ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡೆಂಘೀ, ಚಿಕೂನ್ ಗುನ್ಯಾ ಇತರೆ ಕೀಟ ಜನ್ಯ ರೋಗಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಹಭಾಗಿತ್ವದೊಂದಿಗೆ ಕಾರ್ಯನಿರ್ವಹಿಸಿದರೆ ಮಾತ್ರ ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಪಿ. ಎನ್.ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಡೆಂಘೀ, ಚಿಕೂನ್ ಗುನ್ಯಾ ಮತ್ತು ಇತರೆ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕುರಿತ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸ್ವಚ್ಛತೆ ಕಾಪಾಡದಿದ್ದರೆ ರೋಗಗಳ ಕಾಟ
ಸೊಳ್ಳೆಗಳು ಮನೆಯಲ್ಲಿನ ತೊಟ್ಟಿ, ಬ್ಯಾರಲ್, ಡ್ರಮ್ ಗಳಲ್ಲಿನ ನೀರನಲ್ಲಿ ಸೃಜನೆಯಾಗುವುದನ್ನು ತಪ್ಪಿಸಲು ವಾರಕ್ಕೊಮ್ಮೆ ನೀರನ್ನು ಖಾಲಿ ಮಾಡಿ ಸ್ವಚ್ಛಗೊಳಿಸಬೇಕು. ಇಲ್ಲವಾದಲ್ಲಿ ನಿಂತ ನೀರಿನಲ್ಲಿ ಮೊಟ್ಟೆ ಇಟ್ಟು ಮರಿ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ಉತ್ಪತ್ತಿಯಾಗುತ್ತವೆ. ಈ ಸೊಳ್ಳೆಗಳು ಮನುಷ್ಯರನ್ನು ಕಚ್ಚುವುದರಿಂದ ಜ್ವರ ಮತ್ತು ಡೆಂಘೀ, ಚಿಕೂನ್ ಗುನ್ಯಾ ಇತರೆ ರೋಗಗಳಿಗೆ ತುತ್ತಾಗಿ ಸಾವು - ನೋವುಗಳು ಉಂಟಾಗುತ್ತದೆ ಎಂದು ಎಚ್ಚರಿಸಿದರು.ಜಿಲ್ಲೆಯಲ್ಲಿ ಈ ವರ್ಷ2070 ಜನರ ರಕ್ತ ತಪಾಸಣೆ ನಡೆಸಲಾಗಿ 230 ಡೆಂಘೀ ಪ್ರಕರಣಗಳು ದಾಖಲಾಗಿವೆ , ಚಿಕೂನ್ ಗುನ್ಯಾ 3 ಪ್ರಕರಣಗಳು ದಾಖಲಾಗಿದ್ದು, ಈ ಭಾಗದಲ್ಲಿ ಡೆಂಘೀ ನಿಯಂತ್ರಣಕ್ಕೆ ಹೆಚ್ಚಿನ ನಿಗಾವಹಿಸಬೇಕು. ಡಿಸೆಂಬರ್ ಮಾಹೆಯಲ್ಲಿಯೇ ಶಿಡ್ಲಘಟ್ಟ ತಾಲೂಕಿನಲ್ಲಿ 4 ಪ್ರಕರಣಗಳು, ಚಿಂತಾಮಣಿ 1, ಬಾಗೇಪಲ್ಲಿ 2, ಗೌರಿಬಿದನೂರು 4 ಪ್ರಕರಣಗಳು ಹಾಗೂ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 16 ಪ್ರಕರಣಗಳು ದಾಖಲಾಗಿದೆ ಎಂದು ಹೇಳಿದರು.
ಕೋವಿಡ್ ಭಯ ಬೇಡ ಎಚ್ಚರಿಕೆ ಇರಲಿಅಕ್ಕಪಕ್ಕದ ರಾಜ್ಯಗಳಲ್ಲಿ ಕೋವಿಡ್-19ನ ಉಪತಳಿಯಾಗಿರುವ ಜೆ.ಎನ್.1 ವರದಿಯಾಗಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್-19ರ ಮಾರ್ಗಸೂಚಿಯ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಎಲ್ಲಾ ಹಿರಿಯ ನಾಗರಿಕರು ಹಾಗೂ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಲಹೆ ನೀಡಿದರು.
ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರಲು ಸಲಹೆ ನೀಡಲಾಗಿದೆ. ಜ್ವರ, ಕೆಮ್ಮು,ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು,ಮೂಗು ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು ಮತ್ತು ಉತ್ತಮ ವೈಯಕ್ತಿಕ ಸ್ವಚ್ಚತೆ, ಆಗಾಗ್ಗೆ ಕೈಗಳನ್ನು ಸೋಪು ,ನೀರಿನಿಂದ ತೊಳೆದುಕೊಳ್ಳಬೇಕು. ಆರೋಗ್ಯ ಸಮಸ್ಯೆಗಳು ಕಂಡು ಬಂದ್ದಲ್ಲಿ ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯವುದು ಸೂಕ್ತ ಎಂದು ತಿಳಿಸಿದರು.ಜ.12ರಂದು ರಕ್ತದಾನ ಶಿಬಿರ
ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನದ ಪ್ರಯುಕ್ತ ಜಿಲ್ಲೆಯಲ್ಲಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ನಗರದ ಜಿಲ್ಲಾಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ವಿದ್ಯಾರ್ಥಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ರಕ್ತದಾನ ಮಾಡಲು ಅವರನ್ನು ಪ್ರೇರೆಪಿಸಿ ಮತ್ತು ಅದರ ಬಗ್ಗೆ ಅರಿವು ಮೂಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.ಸಭೆಯಲ್ಲಿ ಜಿಪಂ ಸಿಸಿಒ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಆರೊಗ್ಯಾಧಿಕಾರಿ ಡಾ.ಎಸ್.ಎಸ್. ಮಹೇಶ್ ಕುಮಾರ್, ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ.ಕೋಡಿರಂಗಪ್ಪ, ಖಜಾಂಚಿ ಜಯರಾಮ್ ಹಾಗೂ ವಿವಿಧ ಶಾಲಾ ಕಾಲೇಜುಗಳ ಮುಖ್ಯಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.