ಮಾನಸಿಕ ಕಾಯಿಲೆ ಕೇವಲ ಒಂದು ಆರೋಗ್ಯ ಸಮಸ್ಯೆಯಾಗಿದ್ದು, ಸೂಕ್ತ ಸಮಾಲೋಚನೆ (ಕೌನ್ಸೆಲಿಂಗ್) ಹಾಗೂ ಧೈರ್ಯ ತುಂಬುವ ಮೂಲಕ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಗೆ ತರಲು ಸಾಧ್ಯವಿದೆ.
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಉಪಕಾರ್ಯದರ್ಶಿ
ಕನ್ನಡಪ್ರಭ ವಾರ್ತೆ ಗದಗ
ಮಾನಸಿಕ ಕಾಯಿಲೆ ಕೇವಲ ಒಂದು ಆರೋಗ್ಯ ಸಮಸ್ಯೆಯಾಗಿದ್ದು, ಸೂಕ್ತ ಸಮಾಲೋಚನೆ (ಕೌನ್ಸೆಲಿಂಗ್) ಹಾಗೂ ಧೈರ್ಯ ತುಂಬುವ ಮೂಲಕ ವ್ಯಕ್ತಿಯನ್ನು ಸಾಮಾನ್ಯ ಸ್ಥಿತಿಗೆ ತರಲು ಸಾಧ್ಯವಿದೆ ಎಂದು ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಹೇಳಿದರು.ಮಂಗಳವಾರ ಗದಗ ನಗರದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್), ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಬಸವೇಶ್ವರ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯವಾಗಿದ್ದು, ಉತ್ತಮ ಜೀವನಶೈಲಿಯ ಮೂಲಕ ಸಮಾಜದಲ್ಲಿ ಆರೋಗ್ಯಕರ ವಾತಾವರಣ ನಿರ್ಮಿಸಬೇಕು. ಈ ಬಗ್ಗೆ ಪ್ರತಿಯೊಬ್ಬರೂ ಜಾಗೃತಿ ವಹಿಸಿದಾಗ ಮಾತ್ರ ಸಾಧ್ಯವಾಗುತ್ತದೆ ಎಂದರು.ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಜಿ.ಎಸ್. ಪಲ್ಲೇದ ಮಾತನಾಡಿ, ಮಾಹಿತಿ ಮತ್ತು ಸಂವಹನದ ಮೂಲಕ ಜನರಲ್ಲಿ ಅರಿವು ಮೂಡಿಸುವುದು, ಮಾನಸಿಕ ಸಮಸ್ಯೆ ಇರುವವರನ್ನು ಗುರುತಿಸಿ ಅವರಿಗೆ ಅಗತ್ಯ ಚಿಕಿತ್ಸೆ ನೀಡಿ ಸಹಜ ಜೀವನ ನಡೆಸಲು ನೆರವಾಗುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಸಹಾಯಕ ಕಾನೂನು ನೆರವು ಅಭಿರಕ್ಷಕ ಗುರುರಾಜ ಗೌರಿ ಮಾತನಾಡಿ, ಮಾನಸಿಕ ಆರೋಗ್ಯದ ರಕ್ಷಣೆ, ಘನತೆಯಿಂದ ಬದುಕುವುದು ಹಾಗೂ ವೈದ್ಯಕೀಯ ದಾಖಲೆಗಳನ್ನು ಪಡೆಯುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದೆ. ಅತಿಯಾದ ಒತ್ತಡ, ಖಿನ್ನತೆ ಮತ್ತು ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಾನಸಿಕ ಸಮಸ್ಯೆಗಳು ಉಲ್ಬಣಿಸುತ್ತಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ತಿಳಿಸಿ, ಪೋಕ್ಸೋ ಕಾಯ್ದೆಯ ಬಗ್ಗೆಯೂ ಮಾಹಿತಿ ನೀಡಿದರು.ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಜಿತೇಂದ್ರ ಮುಗಳಿ ವಿಶೇಷ ಉಪನ್ಯಾಸ ನೀಡಿ, ಮೂಢನಂಬಿಕೆಗಳನ್ನು ಬಿಟ್ಟು ಮಾನಸಿಕ ಸಮಸ್ಯೆಗಳಿಗೆ ವೈಜ್ಞಾನಿಕವಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು. ಅಗತ್ಯವಿರುವವರು ಸರ್ಕಾರದ ಉಚಿತ ಸಹಾಯವಾಣಿ ಸಂಖ್ಯೆ ಟೆಲಿ-ಮನಸ್ (14416) ಸಂಪರ್ಕಿಸಿ ಸಲಹೆ ಪಡೆಯಬಹುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಪ್ರೊ. ಎಂ.ಎಂ. ಬುರುಡಿ ವಹಿಸಿದ್ದರು. ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರೀತಾ ಖೋನಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ ಚವ್ಹಾಣ, ಆರೋಗ್ಯ ಮೇಲ್ವಿಚಾರಕ ಆರ್.ಎಸ್. ಬದ್ದಿ, ವಿನಾಯಕ ಕಾಳೆ, ಶೋಭಾ ವಡ್ಡರ, ವಿನಾಯಕ ವಾಗಮೋರೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಂಗಪ್ಪ ಬೆನ್ನೂರ ಕಾರ್ಯಕ್ರಮ ನಿರೂಪಿಸಿದರು. ಸಂಗೀತಾ ಮತ್ತು ಸಂಗಡಿಗರು ಪ್ರಾರ್ಥಿಸಿದರು.