ಸಾರಾಂಶ
ರಾಮನಗರ: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ನೀಡುವ ಸಂಬಂಧ ಕಾಯ್ದೆ ರೂಪಿಸಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನಾ ಧರಣಿ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ವಾಡೆದೊಡ್ಡಿ ಕಬ್ಬಾಳೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946ರ ಅನ್ವಯ ರಾಜ್ಯಸರ್ಕಾರ ಬಲಿಷ್ಠವಾದ ಕಾನೂನು ರೂಪಿಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕೆಂದು ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.15 ವರ್ಷಗಳ ಕಾಲ ಕರ್ನಾಟಕದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಇವರಿಗೆ ಕಡ್ಡಾಯವಾಗಿ ಕನ್ನಡ ಬರವಣಿಗೆಯ ಪರೀಕ್ಷೆಯನ್ನು ನೀಡಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಿ ಅವುಗಳಿಗೆ ಭೂಮಿ ನೀಡಲಾಗಿದ್ದರೆ ಹಿಂದಕ್ಕೆ ಪಡೆಯುವ ಮತ್ತು ಆ ಸಂಸ್ಥೆಗಳಿಗೆ ನೀಡಿರುವ ಎಲ್ಲ ಸವಲತ್ತುಗಳನ್ನು ಹಿಂದಕ್ಕೆ ಪಡೆಯುವ ನಿಯಮವನ್ನು ರೂಪಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ದಂಡ ವಿಧಿಸಬೇಕು. ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಒತ್ತಾಯಿಸಿದರು.
ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇಕಡ 100ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು. ಇತರೆ ಹುದ್ದೆಗಳಲ್ಲಿ ಶೇ.80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು. ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇಕಡ 100ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.ರಾಜ್ಯ, ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅವಕಾಶವನ್ನು ಉದ್ದೇಶಿತ ಕಾನೂನಿನಲ್ಲಿ ಅಳವಡಿಸಬೇಕು.
ರಾಜ್ಯ ಸರ್ಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡಬೇಕು. ಮುಂದೆ ಕಾನೂನು ಸಮಸ್ಯೆಗಳು ಎದುರಾದರೆ ಅದನ್ನು ಎದುರಿಸಲು ಸಮರ್ಥ ವಕೀಲರ ತಂಡವನ್ನು ಸಿದ್ಧಪಡಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ವೇದಿಕೆ ರಾಮನಗರ ತಾಲೂಕು ಅಧ್ಯಕ್ಷ ಟಿ ಆರ್. ದೇವರಾಜು, ಹಾರೋಹಳ್ಳಿ ತಾಲೂಕು ಅಧ್ಯಕ್ಷ ಕೆ.ಆರ್. ಶ್ರೀನಿವಾಸ್, ಜಿಲ್ಲಾ ರೈತ ಘಟಕ ಅಧ್ಯಕ್ಷ ಶಂಭೂಗೌಡ, ಮುಖಂಡರಾದ ಜಗದೀಶ್, ಕೆ.ಎಂ. ನಾಗರಾಜ್, ನೀಲಿ ರಮೇಶ್, ಗೋವಿಂದರಾಜು ಮಹೇಶ್ ಬಾಬು, ಭೀಮಲಿಂಗೇಗೌಡ, ಶಿವರಾಜ್‌ಗೌಡ, ಹರೀಶ್, ಆನಂದ್, ಪಾಲಾಕ್ಷ, ಸುಂದರ ಕೃಷ್ಣ, ಜಿ.ಡಿ. ಮಹದೇವ್, ನಟರಾಜ್ ಗೌಡ, ನವೀನ್, ಬಸವರಾಜು ಮತ್ತಿತರರು ಭಾಗವಹಿಸಿದ್ದರು.ಬಾಕ್ಸ್............
ವಲಸಿಗರಿಂದ ನಿರುದ್ಯೋಗಿಗಳಾದ ಕನ್ನಡಿಗರುಈ ವೇಳೆ ವೇದಿಕೆ ಜಿಲ್ಲಾಧ್ಯಕ್ಷ ವಾಡೆದೊಡ್ಡಿ ಕಬ್ಬಾಳೇಗೌಡ ಮಾತನಾಡಿ, ಕರ್ನಾಟಕ ದೇಶದಲ್ಲಿಯೇ ಅತಿ ಹೆಚ್ಚು ಭೌಗೋಳಿಕ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯ. ಹೀಗಾಗಿಯೇ ಇತರೆ ರಾಜ್ಯಗಳಿಂದ ದೊಡ್ಡ ಪ್ರಮಾಣದ ವಲಸೆ ನಡೆದುಕೊಂಡು ಬಂದಿದೆ. ಎರಡು - ಮೂರು ದಶಕಗಳಲ್ಲಿ ಅದು ತಾರಕಕ್ಕೇರಿದೆ. ಮೊದಲು ದಕ್ಷಿಣ ಭಾರತದ ಇತರ ರಾಜ್ಯಗಳಿಂದ ಜನರು ವಲಸೆ ಬಂದರು. ಈಗ ಉತ್ತರ ಮತ್ತು ಈಶಾನ್ಯ ರಾಜ್ಯಗಳ ಜನರ ಪ್ರವಾಹವೇ ಹರಿದು ಬರುತ್ತಿದೆ. ರಾಜ್ಯದ ಮಹಾನಗರಗಳಲ್ಲಿ ವಲಸೆ ಪ್ರಮಾಣ ಮಿತಿ ಮೀರಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ವಲಸೆಯಿಂದ ಕನ್ನಡದ ಯುವ ಸಮುದಾಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಕನ್ನಡಿಗರಿಗೆ ಉದ್ಯೋಗ ಇಲ್ಲದಂತಾಗಿದೆ. ಕನ್ನಡ ನೆಲದಲ್ಲಿ ಸ್ಥಾಪಿತವಾಗಿರುವ ಖಾಸಗಿ ಸಂಸ್ಥೆಗಳು ಹೊರ ರಾಜ್ಯಗಳ ಮಾನವ ಸಂಪನ್ಮೂಲ ಅಧಿಕಾರಿಗಳನ್ನೇ ನೇಮಿಸಿಕೊಳ್ಳುತ್ತಿವೆ. ಅವರು ತಮ್ಮ ರಾಜ್ಯದ ಯುವಕ ಯುವತಿಯರಿಗೆ ಕರೆತಂದು ಕೆಲಸ ಕೊಡುತ್ತಿದ್ದಾರೆ. ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರ ಪ್ರಮಾಣ ದಿನೇ ದಿನೇ ಕುಸಿಯುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಕನ್ನಡಿಗರು ತಮ್ಮ ನೆಲದಲ್ಲಿ ತಾವೇ ಅತಂತ್ರರಾಗಿ ನರಕಯಾತನೆ ಅನುಭವಿಸುವ ಸ್ಥಿತಿ ಬಂದೊದಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.ಡಾ.ಸರೋಜಿನಿ ಮಹಿಷಿ ವರದಿ ಸಮರ್ಪಕ ಜಾರಿಗೆ ಆಗ್ರಹ:
ರಾಜ್ಯಸರ್ಕಾರ ಡಾ.ಸರೋಜಿನಿ ಮಹಿಷಿ ವರದಿ ಸಮರ್ಪಕವಾಗಿ ಜಾರಿಗೆ ತಂದಿಲ್ಲ. ಇದರಲ್ಲಿ ಜಾರಿ ಮಾಡಿದ ಕೆಲ ಅಂಶಗಳನ್ನು ಖಾಸಗಿ ಸಂಸ್ಥೆಗಳು ಗಾಳಿಗೆ ತೂರಿವೆ. ರಾಜ್ಯಸರ್ಕಾರ 2019ರಲ್ಲಿ ಕಾರ್ಮಿಕ ಇಲಾಖೆಯ ಮೂಲಕ ಸ್ಥಾಯಿ ಆದೇಶದ ನಿಯಮಗಳಿಗೆ ಬದಲಾವಣೆ ಮಾಡಿ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ಒದಗಿಸಲು ಖಾಸಗಿ ವಲಯಕ್ಕೆ ಸೂಚಿಸಿತಾದರೂ ಎಷ್ಟು ಪ್ರಮಾಣದಲ್ಲಿ ಆದ್ಯತೆ ನೀಡಬೇಕು ಎಂಬುದು ಸ್ಪಷ್ಟ ಇರಲಿಲ್ಲ. ಹೀಗಾಗಿ ಈ ಕಾನೂನಿಗೆ ಯಾವ ಬಲವೂ ಇರಲಿಲ್ಲ, ಅರ್ಥವೂ ಇರಲಿಲ್ಲ ಎಂದು ಟೀಕಿಸಿದರು.ಕೇಂದ್ರ ಸರ್ಕಾರದ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946ರ ಪ್ರಕಾರ ಆಯಾ ರಾಜ್ಯಗಳಲ್ಲಿ ನಿಯಮಾವಳಿ ರೂಪಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗೆ ಇರುತ್ತದೆ. ರಾಜ್ಯಸರ್ಕಾರವು ರೂಪಿಸುವ ಕಾನೂನನ್ನು 50ಕ್ಕೂ ಹೆಚ್ಚು ಮಂದಿ ನೌಕರರನ್ನು ಹೊಂದಿರುವ ಕೈಗಾರಿಕೆಗಳನ್ನು ಪಾಲಿಸಬೇಕಾಗುತ್ತದೆ. ಈ ಕಾಯ್ದೆಯಡಿ ರಾಜ್ಯಸರ್ಕಾರ ಪ್ರತ್ಯೇಕ ಕಾನೂನನ್ನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿ ಮಾಡಬಹುದಾಗಿದೆ. ಇದಕ್ಕೆ ರಾಜ್ಯಸರ್ಕಾರ ಇಚ್ಛಾಶಕ್ತಿಯನ್ನು ತೋರಬೇಕು ಎಂದು ಕಬ್ಬಾಳೇಗೌಡ ಹೇಳಿದರು.
1ಕೆಆರ್ ಎಂಎನ್ 1.ಜೆಪಿಜಿರಾಮನಗರ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.