ಸಾರಾಂಶ
ಕನ್ನಡಪ್ರಭ ವಾರ್ತೆ ಬೈಲಹೊಂಗಲ
ಚನ್ನಮ್ಮನ ಕಿತ್ತೂರು ಉತ್ಸವ ಹಾಗೂ ಚನ್ನಮ್ಮನವರ 200ನೇ ವಿಜಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವುದರ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ಉಪಸಮಿತಿಗಳ ಸದಸ್ಯರು ಮತ್ತು ಅಧಿಕಾರಿಗಳು ಶ್ರಮಿಸಬೇಕು ಎಂದು ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಸೂಚಿಸಿದರು.ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಜರುಗಿದ ಚನ್ನಮ್ಮನ ಕಿತ್ತೂರು ಉತ್ಸವ ಮತ್ತು ಚನ್ನಮ್ಮನವರ 200ನೇ ವಿಜಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉತ್ಸವ ಯಶಸ್ವಿಗಾಗಿ ವಿವಿಧ ಸಮಿತಿ ರಚಿಸಲಾಗಿದೆ. ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ಲೋಪಗಳಾಗದಂತೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದರು.
ಉತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ಕೊರತೆ ಆಗಬಾರದು.ಉತ್ಸವದ ಮೊದಲನೇ ದಿನ ನಡೆಯಲಿರುವ ಮೆರವಣಿಗೆಯಲ್ಲಿ ಸಾಗುವ ಕಲಾವಿದರು, ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯಲ್ಲಿ ಯಾವುದೇ ಗೊಂದಲಗಳು ಆಗಬಾರದು. ರಾಷ್ಟ್ರೀಯ/ರಾಜ್ಯಮಟ್ಟದ ಕಲಾವಿದರ ಜತೆಗೆ ಸ್ಥಳೀಯ ಕಲಾವಿದರಿಗೆ ವೇದಿಕೆ ದೊರೆಯುವ ಹಾಗೆ ರೂಪುರೇಷೆ ರೂಪಿಸಲು ತಿಳಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಉತ್ಸವದ ದಿನಗಳಂದು ಸೂಕ್ತ ಹಾಗೂ ಉತ್ಸವದ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವ ಮುಖ್ಯ ವೇದಿಕೆ ಸ್ಥಳಗಳಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗುವುದು. ಪೊಲಿಸ್ ಸಿಬ್ಬಂದಿಗೆ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡುವಂತೆ ತಿಳಿಸಿದರು.ಸಭೆಯಲ್ಲಿ ಮೆರವಣಿಗೆ, ರೂಪಕಗಳು, ಏರ್ ಷೋ, ಸಾರಿಗೆ, ಗ್ರಾಮೀಣ ಕ್ರೀಡೆ, ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿ, ಜಲ ಕ್ರೀಡೆಗಳ ಆಯೋಜನೆ ಕುರಿತು ಚರ್ಚಿಸಲಾಯಿತು.ಬೈಲಹೊಂಗಲ ಎಸಿ ಪ್ರಭಾವತಿ ಫಕೀರಪುರ ಸೇರಿದಂತೆ ವಿವಿಧ ಉಪಸಮಿತಿಗಳ ಮುಖ್ಯಸ್ಥರು ಇದುವರೆಗೆ ಕೈಗೊಂಡಿರುವ ಸಿದ್ಧತೆಗಳ ಕುರಿತು ಸಭೆಗೆ ವಿವರಿಸಿದರು. ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.ಕಿತ್ತೂರು ಉತ್ಸವಕ್ಕೆ ಸಂಬಂಧಿಸಿ ನೇಮಕವಾಗಿರುವ ವಿವಿಧ ಸಮಿತಿಗಳು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರ ವಸತಿಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ಗಣ್ಯ ವ್ಯಕ್ತಿಗಳು ಹಾಗೂ ಕಲಾತಂಡಗಳಿಗೆ ಪ್ರತ್ಯೇಕವಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು.
- ಮೊಹಮ್ಮದ್ ರೋಷನ್ ಜಿಲ್ಲಾಧಿಕಾರಿ