ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತು ವ್ಯಸನಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಿದ್ದು ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತು ವ್ಯಸನಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಿದ್ದು ಈ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಮಾದಕ ವಸ್ತು ದ್ರವ್ಯ ಸಮನ್ವಯ ಕೇಂದ್ರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುವಜನರು ಮಾದಕ ವಸ್ತುಗಳ ಚಟಕ್ಕೆ ತುತ್ತಾಗಿ, ಇಡೀ ಜೀವನವನ್ನೇ ಹಾಳುಮಾಡಿ ಕೊಳ್ಳುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಶಾಲಾ-ಕಾಲೇಜು ವಿದ್ಯಾರ್ಥಿ ನಿಲಯಗಳು ಸೇರಿದಂತೆ ಎಲ್ಲೆಡೆ ಅರಿವು ಮೂಡಿಸಬೇಕು. ಈ ಬಗ್ಗೆ ಕಾರ್ಯಕ್ರಮ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಕಾಲೇಜು ಶಿಕ್ಷಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಸಮಗ್ರ ಗಿರಿಜನ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಕೃಷಿ, ತೋಟಗಾರಿಕೆ, ಪಶುಪಾಲನೆ, ಯುವ ಸಬಲೀಕರಣ, ಕಾರ್ಮಿಕ, ಹೀಗೆ ವಿವಿಧ ಇಲಾಖೆಗಳು ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಪರಿಣಾಮ ಕುರಿತು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಲು ಶ್ರಮಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂಧುಮಣಿ ಮಾತನಾಡಿ ಮಾದಕ ವಸ್ತು ಜಾಲದ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಜಿಲ್ಲೆಯ ಗಡಿ ಭಾಗದಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕಿದೆ ಎಂದರು.
ಅಂತರರಾಜ್ಯ ಗಡಿ ಪ್ರದೇಶದ ಚೆಕ್‌ಪೋಸ್ಟ್‌ಗಳಲ್ಲಿ ವಾಹನ ಮತ್ತು ಪ್ರಯಾಣಿಕರ ತಪಾಸಣೆ ಮಾಡಬೇಕಿದೆ. ಮಾದಕ ವಸ್ತುಗಳ ಸೇವನೆ ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ಡ್ರಗ್ ಟೆಸ್ಟ್ ಕಿಟ್ ಅನ್ನು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಸಲಹೆ ಮಾಡಿದರು. ಶಾಲಾ-ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ರ‍್ಯಾಂಡಮ್ ಆಗಿ ಪರೀಕ್ಷೆ ಮಾಡುವಂತಾಗಬೇಕು. ಸಂಶಯ ಕಂಡುಬಂದಲ್ಲಿ ಪರೀಕ್ಷೆ ಮಾಡಬೇಕು. ಆ ನಿಟ್ಟಿನಲ್ಲಿ ಮಾದಕ ವಸ್ತುಗಳ ಬಳಕೆ ತಡೆಯಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಅವರು ಹೇಳಿದರು. ಕೆಮಿಕಲ್ ಹೆಸರಿನಲ್ಲಿ ಡ್ರಗ್ಸ್ ತಯಾರು ಮಾಡುವ ಬಗ್ಗೆ ಅಲ್ಲಲ್ಲಿ ಕೇಳಿ ಬರುತ್ತಿದೆ. ಆದ್ದರಿಂದ ಈ ಬಗ್ಗೆಯೂ ಹೆಚ್ಚಿನ ಎಚ್ಚರ ವಹಿಸುವಂತಾಗಬೇಕು ಎಂದು ಬಿಂದುಮಣಿ ಅವರು ಹೇಳಿದರು. ಜಿಲ್ಲೆಯಲ್ಲಿ ಮಾದಕ ವಸ್ತುಗಳಿಗೆ ಸಂಬಂಧಿಸಿದಂತೆ 58 ಪ್ರಕರಣಗಳು ದಾಖಲಾಗಿದ್ದು, ಸುಮಾರು ಎರಡೂವರೆ ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿವರಿಸಿದರು. ಮಾದಕ ವಸ್ತುಗಳ ದುಷ್ಪರಿಣಾಮ ಬಗ್ಗೆ ಜಾಗೃತಿ ಮೂಡಿಸಿದಲ್ಲಿ ಉತ್ತಮ ಸಮಾಜ ಕಟ್ಟಲು ಸಾಧ್ಯ. ಆ ನಿಟ್ಟಿನಲ್ಲಿ ಅಪರಾಧ ಪ್ರಕರಣಗಳನ್ನು ತಡೆಯಬಹುದು. ಇದರಿಂದ ಸಮಾಜವನ್ನು ಸರಿದಾರಿಗೆ ಕೊಂಡೊಯ್ಯಲು ಶ್ರಮಿಸಬಹುದು ಎಂದು ಬಿಂಧುಮಣಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ನಿತಿನ್ ಚಕ್ಕಿ ಅವರು ಜಿಲ್ಲೆಯ ಹೋಂ ಸ್ಟೇ ಗಳಲ್ಲಿಯೂ ರ‍್ಯಾಂಡಮ್ ಆಗಿ ಪರೀಕ್ಷಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ‘ನಶ ಮುಕ್ತ ಭಾರತ’ ಹೆಸರಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಹೇಳಿದರು. ಮಾದಕ ವಸ್ತುಗಳಿಗೆ ತುತ್ತಾದವರಿಗೆ ಪುನರ್ ವಸತಿ ಕಲ್ಪಿಸುವಂತಾಗಬೇಕು. ಆ ನಿಟ್ಟಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಈ ಬಗ್ಗೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರು ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆಗೆ ಕೈಜೋಡಿಸಲಾಗುವುದು. ಮಾದಕ ವಸ್ತುಗಳ ನಿಯಂತ್ರಣ ಸಂಬಂಧ ಜಿಲ್ಲಾ ಪೊಲೀಸ್ ಇಲಾಖೆ ಜೊತೆ ಸಹಕರಿಸಲಾಗುವುದು ಎಂದರು.