ಸಾರಾಂಶ
ಶಿರಸಿ: ಭವ್ಯ ಹಾಗೂ ಸದೃಢ ಭಾರತ ನಿರ್ಮಾಣ ಮಾಡುವ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗದೇ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಿಪಿಐ ಶಶಿಕಾಂತ ವರ್ಮಾ ತಿಳಿಸಿದರು.ಬುಧವಾರ ನಗರದ ಮಾರಿಕಾಂಬಾ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವದ ನಿಮಿತ್ತ ಹಮ್ಮಿಕೊಂಡ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣದಲ್ಲಿ ಮಾಧ್ಯಮ ಮತ್ತು ವಿದ್ಯಾರ್ಥಿಗಳ ಪಾತ್ರ ಕುರಿತು ಮಾತನಾಡಿದರು.ವಿದ್ಯೆ ಎಂಬ ಪ್ರಯತ್ನದಿಂದ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಂಡು ಒಳ್ಳೆಯ ಉದ್ಯೋಗ ಪಡೆಯುವತ್ತ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು. ಮಾದಕ ವಸ್ತುಗಳ ವ್ಯಸನಕ್ಕೆ ಅಂಟಿಕೊಂಡರೆ ಅದರಿಂದ ಹೊರಬರುವುದು ಬಹಳ ಕಷ್ಟ. ವಿದ್ಯಾರ್ಥಿಗಳು ದೇಶದ ಆಸ್ತಿ, ಚಟಕ್ಕೆ ಬಲಿಯಾಗದೇ ಮಾದಕ ವ್ಯಸನಿಗಳಿಂದ ದೂರ ಉಳಿದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜಿ. ಸುಬ್ರಾಯ ಭಟ್ಟ ಬಕ್ಕಳ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಮಕಾಲೀನ ಆಗು- ಹೋಗುಗಳ ತಿಳಿವಳಿಕೆ ಇದೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಅತಿಯಾದ ಬಳಕೆಯಿಂದ ಓದುವ ಹವ್ಯಾಸ ಕಡಿಮೆಯಾಗಿದ್ದು, ಚುಟುಕು ಓದಿನ ಬಗ್ಗೆ ಹೆಚ್ಚು ಆಸಕ್ತಿ ವಹಿಸುತ್ತಿದ್ದು, ಸಮಗ್ರ ಓದು ಅವಶ್ಯವಿದೆ ಎಂದರು.
ಜಿ.ಎಸ್. ಹೆಗಡೆ ಅಜ್ಜೀಬಳ ಅವರು, ೧೯೭೪ರಲ್ಲಿ ಜಿಲ್ಲಾ ಪತ್ರಿಕಾ ಮಂಡಳಿಯನ್ನು ಸ್ಥಾಪನೆ ಮಾಡಿ, ಪತ್ರಕರ್ತರೆಲ್ಲರೂ ಈ ಸಂಘದ ಅಡಿಯಲ್ಲಿ ಬರುವಂತೆ ಮಾಡಿದ್ದಾರೆ. ೧೨ ತಾಲೂಕುಗಳಲ್ಲಿ ಸಂಘವು ಕಾರ್ಯವ್ಯಾಪ್ತಿಯನ್ನು ಹೊಂದಿದೆ. ೨೦೨೪ರಲ್ಲಿ ಸಂಘವು ೫೦ ವರ್ಷ ಪೂರೈಸಿದೆ. ಈ ಕಾರಣದಿಂದ ವರ್ಷಪೂರ್ತಿ ಪ್ರತಿ ತಾಲೂಕಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.ಸಂಚಾರ ದಟ್ಟಣೆ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ನಗರ ಠಾಣೆಯ ಪಿಎಸ್ಐ ನಾಗಪ್ಪ ಬಿ. ಉಪನ್ಯಾಸ ನೀಡಿದರು. ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂದೇಶ ಭಟ್ಟ ಬೆಳಖಂಡ, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ ಪಾಟೀಲ, ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಸುಬ್ರಹ್ಮಣ್ಯ ಭಟ್ಟ ಮಾತನಾಡಿದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುಮಂಗಲಾ ಹೊನ್ನೆಕೊಪ್ಪ, ಜಿಲ್ಲಾ ಪತ್ರಿಕಾ ಮಂಡಳಿ ಕಾರ್ಯದರ್ಶಿ ಪ್ರದೀಪ ಶೆಟ್ಟಿ, ಹಿರಿಯರಾದ ಸತ್ಯನಾರಾಯಣ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು. ಉಪಾಧ್ಯಕ್ಷೆ ವಿನುತಾ ಹೆಗಡೆ ಸ್ವಾಗತಿಸಿದರು. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪತ್ರಕರ್ತ ರಾಘವೇಂದ್ರ ಬೆಟ್ಟಕೊಪ್ಪ ನಿರೂಪಿಸಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಕೆರೆಗದ್ದೆ ವಂದಿಸಿದರು.