- ''''''''ಭಾಗೀದಾರರ ಇಲಾಖಾ ಅಧಿಕಾರಿಗಳಿಗೆ ವಿಶೇಷ ಅರಿವು ಕಾರ್ಯಕ್ರಮ''''''''ದಲ್ಲಿ ಅಪರ್ಣ ಕೊಳ್ಳ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಮಕ್ಕಳ ಶಿಕ್ಷಣ, ರಕ್ಷಣೆ ಮತ್ತು ಅವರ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಸಕ್ರಿಯವಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣ ಎಂ. ಕೊಳ್ಳ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿಯ ಎಸ್.ಎಸ್. ಮಲ್ಲಿಕಾರ್ಜುನ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಭಾಗೀದಾರರ ಇಲಾಖಾ ಅಧಿಕಾರಿಗಳಿಗೆ ವಿಶೇಷ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಪೋಕ್ಸೋ ಮತ್ತು ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದಂತೆ ಇಲಾಖೆಗಳ ನಡುವೆ ಹೆಚ್ಚಿನ ಸಮನ್ವಯತೆ ಅಗತ್ಯವಿದೆ. ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಶಾಲೆಗಳಿಗೆ ರಜೆ ಇರುವ ಕಾರಣ ಬಾಲ್ಯ ವಿವಾಹಗಳು ಹೆಚ್ಚಾಗಿ ನಡೆಯುವುದರಿಂದ, ಈ ಅವಧಿಯಲ್ಲಿ ಬಾಲ್ಯವಿವಾಹ ತಡೆಗಟ್ಟಲು ಎಲ್ಲ ಇಲಾಖೆಗಳು ಹೆಚ್ಚಿನ ನಿಗಾ ವಹಿಸಬೇಕು. ಪ್ರಸಕ್ತ ಸಾಲಿನಲ್ಲಿ ದಾಖಲಾದ ಹೆಚ್ಚಿನ ಪ್ರಕರಣಗಳು ತಡೆಹಿಡಿಯಲ್ಪಟ್ಟಿರುವುದು ಆಶಾದಾಯಕವಾಗಿದೆ ಎಂದು ಅವರು ತಿಳಿಸಿದರು.

ರಾಜ್ಯದ ಅಂಕಿಅಂಶಗಳ ಪ್ರಕಾರ, ಪ್ರತಿದಿನ ಸರಾಸರಿ 12 ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿವೆ. ಜಿಲ್ಲೆಯಲ್ಲಿ ನವೆಂಬರ್ ಅಂತ್ಯದವರೆಗೆ 154 ಪ್ರಕರಣಗಳು ದಾಖಲಾಗಿವೆ. ದಾಖಲಾಗುತ್ತಿರುವ ಪೋಕ್ಸೋ ಪ್ರಕರಣಗಳಲ್ಲಿ ಶೇ.70 ರಿಂದ 80ರಷ್ಟು ಪ್ರಕರಣಗಳು ಪ್ರೇಮ ಸಂಬಂಧಿತ ಪ್ರಕರಣಗಳಾಗಿವೆ. ಇವುಗಳನ್ನು ತಡೆಗಟ್ಟಲು ಶಿಕ್ಷಣ ಇಲಾಖೆಯ ಪಾತ್ರ ಬಹಳ ಮುಖ್ಯವಾಗಿದೆ ಎಂದರು.

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ''''''''ಶಿಕ್ಷಣದೊಂದಿಗೆ ರಕ್ಷಣೆ'''''''' ಅತ್ಯಗತ್ಯವಾಗಿದೆ. ಪ್ರಸ್ತುತ ಎದುರಾಗುತ್ತಿರುವ ಸವಾಲುಗಳು ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಾಲಾ ದಾಖಲಾತಿ ಮತ್ತು ಪರೀಕ್ಷೆಗೆ ಹಾಜರಾಗುವ ಮಕ್ಕಳ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಮಯದಲ್ಲಿ ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು ಶಿಕ್ಷಣ ಇಲಾಖೆಯ ಆದ್ಯತೆಯಾಗಬೇಕು ಎಂದರು.

ಹಾಸ್ಟೆಲ್‌ಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಪ್ರತಿ ತಿಂಗಳು ಕಡ್ಡಾಯವಾಗಿ ಆರೋಗ್ಯ ತಪಾಸಣೆ ನಡೆಸಬೇಕು, ಮಕ್ಕಳು ಮತ್ತು ಪೋಷಕರಿಗೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಮಾಹಿತಿ ನೀಡಲು ''''''''ಸಂವಾದ'''''''' ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು . ಶಿಕ್ಷಕರು ಮಕ್ಕಳ ನಡವಳಿಕೆಯಲ್ಲಿನ ಬದಲಾವಣೆಗಳನ್ನು ಗುರುತಿಸಿ ಕೂಡಲೇ ಸ್ಪಂದಿಸಬೇಕು. ಕೇವಲ ಪೊಲೀಸ್ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾತ್ರವಲ್ಲದೆ, ಶಿಕ್ಷಣ, ಸಮಾಜ ಕಲ್ಯಾಣ, ಆರ್‌ಡಿಪಿಆರ್ ಸೇರಿದಂತೆ ಒಟ್ಟು 10 ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿದರೆ ಮಾತ್ರ ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಸಾಧ್ಯ ಎಂದು ಅಭಿಪ್ರಾಯಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣನವರ ಮಾತನಾಡಿ, ಮಕ್ಕಳು ದೇಶದ ಆಸ್ತಿ, ಅವರ ಆರೋಗ್ಯ ಮತ್ತು ಶಿಕ್ಷಣದ ವಿಷಯದಲ್ಲಿ ಯಾವುದೇ ರಾಜಿ ಸಲ್ಲದು. ಸರ್ಕಾರಿ ಸೌಲಭ್ಯಗಳು ಮಕ್ಕಳಿಗೆ ತಲುಪುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಅಧಿಕಾರಿಯ ಕರ್ತವ್ಯ. ಇತ್ತೀಚೆಗೆ ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ಆಹಾರದ ಗುಣಮಟ್ಟ ಹದಗೆಟ್ಟಿರುವ ಬಗ್ಗೆ ವರದಿಯಾಗುತ್ತಿದೆ. ಗರ್ಭಿಣಿಯರಿಗೆ, ಬಾಣಂತಿಯರಿಗೆ ಮತ್ತು ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ಸಮರ್ಪಕವಾಗಿ ವಿತರಣೆಯಾಗಬೇಕು. ಈ ನಿಟ್ಟಿನಲ್ಲಿ ಅಂಗನವಾಡಿಗಳ ಕಾರ್ಯನಿರ್ವಹಣೆ ಮೇಲ್ವಿಚಾರಣೆ ಅಗತ್ಯವಾಗಿದೆ. ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳು ವರದಿಯಾಗುತ್ತಿರುವುದು ಕಳವಳಕಾರಿ ಸಂಗತಿ. ಅಧಿಕಾರಿಗಳು ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಮತ್ತು ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್, ಜಿಪಂ ಯೋಜನಾ ನಿರ್ದೇಶಕಿ ಕೌಸರ್ ರೇಷ್ಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ್, ಡಿಡಿಪಿಐ ಕೊಟ್ರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಟಿ.ಎನ್.ಕವಿತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

- - -

-27ಕೆಡಿವಿಜಿ33:

ದಾವಣಗೆರೆಯಲ್ಲಿ ನಡೆದ ಭಾಗೀದಾರರ ಇಲಾಖಾ ಅಧಿಕಾರಿಗಳಿಗೆ ವಿಶೇಷ ಅರಿವು ಕಾರ್ಯಕ್ರಮವನ್ನು ಅಪರ್ಣ ಎಂ. ಕೊಳ್ಳ ಉದ್ಘಾಟಿಸಿ ಮಾತನಾಡಿದರು.