ಶುದ್ಧ ಕುಡಿಯುವ ನೀರು, ಸಮರ್ಪಕ ರಸ್ತೆ ಹಾಗೂ ಚರಂಡಿ ವ್ಯವಸ್ಥೆಯಿಲ್ಲದೆ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಬಳ್ಳಾರಿ: ನಗರದ 3ನೇ ವಾರ್ಡ್‌ನಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಕರ್ಯ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಪಾಲಿಕೆ ಸದಸ್ಯ ಪ್ರಭಂಜನ್ ಕುಮಾರ್ ಅವರು ಸ್ಥಳೀಯ ನಿವಾಸಿಗಳೊಂದಿಗೆ ಸೋಮವಾರ ರಸ್ತೆಯಲ್ಲೇ ಧರಣಿ ನಡೆಸಿ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಾರ್ಡ್‌ನಲ್ಲಿ ಹಲವು ವರ್ಷಗಳಿಂದ ಮೂಲ ಸೌಕರ್ಯ ಸಮಸ್ಯೆಗಳು ತಾಂಡವವಾಡುತ್ತಿವೆ. ರಸ್ತೆ ನಿರ್ಮಾಣ, ಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಅನಿವಾರ್ಯವಾಗಿ ಜನರೊಂದಿಗೆ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಬೇಕಾಗಿದೆ.

ಶುದ್ಧ ಕುಡಿಯುವ ನೀರು, ಸಮರ್ಪಕ ರಸ್ತೆ ಹಾಗೂ ಚರಂಡಿ ವ್ಯವಸ್ಥೆಯಿಲ್ಲದೆ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ. ಸಾರ್ವಜನಿಕರು ನಿತ್ಯ ಸಮಸ್ಯೆ ಎದುರಿಸುತ್ತಿದ್ದರೂ ಪಾಲಿಕೆ ಆಡಳಿತ ಮಾತ್ರ ನಿರ್ಲಕ್ಷ್ಯ ವಹಿಸಿದೆ ಎಂದು ಪ್ರಭಂಜನ ಕುಮಾರ್ ದೂರಿದರು.

ಅಧಿಕಾರಿಗಳ ವಿರುದ್ಧ ಅಸಮಾಧಾನ: ಧರಣಿ ಸ್ಥಳಕ್ಕೆ ಆಗಮಿಸಿದ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಭಂಜನ್ ಕುಮಾರ್, ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಪಾಲಿಕೆ ವಿಫಲವಾಗಿದೆ. ಕುಡಿಯುವ ನೀರು ಬರುತ್ತಿಲ್ಲ. ಕಲುಷಿತ ನೀರು ಕುಡಿದು ಜನರು ರೋಗಗಳಿಂದ ನರಳುವಂತಾಗಿದೆ. ಅಧಿಕಾರಿಗಳು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಬದಲು ನೆಪಗಳನ್ನು ಹೇಳುತ್ತಿದ್ದಾರೆ. ವಾರ್ಡನ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆ ನಡೆಸಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಧರಣಿಯಲ್ಲಿ ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಸ್ಥಳೀಯ ನಿವಾಸಿಗಳು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸ್ಥಳಕ್ಕೆ ಆಗಮಿಸಿದ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ ಅವರು ವಾರ್ಡ್ ಸಮಸ್ಯೆಗಳ ನೀಗಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.