ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಿ

| Published : Jan 23 2025, 12:50 AM IST

ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಯುವಜನರಿಗೆ, ಸಾರ್ವಜನಿಕರಿಗೆ ಪ್ರಜಾಪ್ರಭುತ್ವದಲ್ಲಿ ಚುನಾವಣೆ ಪ್ರಕ್ರಿಯೆಯ ಪಾತ್ರ, ಮತದಾನದ ಮಹತ್ವದ ಕುರಿತು ಅರಿವು ಮೂಡಿಸಬೇಕಿದೆ. ಆ ನಿಟ್ಟಿನಲ್ಲಿ ಈ ವರ್ಷವೂ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುವುದು. ಪ್ರತಿ ವರ್ಷವೂ ಜ. 25 ರಂದು ವಿನೂತನ ಧ್ಯೇಯ ವಾಕ್ಯದೊಂದಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಯುವಜನರಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಜ. 25 ರಂದು ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ ಆಯೋಜನೆ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬುಧವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ “ರಾಷ್ಟ್ರೀಯ ಮತದಾರರ ದಿನಾಚರಣೆ” ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತದಾನ ಕುರಿತು ಜನಜಾಗೃತಿ

ಯುವಜನರಿಗೆ, ಸಾರ್ವಜನಿಕರಿಗೆ ಪ್ರಜಾಪ್ರಭುತ್ವದಲ್ಲಿ ಚುನಾವಣೆ ಪ್ರಕ್ರಿಯೆಯ ಪಾತ್ರ, ಮತದಾನದ ಮಹತ್ವದ ಕುರಿತು ಅರಿವು ಮೂಡಿಸಲು ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಈ ವರ್ಷವೂ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುವುದು. ಪ್ರತಿ ವರ್ಷವೂ ಜ. 25 ರಂದು ವಿನೂತನ ಧ್ಯೇಯ ವಾಕ್ಯದೊಂದಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಹೊಸ ಹಾಗೂ ಯುವ ಮತದಾರರಿಗೆ ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ನೀಡಿ ಮತದಾನದ ಸಾಕ್ಷರತೆಯ ಜಾಗೃತಿ ಮೂಡಿಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಮಾಡಬೇಕಿದೆ ಎಂದರು. ಜಿಲ್ಲೆಯ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆ, ಭಿತ್ತಿಪತ್ರ, ರಸ ಪ್ರಶ್ನೆ ಹಾಗೂ ಚರ್ಚಾ ಸ್ಪರ್ಧೆ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಪದವಿ, ಸ್ನಾತಕೋತ್ತರ, ತತ್ಸಮಾನ ವಿದ್ಯಾರ್ಥಿಗಳಿಗೆ ಮತದಾರರ ಜಾಗೃತಿ ರೀಲ್ಸ್ ಚಟುವಟಿಕೆಗಳನ್ನು ಆಯೋಜಿಸಬೇಕು. ಎಲ್ಲ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ನೀಡಬೇಕು. ಸ್ಪರ್ಧೆಗಳನ್ನು ತಾಲೂಕು, ಜಿಲ್ಲಾ ಮಟ್ಟದಲ್ಲಿ ಆಯೋಜನೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.ಜಿಲ್ಲಾ ಮಟ್ಟದ ಕಾರ್ಯಕ್ರಮ

ರಾಷ್ಟ್ರೀಯ ಮತದಾರ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜನವರಿ 25 ರಂದು ಸಮರ್ಪಕವಾಗಿ ಆಯೋಜಿಸಬೇಕು. ಜೊತೆಗೆ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ, ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಜನವರಿ 24 ರಂದು ಕಡ್ಡಾಯವಾಗಿ ಪ್ರತಿಜ್ಞಾವಿಧಿಯನ್ನು ಬೋಧಿಸಿ ರಾಷ್ಟ್ರೀಯ ಮತದಾರ ದಿನಾಚರಣೆಯನ್ನು ಆಚರಿಸಬೇಕು. ಚುನಾವಣಾ ಆಯೋಗದ ಅಂತರ್ಜಾಲ ಹಾಗೂ ಸಾಮಾಜಿಕ ಜಾಲತಾಣಕ್ಕೆ ಪ್ರತಿಜ್ಞಾವಿಧಿ ಬೋಧನೆಯ ವಿಡಿಯೋಗಳನ್ನು ಹಂಚಿಕೊಳ್ಳಬೇಕು. ಜಿಲ್ಲೆಯ ಎಲ್ಲ ಮತಗಟ್ಟೆಗಳ ಹಂತದಲ್ಲಿಯೂ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮವನ್ನು ಆಚರಿಸಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಅಧಿಕಾರಿಗಳು ಸಿಬ್ಬಂದಿ ನಿಗಾ ವಹಿಸಬೇಕು ಎಂದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಈಶ್ವರಪ್ಪ, ಚುನಾವಣಾ ತಹಸೀಲ್ದಾರ್ ಕೆ.ಶ್ವೇತಾ, ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.