ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಬಾಲ್ಯವಿವಾಹ ಎಂಬ ಸಮಾಜಿಕ ಪಿಡುಗನ್ನು ತೊಡೆದುಹಾಕಲು ಜಿಲ್ಲೆಯಲ್ಲಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಹೇಳಿದರು.ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಬಾಲನ್ಯಾಯ ಕಾಯ್ದೆ ಅನುಷ್ಠಾನ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನ ಸಭೆ ನಡೆಸಿ ಮಾತನಾಡಿದರು.
ಬಾಲ್ಯ ವಿವಾಹಗಳು ಜಿಲ್ಲೆಯಲ್ಲಿ ಹೆಚ್ಚು ನಡೆಯುವ ಗ್ರಾಮಗಳನ್ನು ಪಟ್ಟಿ ಮಾಡಿ ಅಂತಹ ಗ್ರಾಮಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು. ಜೊತೆಗೆ ಜಾಗೃತಿ ಶಿಬಿರ ಆಯೋಜಿಸುವಂತೆ ಸಲಹೆ ನೀಡಿದರು.ಬಾಲ್ಯ ವಿವಾಹದ ದುಷ್ಪರಿಣಾಮಗಳ ಬಗ್ಗೆ ಮಕ್ಕಳಲ್ಲಿ ಹೆಚ್ಚು ಅರಿವು ಮೂಡಿಸಬೇಕು. ಶಾಲೆಗಳಲ್ಲಿ ಪ್ರಬಂಧ, ಚರ್ಚಾ ಸ್ಪರ್ಧೆ ಏರ್ಪಡಿಸಿ ಇದರಲ್ಲಿ ಪ್ರಥಮ ಮತ್ತು ದ್ವಿತೀಯ ಬಹುಮಾನ ನೀಡಿ ಇದರಿಂದ ಮಕ್ಕಳು ಮಾಹಿತಿಯನ್ನು ತಿಳಿದುಕೊಂಡಂತಾಗುತ್ತದೆ. ಅದರ ಅರಿವು ಕೂಡ ಮೂಡುತ್ತದೆ ಎಂದರು.
ಭಾರತ ದೇಶ ಸಾಕ್ಷರತೆ ವಿಷಯದಲ್ಲಿ ಮುಂದೆ ಸಾಗುತ್ತಿದ್ದರೂ ಬಾಲ್ಯ ವಿವಾಹ, ಬಾಲಾಪರಾಧ, ಬಾಲ ಕಾರ್ಮಿಕ ಪದ್ಧತಿ, ಹೆಣ್ಣು ಭ್ರೂಣ ಹತ್ಯೆಯಂತಹ ಪ್ರಕರಣಗಳು ಕಂಡುಬರುತ್ತಿರುವುದು ಶೋಚನೀಯ ವಿಷಯವಾಗಿದೆ. ಇಂತಹ ಅನಿಷ್ಠ ಪದ್ಧತಿಗಳನ್ನು ದೂರಮಾಡಲು ಸಾರ್ವಜನಿಕರು ಕೈಜೋಡಿಸಬೇಕು ಎಂದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಆನಂದ್ ಮಾತನಾಡಿ, ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ ಎಂಬುದು ಸಾರ್ವಜನಿಕರಿಗೆ ಮನದಟ್ಟಾಗಬೇಕು. ಆಗ ಮಾತ್ರ ಬಾಲ್ಯವಿವಾಹ ಪದ್ಧತಿಯನ್ನು ಸಮಾಜದಿಂದ ಸಂಪೂರ್ಣವಾಗಿ ತೊಡೆದುಹಾಕಲು ಸಾಧ್ಯ. ಬಾಲ್ಯವಿವಾಹ ನಡೆಯುವುದು ಕಂಡುಬಂದ ಕೂಡಲೇ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳು ಅಥವಾ ಪೊಲೀಸ್ ಅವರಿಗೆ ದೂರು ಸಲ್ಲಿಸಿ ಅವುಗಳನ್ನು ತಡೆಗಟ್ಟಲು ಸಹಕರಿಸುವಂತೆ ಮನವಿ ಮಾಡಿದರು.
ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಮಿಕ್ಕೆರೆ. ವೆಂಕಟೇಶ್ ಮಾತನಾಡಿ, ನಮ್ಮ ರಾಜ್ಯದಲ್ಲಿ ಬಾಲ್ಯ ವಿವಾಹ ನಿಷೇಧ, ಬಾಲನ್ಯಾಯ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಪದ್ದತಿ ಇಂತಹ ಹಲವಾರು ಅನಿಷ್ಟ ಪದ್ಧತಿ ಹೋಗಲಾಡಿಸಲು ಸಂಬಂಧ ಪಟ್ಟ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.ಜಿಲ್ಲೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಿದೆ. ಬಾಲ್ಯ ವಿವಾಹವನ್ನು ತಡೆಯಲು ತಳ ಮಟ್ಟದ ಅಧಿಕಾರಿಗಳ ಪಾತ್ರ ಹೆಚ್ಚಿರುತ್ತದೆ. ಸದಾ ತಮ್ಮ ಸುತ್ತಮುತ್ತಲಿನ ಜನರೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಬಾಲ್ಯ ವಿವಾಹ ನಡೆಯದಂತೆ ಎಚ್ಚರ ವಹಿಸಬೇಕು ಎಂದರು.
ಸಭೆಯಲ್ಲಿ ಬಿಇಒ ಮಹದೇವ, ಕೆ.ಟಿ.ಸೌಭಾಗ್ಯ, ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ ಕುಮಾರ್, ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಮುಡಾ ಆಯುಕ್ತರಾದ ಐಶ್ವರ್ಯ, ಕಾರ್ಮಿಕ ಇಲಾಖೆಯ ಅಧಿಕಾರಿ ಚೇತನ್ ಕುಮಾರ್, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.