಾಲ ಮತ್ತು ಕಿಶೋರ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986, ತಿದ್ದುಪಡಿ ಕಾಯ್ದೆ 2016 ಕುರಿತು ಉಪನ್ಯಾಸ ನೀಡಿದರು. ಪ್ರಾರಂಭದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕ ಸುಧಾಕರ ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು.

2ನೇ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ್ವರ ಜಿದ್ದಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಬಿ. ಪೂಜಾರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.ಮಕ್ಕಳು ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಶಿಕ್ಷಣ ಅಗತ್ಯ. ಶಿಕ್ಷಣ ಕೊಡುವ ವೇಳೆಯಲ್ಲಿ ಕೆಲಸದಲ್ಲಿ ತೊಡಗಿಸುವುದರಿಂದ ಬಾಲ್ಯದ ಜೀವನ ಉತ್ತಮವಾಗಿರಲು ಸಾಧ್ಯವಾಗಲ್ಲ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕಾಯ್ದೆ ಸಮರ್ಪಕ ಅನುಷ್ಠಾನಗೊಳಿಸುವಲ್ಲಿ ಕಾರ್ಮಿಕ ಇಲಾಖೆಯ ಜೊತೆ ಇತರೆ ಇಲಾಖೆಗಳ ಸಹಕಾರ ಅಗತ್ಯವಾಗಿದೆ.

- ಜಾನಕಿ ಕೆ.ಎಂ. ಜಿಲ್ಲಾಧಿಕಾರಿ