ಸಾರಾಂಶ
ಕನ್ನಡಪ್ರಭ ವಾರ್ತೆ ಹಲಗೂರು
ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿರುವುದು ಸಂತಸದ ವಿಚಾರ ಎಂದು ಶಿಕ್ಷಣ ಸಂಯೋಜಕ ಟಿ.ಎಂ.ರವಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.ಅಂತರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳು ಉಳಿಯಲು, ಮುನ್ನಡೆಸಲು ಸಾರ್ವಜನಿಕರ ಸಹಕಾರ ಅತಿ ಮುಖ್ಯ. ಗ್ರಾಮೀಣ ಪ್ರದೇಶದ ಶಿಕ್ಷಣಾಸಕ್ತರ ಸಹಕಾರದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಳ ಕಂಡು ಬರುತ್ತಿದೆ. ಮುಂದಿನ ದಿನಗಳಲ್ಲಿಯೂ ಸಹ ಇದೇ ರೀತಿಯ ಸಹಕಾರ ಇರಲಿ ಎಂದರು.
ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸೋಮಣ್ಣ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ನುರಿತ ತಜ್ಞ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಹಲವು ಯೋಜನೆಗಳ ಅಡಿಯಲ್ಲಿ ಉತ್ತಮ ಸೌಲಭ್ಯ ದೊರೆಯುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ಗ್ರಾಮದ ಶಿಕ್ಷಣಾಶಕ್ತ ಎ.ಎಸ್.ದೇವರಾಜು ಮಾತನಾಡಿ, ಐದು ಮಕ್ಕಳಿಂದ ಶಾಲೆ ಮುಚ್ಚುವ ಹಂತ ತಲುಪಿತ್ತು. ಗ್ರಾಮದ ಪೋಷಕರ ಸಹಕಾರದಿಂದ ಮತ್ತೆ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ ಕಂಡಿದೆ. ಶಾಲೆಗೆ ಬೇಕಾದ ಅಗತ್ಯ ವಸ್ತುಳನ್ನು ದಾನಿಗಳು ನೀಡುತ್ತಾ ಬಂದಿದ್ದಾರೆ ಎಂದರು.
ಶಾಲಾ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಬಹುಮಾನ ವಿತರಣೆ ನಡೆಯಿತು. ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಈ ವೇಳೆ ಗ್ರಾಪಂ ಸದಸ್ಯರಾದ ಮಂಜುಳ, ಸುಂದರಮ್ಮ, ಅರ್ಜುನ, ನಾಗರಾಜು, ಸಿ.ಆರ್.ಪಿ.ರೇವಣ್ಣ, ಜಿ.ಎಸ್.ಕೃಷ್ಣ, ಶಾಲಾ ಮುಖ್ಯ ಶಿಕ್ಷಕಿ ಮಂಜುಳ, ರಾಜಮಣಿ, ಶಿಕ್ಷಕರಾದ ಹೇಮಲತಾ, ಭಾಗ್ಯಮ್ಮ, ಅಶಾ, ಶಾಲಾಭಿವೃದ್ದಿ ಮತ್ತಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಉಮೇಶ್, ಸದಸ್ಯರಾದ ಗೀತಾಂಜಲಿ, ಸಬ್ಬನಹಳ್ಳಿ ಕುಮಾರ್, ಗ್ರಾಮ ಸಹಾಯಕರಾದ ಎ.ಎಸ್.ಶಿವಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.