ಸಾರಾಂಶ
ಹೊಸದುರ್ಗ: ಗ್ರಾಮೀಣ ಪ್ರದೇಶದ ಬಡ ಮಕ್ಕಳ ಶಿಕ್ಷಣದಿಂದ ದೇಶದ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಕಾರಿ ರಾಮಚಂದ್ರಪ್ಪ ತಿಳಿಸಿದರು.
ತಾಲೂಕಿನ ಶ್ರೀರಾಂಪುರ ಹೋಬಳಿ ಬೊಮ್ಮೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಸಂಯುಕ್ತಾಕ್ಷರದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆಯಲ್ಲಿರುವ ಆಯಾ ಗ್ರಾಮಗಳ ಅಧಿಕಾರಿಗಳು ತನ್ನೂರಿನ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಸಹಕರಿಸಿದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.ಎಸ್‌ಡಿಎಂಸಿ ಅಧ್ಯಕ್ಷ ಕಾಂತರಾಜ್ ಮಾತನಾಡಿ, ಶಿಕ್ಷಣದಿಂದ ಮಾತ್ರ ಎಲ್ಲಾ ಸಾಧಿಸಬಹುದು ಎಂಬ ಉದಾಹರಣೆಗಳು ಬಹಳಷ್ಟು ಇವೆ. ಸರ್ಕಾರಿ ಶಾಲೆಯಲ್ಲಿ ಓದಿದ ಬಹಳಷ್ಟು ವಿದ್ಯಾರ್ಥಿಗಳು ತಾಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳಾಗಿರುವ ಇತಿಹಾಸವಿದೆ. ಎಲ್ಲಾ ಸರ್ಕಾರಿ ಶಾಲೆಯಲ್ಲಿ ಓದಿದ ಹಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳ ಸಂಘ ನೋಂದಣಿ ಮಾಡಿ ಸಂಘದ ಮೂಲಕ ತಮ್ಮ ಊರುಗಳ ಶಾಲೆಗಳನ್ನು ಅಭಿವೃದ್ಧಿ ಮಾಡಿದಾಗ ಭಾರತದ ಬದಲಾವಣೆ ಕಾಣಲು ಸಾಧ್ಯವಾಗುತ್ತದೆ ಎಂದರು.
ಹಿರಿಯ ವಿದ್ಯಾರ್ಥಿ ಸಂಘದವತಿಯಿಂದ ಅತಿಥಿ ಶಿಕ್ಷಕರನ್ನು ನೇಮಿಸಿ ಪಠ್ಯ ಪುಸ್ತಕಗಳನ್ನು ಮತ್ತು ಶಾಲಾ ಪರಿಕರಗಳನ್ನು ನೀಡಲಾಯಿತು. ಗ್ರಾಮ ಪಂಚಾಯಿತಿವತಿಯಿಂದ ಸ್ಮಾರ್ಟ್ ತರಗತಿಗಳನ್ನು ನೀಡಲು ಗ್ರಾಮ ಪಂಚಾಯಿತಿಯಿಂದ ಪ್ರೊಜೆಕ್ಟರ್ ನೀಡಲಾಯಿತು.ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಾಧ್ಯಾಯ ಉಮೇಶ್ ಶಿಕ್ಷರಾದ ರತ್ನಮ್ಮ, ಅಭಿಲಾಷ್, ಮಂಜುನಾಥ್, ಕವನ, ಎಸ್‌ಬಿಐ ಮ್ಯಾನೇಜರ್ ಎಸ್ ಶಶಿಧರ, ಪೊಲೀಸ್ ತ್ಯಾಗರಾಜ್, ಬಿ.ಆರ್.ಶಶಿಧರ್, ಶಿವಪ್ರಕಾಶ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜ್ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾಂತರಾಜ್ ಮಂಜುನಾಥ್, ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ, ಓಂಕಾರ ಮೂರ್ತಿ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.