ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಶಾಲಾ ಕಾಲೇಜು ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯಕ್ಕೆ ಮಾರಕವಾಗಿರುವ ಗಾಂಜಾ ಮತ್ತಿತರ ಮಾದಕ ವಸ್ತುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಪೂರ್ಣ ಕಡಿವಾಣ ಹಾಕುವಂತೆ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.ಶುಕ್ರವಾರ ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.
ಗಾಂಜಾ ಮಾರಾಟ ಅವ್ಯಾಹತಜಿಲ್ಲೆಯಲ್ಲಿ ಮಾತ್ರವಲ್ಲದೇ ರಾಜ್ಯದಲ್ಲಿ ಗಾಂಜಾ ಅವ್ಯಾಹತವಾಗಿ ಬಳಕೆಯಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳಿವೆ. ಇದರ ವಿಚಾರದಲ್ಲಿ ದೊಡ್ಡ ಮಟ್ಟದಲ್ಲಿ ನಾನಾ ಜಾಲಗಳು ಕೆಲಸ ಮಾಡುತ್ತಿವೆ ಎನ್ನಲಾಗಿದೆ. ಗಾಂಜಾ ಮಾರಾಟ ಜಾಲಗಳಿಗೆ ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳೇ ಆಕರ್ಷಿತರಾಗಿ ಅದಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ. ಯುವಜನರ ಮೇಲೆ ಗಾಂಜಾ ಮತ್ತಿತರ ಮಾದಕ ವಸ್ತುಗಳು ದುಷ್ಪರಿಣಾಮ ಬೀರುತ್ತಿರುವ ಕಾರಣ ಅದಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದರು.
ಪೊಲೀಸರು ಶಾಮೀಲಾದರೆ ಕ್ರಮಈ ಕೃತ್ಯದಲ್ಲಿ ಪೊಲೀಸರೂ ಶಾಮೀಲಾಗಿರುವುದು ಕಂಡುಬಂದಲ್ಲಿ ಅಂತವರ ವಿರುದ್ಧವೂ ಕಠಿಣ ಕ್ರಮ ಜರುಗಿಸಲಾಗುವುದು. ಜಿಲ್ಲೆಯ ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಕಡಿವಾಣ ಹಾಕಲು ಸೂಚನೆ ನೀಡಲಾಗಿದೆ. ಮಟ್ಕಾ, ಜೂಜಾಟ, ಕ್ರಿಕೆಟ್ ಬೆಟ್ಟಿಂಗ್, ಕೋಳಿ ಪಂದ್ಯ ಮತ್ತಿತರ ಅಕ್ರಮಗಳು ಜಿಲ್ಲೆಯಲ್ಲಿ ಎಲ್ಲೂ ನಡೆಯಬಾರದು, ಸೈಬರ್ ಅಪರಾಧಗಳ ಜಾಲಕ್ಕೆ ನಮ್ಮ ಜನರು ಸಿಲುಕದಂತೆ ಅರಿವು ಮೂಡಿಸಬೇಕು ಎಂದರು.
ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಕಡಿಮೆ ಆಗಬೇಕು,ಬಾಲ್ಯ ವಿವಾಹ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗಿ ಬೆಳಿಕಿಗೆ ಬರುತ್ತಿರುವುದು ಗಮನಕ್ಕೆ ಬಂದಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳನ್ನು ಮತ್ತು ಇತರ ಇಲಾಖೆ ಅಧಿಕಾರಿಗಳ ಸಹಕಾರ ಪಡೆದು ಸಂಪೂರ್ಣವಾಗಿ ತಡೆಗಟ್ಟುವ ಕೆಲಸ ಆಗಬೇಕು, ಒಟ್ಟಾರೆಯಾಗಿ ಕಾನೂನು ವ್ಯವಸ್ಥೆಯನ್ನು ಸಮರ್ಪಕವಾಗಿ ಕಾಪಾಡಬೇಕು. ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ದಿನನಿತ್ಯ ನಿಗಾ ಇಟ್ಟು ದಂಡ ವಸೂಲಿ ಮಾಡುವ ಮತ್ತು ಪ್ರಕರಣ ದಾಖಲಿಸುವ ಕೆಲಸ ದಿನನಿತ್ಯ ನಡೆಯಬೇಕು ಎಂದರು.ಅಪಘಾತ ಸ್ಥಳಗಳನ್ನು ಗುರುತಿಸಿ
ದ್ವಿಚಕ್ರ ವಾಹನ ಸವಾರರು ಶಿರಸ್ತ್ರಾಣವನ್ನು ಧರಿಸಿ ವಾಹನ ಚಲಾಯಿಸುವಂತೆ ನೋಡಿಕೊಳ್ಳಬೇಕು ಮೊದಲು ಸರ್ಕಾರಿ ನೌಕರರು ಅಧಿಕಾರಿಗಳು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಮೂಲಕ ಜನರಲ್ಲಿ ಅರಿವು ಮೂಡಿಸಲು ಮುಂದಾಗಬೇಕು. ಆಗ ಮಾತ್ರ ಅಮಾಯಕರ ಪ್ರಾಣಗಳನ್ನು ರಕ್ಷಿಸಲು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುವ ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಿ ಅಪಘಾತಗಳ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು. ಯಾವುದೇ ರೀತಿಯ ಕಾನೂನು ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ತ್ವರಿತವಾಗಿ ಭೇದಿಸಿ ತಪ್ಪಿತಸ್ತರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಐ.ಕಾಸಿಂ, ನಗರಾಭಿವೃದ್ದಿ ಪ್ರಧಿಕಾರದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.