ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಮಹಾನಗರ ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರೂ ಯಾವುದೇ ಕಾರಣಕ್ಕೆ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವೇತನ ನಿಲ್ಲಿಸಲ್ಲ ಎಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಹೇಳಿದರು.ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಆಸ್ತಿ ಕಳೆದುಕೊಂಡ ಸಂತ್ರಸ್ತರಿಗೆ ₹20 ಕೋಟಿ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಹಾಗಾಗಿ, ಬೆಳಗಾವಿ ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಈ ಪ್ರಕರಣದ ಕುರಿತು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಅದಕ್ಕೆ ಕಾನೂನು ಹೋರಾಟ ಮಾಡಲಾಗುವುದು. ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ವೇತನ ನಿಲ್ಲಲ್ಲ ಎಂದು ಸ್ಪಷ್ಟಪಡಿಸಿದರು.ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದಕ್ಕಾಗಿ ನಗರೋತ್ಥಾನ ಇಲಾಖೆಯಿಂದ ₹125 ಕೋಟಿ ಅನುದಾನ ಒದಗಿಸಲಾಗುವುದು ಎಂದರು.ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವೇನೂ ಇಲ್ಲ. ಬಿಜೆಪಿ-ಜೆಡಿಎಸ್ ಮಿತ್ರ ಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ಮಾಡುತ್ತಿವೆ. ಆದರೆ, ಅದರಲ್ಲಿ ಅವು ಯಶಸ್ವಿಯಾಗುವುದಿಲ್ಲ. ಕಾಂಗ್ರೆಸ್‌ನ ಎಲ್ಲ ಶಾಸಕರು, ಸಚಿವರು ಸಿಎಂ ಸಿದ್ದರಾಮಯ್ಯ ಅವರ ಪರವಾಗಿದ್ದಾರೆ ಎಂದು ತಿಳಿಸಿದರು.ನಗರದಲ್ಲಿ ಸರಣಿ ಸರಗಳ್ಳತನ ಪ್ರಕರಣ ಹೆಚ್ಚುತ್ತಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಗರದ ವಿವಿಧೆದೆ ಬೀದಿ ದೀಪಗಳು ಬಂದ್ ಆಗಿದ್ದು, ಕೂಡಲೇ ದೀಪ ಅಳವಡಿಸಲು ಕ್ರಮ ಕೈಗೊಳ್ಳಲು ಪಾಲಿಕೆ ಹಾಗೂ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.