(ಮಿಡಲ್‌) ದೇಶದ ಅಭಿವೃದ್ಧಿಗೆ ಭ್ರಷ್ಟಾಚಾರ ತೊಡಕು

| Published : Oct 24 2024, 12:54 AM IST

(ಮಿಡಲ್‌) ದೇಶದ ಅಭಿವೃದ್ಧಿಗೆ ಭ್ರಷ್ಟಾಚಾರ ತೊಡಕು
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಾಯುಕ್ತ ಇಲಾಖೆಯಿಂದ ನಡೆದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವನ್ನು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಇನ್ಸೆಪೆಕ್ಟರ್ ಪ್ರಕಾಶ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಸೊರಬ

ದೇಶದ ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರ ಅಡಚಣೆಯಾಗಿದ್ದು, ಅಧಿಕಾರಿಗಳು ಸಾರ್ವಜನಿಕರಿಗೆ ಪಾರದರ್ಶಕವಾಗಿ ಸೇವೆ ಒದಗಿಸಬೇಕು ಎಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಇನ್ಸೆಪೆಕ್ಟರ್ ಪ್ರಕಾಶ್ ಹೇಳಿದರು.

ಪಟ್ಟಣದ ತಾಲೂಕು ಕಚೇರಿ ಸಭಾಗಂಣದಲ್ಲಿ ಲೋಕಾಯುಕ್ತ ಇಲಾಖೆಯಿಂದ ಹಮ್ಮಿಕೊಂಡ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸರ್ಕಾರ, ನಾಗರೀಕರು ಮತ್ತು ವಿವಿಧ ಸಂಘ-ಸಂಸ್ಥೆಯವರು ಒಗ್ಗಟ್ಟಾಗಿ ಕೆಲಸ ಮಾಡಬೇಕಾಗುತ್ತದೆ, ಭ್ರಷ್ಟಾಚಾರ ನಿರ್ಮೂಲನೆಗೆ ಸಹಾಯ ಮಾಡಿದ ಸಾರ್ವಜನಿಕರ ಮಾಹಿತಿ ಗೌಪ್ಯವಾಗಿರಿಸಿ ಅವರಿಗೆ ರಕ್ಷಣೆ ಸಹ ನೀಡಲಾಗುವುದು. ಇದರಿಂದ ಇತ್ತೀಚಿಗೆ ಭ್ರಷ್ಟಾಚಾರ ನಿರ್ಮೂಲನೆಗೆ ಹೆಚ್ಚಿನ ಸಾರ್ವಜನಿಕರು ಸಹಕಾರ ನೀಡುತ್ತಿದ್ದಾರೆ ಎಂದರು.

ಕೇವಲ ಕಾಯ್ದೆ ಕಾನೂನಿನಡಿ ಪ್ರಕರಣಗಳು ದಾಖಲಿಸುವುದು ಮಾತ್ರ ಲೋಕಾಯುಕ್ತ ಕೆಲಸವಲ್ಲ. ಭ್ರಷ್ಟಾಚಾರ ತಡೆಗೆ ಸಾರ್ವಜನಿಕರು ಸಹಕರಿಸುವಂತೆ ಅರಿವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ಹೇಳಿದರು.

ಅಧಿಕಾರಿಗಳು ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಟ ಮಾಡುವುದನ್ನು ತಪ್ಪಿಸಬೇಕು. ಹಣ ಮತ್ತಿತರ ಬೇಡಿಕೆಗಳನ್ನು ಇಡದೇ ಸರ್ಕಾರ ನೀಡುವ ಸಂಬಳಕ್ಕೆ ನಿಯತ್ತಿನಿಂದ ಸೇವೆ ಸಲ್ಲಿಸಬೇಕು. ಇದರಿಂದ ಅಧಿಕಾರಿ ವರ್ಗದವರ ಮೇಲೆ ಜನತೆಯಲ್ಲಿ ಗೌರವ ಹೆಚ್ಚುತ್ತದೆ ಎಂದು ತಿಳಿಸಿದರು.

ತಹಸೀಲ್ದಾರ್ ಮಂಜುಳಾ ಹೆಗಡಾಳ್ ಮಾತನಾಡಿ, ಅಧಿಕಾರಿಗಳು ಸಾರ್ವಜನಿಕರನ್ನು ಸತಾಯಿಸದೇ ಸೇವೆಗಳನ್ನು ಒದಗಿಸಬೇಕು. ಗ್ರಾಮೀಣ ಭಾಗದ ಜನರು ತಮ್ಮ ದೈನಂದಿನ ಕಾರ್ಯಚಟುವಟಿಕೆ ಬದಿಗೊತ್ತಿ ಕಚೇರಿಗಳಿಗೆ ಬರುತ್ತಾರೆ. ಅವರಿಗೆ ತ್ವರಿತವಾಗಿ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಾರ್ವಜನಿಕರಿಂದ 5 ಅರ್ಜಿಗಳು ಲೋಕಾಯುಕ್ತಕ್ಕೆ ಸಲ್ಲಿಕೆಯಾದವು. ತಾಪಂ ಇಒ ಡಾ.ಎನ್.ಆರ್. ಪ್ರದೀಪ್‌ಕುಮಾರ್, ವಲಯ ಅರಣ್ಯಾಧಿಕಾರಿಗಳಾದ ಜಾವೇದ್ ಬಾಷಾ ಅಂಗಡಿ, ಶಗುಪ್ತ ಏ.ಶೇಖ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಜಿ.ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಇಕ್ಬಾಲ್ ಜಾತಿಗೇರ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ಬಿಇಒ ಪುಷ್ಪಾ, ಎಪಿಎಂಸಿ ಕಾರ್ಯದರ್ಶಿ ಆಶಾ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಮತ್ತು ಲೋಕಾಯುಕ್ತ ಸಿಬ್ಬಂದಿ ಉಪಸ್ಥಿತರಿದ್ದರು.