ಚನ್ನಪಟ್ಟಣ ಉಪಚುನಾವಣೆಯ ಡ್ಯಾಮೇಜ್ ಕಂಟ್ರೋಲ್‌ಗೆ ಕಾಂಗ್ರೆಸ್‌ನಿಂದ ಮುಖಂಡರಲ್ಲಿ ಒಗ್ಗಟ್ಟು ಮೂಡಿಸುವ ಸಮನ್ವಯ ಸಭೆ

| Published : Oct 27 2024, 02:16 AM IST / Updated: Oct 27 2024, 12:48 PM IST

ಚನ್ನಪಟ್ಟಣ ಉಪಚುನಾವಣೆಯ ಡ್ಯಾಮೇಜ್ ಕಂಟ್ರೋಲ್‌ಗೆ ಕಾಂಗ್ರೆಸ್‌ನಿಂದ ಮುಖಂಡರಲ್ಲಿ ಒಗ್ಗಟ್ಟು ಮೂಡಿಸುವ ಸಮನ್ವಯ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೊಂಡು ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮೂಲ ಹಾಗೂ ವಲಸೆ ಕಾಂಗ್ರೆಸ್ ಮುಖಂಡರಲ್ಲಿ ಒಗ್ಗಟ್ಟು ಮೂಡಿಸುವ ನಿಟ್ಟಿನಲ್ಲಿ ಸಮನ್ವಯತೆ ಮೂಡಿಸಲು ಪಕ್ಷದ ಮುಖಂಡರು ಮುಂದಾಗಿದ್ದಾರೆ.

 ವಿಜಯ್ ಕೇಸರಿ

 ಚನ್ನಪಟ್ಟಣ :  ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೊಂಡು ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮೂಲ ಹಾಗೂ ವಲಸೆ ಕಾಂಗ್ರೆಸ್ ಮುಖಂಡರಲ್ಲಿ ಒಗ್ಗಟ್ಟು ಮೂಡಿಸುವ ನಿಟ್ಟಿನಲ್ಲಿ ಸಮನ್ವಯತೆ ಮೂಡಿಸಲು ಪಕ್ಷದ ಮುಖಂಡರು ಮುಂದಾಗಿದ್ದಾರೆ.

ತಾಲೂಕಿನ ಮಳೂರು, ಬೇವೂರು, ಹೊಂಗನೂರು ಜಿಪಂ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಮನ್ವಯ ಸಭೆಗಳನ್ನು ನಡೆಸಿದ್ದು, ಭಾನುವಾರ ಅಕ್ಕೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮನ್ವಯ ಸಭೆ ನಡೆಸಲು ಉದ್ದೇಶಿಸಲಾಗಿದೆ.

ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್‌ನಿಂದ ದೂರವಿದ್ದ ಯೋಗೇಶ್ವರ್ ಕಳೆದ ನಾಲ್ಕು ದಿನಗಳ ಹಿಂದಷ್ಟೇ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಕ್ಷ ಸೇರ್ಪಡೆಗೊಂಡ ಬೆನ್ನಲ್ಲೆ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಇದು ಸಹಜವಾಗಿಯೇ ಒಂದಷ್ಟು ಮೂಲ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಇದನ್ನು ಶಮನ ಮಾಡಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಸಮನ್ವಯ ಸಭೆಗಳನ್ನು ನಡೆಸಲಾಗುತ್ತಿದೆ.

ಮಾಜಿ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ಶಾಸಕರಾದ ಎಚ್.ಸಿ.ಬಾಲಕೃಷ್ಣ, ಉದಯ್ ಸೇರಿದಂತೆ ಹಿರಿಯ ನಾಯಕರು ಅಖಾಡಕ್ಕಿಳಿದು, ಸಭೆಗಳ ಮೂಲಕ ಸಣ್ಣಪುಟ್ಟ ಭಿನ್ನಾಬಿಪ್ರಾಯ ಬದಿಗಿಟ್ಟು ಚುನಾವಣೆಗೆ ಸಜ್ಜಾಗುವಂತೆ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡುತ್ತಿದ್ದಾರೆ.

ಯೋಗೇಶ್ವರ್ ಕಾಂಗ್ರೆಸ್ ತೊರೆದ ನಂತರ ಮೂಲ ಕಾಂಗ್ರೆಸ್ ಕಾರ್ಯಕರ್ತರೊಂದಿಗಿನ ಸಂಪರ್ಕ ಕಡಿತಗೊಂಡಿತ್ತು. ಕಳೆದ ಎರಡು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಪರಸ್ಪರರ ವಿರುದ್ಧ ಸೆಣಸಾಡುವಂತಾಗಿತ್ತು. ಇದೀಗ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಿಪಿವೈ ಕಾಂಗ್ರೆಸ್‌ಗೆ ಮರಳಿದ್ದಾರೆ. ಈ ಹಿನ್ನೆಲೆಯಲ್ಲಿ ಮೂಲ ಹಾಗೂ ವಲಸಿಗ ಕಾಂಗ್ರೆಸ್ಸಿಗರಲ್ಲಿ ಇರುವ ಅಂತರವನ್ನು ತಗ್ಗಿಸಲು ಮುಖಂಡರೇ ಮುಂದಾಗಿದ್ದಾರೆ.

ಡ್ಯಾಮೇಜ್ ಕಂಟ್ರೋಲ್: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಯೋಗೇಶ್ವರ್ ನಾಮಪತ್ರ ಸಲ್ಲಿಸುವ ವೇಳೆ ಕೆಲ ಮೂಲ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಗೈರು ಎದ್ದುಕಾಣುತ್ತಿತ್ತು. ಇದಲ್ಲದೇ ಅಲ್ಲಲ್ಲಿ ಅಸಮಾಧಾನ ಕುರಿತ ಚರ್ಚೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಕಾಂಗ್ರೆಸ್ ಮುಖಂಡರು ಕಣಕ್ಕಿಳಿದಿದ್ದಾರೆ.

ಯೋಗೇಶ್ವರ್ ಕಾಂಗ್ರೆಸ್ ತ್ಯಜಿಸಿದ ನಂತರ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳಲ್ಪಟ್ಟಿದ್ದು, ಸೂಕ್ತ ನಾಯಕತ್ವವಿಲ್ಲದೇ ಸೊರಗಿತ್ತು. ಆದರೆ, ೨೦೨೪ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ನಡುವೆಯೂ ಕಾಂಗ್ರೆಸ್ ಕ್ಷೇತ್ರದಲ್ಲಿ ಪುಟಿದ್ದೆದ್ದಿತ್ತು. ಸುಮಾರು ೮೬ ಸಾವಿರ ಮತಗಳನ್ನು ಪಡೆಯುವ ಮೂಲಕ ತನ್ನ ಬಲವನ್ನು ವೃದ್ಧಿಸಿಕೊಂಡಿತ್ತು.

ಇದು ಸಹಜವಾಗಿಯೇ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿತ್ತು. ಆದರೆ, ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಗೊಂಡ ನಂತರ ಎಲ್ಲಿ ತಮ್ಮ ಮಹತ್ವ ಕಡಿಮೆಯಾಗುವುದೋ ಎಂಬ ಆತಂಕ ಹಾಗೂ ಅಸಮಾಧಾನ ಕೆಲವರಲ್ಲಿ ಮನೆ ಮಾಡಿದೆ. ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಬಂಡೆ ಬ್ರದರ್ಸ್‌ ಖುದ್ದು ಅಖಾಡಕ್ಕಿಳಿದಿದ್ದಾರೆ.

ಡಿಕೆಶಿ ಸಭೆ: ಗುರುವಾರ ಯೋಗೇಶ್ವರ್ ನಾಮಪತ್ರ ಸಲ್ಲಿಕೆಯ ನಂತರ ಬೆಂಗಳೂರಿನಲ್ಲಿ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಭಿನ್ನಾಭಿಪ್ರಾಯ ಮರೆತು ಒಗ್ಗೂಡಿ ಚುನಾವಣೆ ಎದುರಿಸುವಂತೆ ತಾಕೀತು ಮಾಡಿದ್ದರು. ನಾನೇ ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಎಂದು ತಿಳಿದು ಕೆಲಸ ಮಾಡುವಂತೆ ಸೂಚಿಸಿದ್ದರು. ಇದರ ಬೆನ್ನಲೆ ಶನಿವಾರ ಪಂಚಾಯತಿ ಮಟ್ಟದಲ್ಲೇ ಸಮನ್ವಯತೆ ಸಾಧಿಸುವ ನಿಟ್ಟಿನಲ್ಲಿ ಸಭೆಗಳನ್ನು ನಡೆಸಲಾಗಿದೆ. ಸಭೆಯಲ್ಲಿ ಎಲ್ಲರೂ ಒಗ್ಗೂಡಿ ಚುನಾವಣೆ ನಡೆಸುವಂತೆ ಸೂಚನೆ ನೀಡಲಾಗಿದೆ. ಇದು ಎಷ್ಟರ ಮಟ್ಟಿಗೆ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಗೆಲ್ಲಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ. ಇಂದು ಯಾರು ಸಭೆಗೆ ಬಾರದೇ ಅಂತರ ಕಾಯ್ದುಕೊಂಡಿದ್ದಾರೊ ಅವರ ಮನೆಗೆ ತೆರಳಿ ಅವರ ಮನವೊಲಿಸುವ ಕೆಲಸ ಮಾಡಲಾಗುವುದು.

-ಎಚ್.ಸಿ.ಬಾಲಕೃಷ್ಣ, ಮಾಗಡಿ ಶಾಸಕ