ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಮೀಸಲಾದ ಅನುದಾನವನ್ನು ಆ ಸಮುದಾಯದ ಅಭಿವೃದ್ಧಿಗೆ ವೆಚ್ಚಮಾಡಬೇಕು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.

ಹಾವೇರಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು ಗ್ರಾಮ ಪಂಚಾಯ್ತಿವಾರು ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ದೌರ್ಜನ್ಯ ತಡೆಗೆ ಅಗತ್ಯ ಕ್ರಮವಹಿಸಿ ಸಮಾಜದಲ್ಲಿ ಬದಲಾವಣೆ ತರಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಮೀಸಲಾದ ಅನುದಾನವನ್ನು ಆ ಸಮುದಾಯದ ಅಭಿವೃದ್ಧಿಗೆ ವೆಚ್ಚಮಾಡಬೇಕು ಎಂದರು.

ಅಧಿಕಾರಿಗಳು ಸಮಾಜದ ಪರವಾಗಿ ಕಾಳಜಿಯಿಂದ ಕೆಲಸ ಮಾಡುತ್ತಾರೆ. ಅಭಿವೃದ್ಧಿ ಕೆಲಸಗಳಲ್ಲಿ ಅಡಚಣೆಯಾದ ಸಂದರ್ಭದಲ್ಲಿ ಸಮಾಜದ ಮುಖಂಡರು ಕಾಮಗಾರಿಗಳ ಅನುಷ್ಠಾನಕ್ಕೆ ಸಹಕಾರ ನೀಡಬೇಕು, ಸಮಾಜದಲ್ಲಿ ಬದಲಾವಣೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ಈಗಾಗಲೇ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಕಾಲೋನಿಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಒಂದು ವೇಳೆ ಅಭಿವೃದ್ಧಿಯಾಗದ ಕಾಲೋನಿಗಳ ಬಗ್ಗೆ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಗಮನಕ್ಕೆ ತರಬಹುದು ಎಂದರು.

ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವಂತೆ, ಇಲಾಖಾವಾರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಹಂಚಿಕೆಯಾಗುವ ಅನುದಾನದ ಮಾಹಿತಿ ನೀಡುವಂತೆ, ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಯೋಜನೆಗೆ ಮೀಸಲಾದ ಅನುದಾನ ಆಯಾ ಸಾಲಿನಲ್ಲೇ ವೆಚ್ಚವಾಗಬೇಕು, ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ತಲುಪಬೇಕು. ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ವೇತನ ಪಾವತಿಯಾಗಬೇಕು, ಯಾವ ಯಾವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳ ಮಾಹಿತಿ ನೀಡುವಂತೆ, ಗುತ್ತಲದಲ್ಲಿ ನೂತನ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಮಾಡುವಂತೆ, ಬಾಳಂಬೀಡ ಗ್ರಾಮದಲ್ಲಿ ಎಸ್ಸಿ ಎಸ್.ಟಿ. ಕಾಲೋನಿಯಲ್ಲಿ ಪಕ್ಕಾ ಗಟಾರ್ ನಿರ್ಮಾಣ ಹಾಗೂ ಹೈ ಮಾಸ್ಟ್‌ ದೀಪ ಅಳವಡಿಕೆ, ಬರಡಿ-ಮರಡೂರ ಗ್ರಾಮದಲ್ಲಿ ಸ್ಮಶಾನಕ್ಕೆ ಜಮೀನು ಹಾಗೂ ಸನ್ಮಾನಕ್ಕೆ ಹೋಗಲು ರಸ್ತೆ, ಮೆಡ್ಲೇರಿ ಗ್ರಾಮದ ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ಸಣ್ಣ ನೀರಾವರಿ ಇಲಾಖೆಯವರು ನಿರ್ಮಾಣ ಮಾಡಿದ ಕಾಲುವೆಯಲ್ಲಿ ನೀರು ನಿಂತು ತೊಂದರೆಯಾಗುತ್ತಿರುವ ಬಗ್ಗೆ, ವಿವಿಧ ಬ್ಯಾಂಕ್‌ಗಳಲ್ಲಿ ಗ್ಯಾರಂಟಿ ಯೋಜನೆ ಹಣ, ನರೇಗಾ ಕೂಲಿ ಹಣ, ಬೆಳೆ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿದ್ದು, ಸರ್ಕಾರದ ಯೋಜನೆಗಳ ಹಣವನ್ನು ಸಾಲಕ್ಕೆ ಜಮೆ ಮಾಡದಂತೆ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡುವಂತೆ ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರಾದ ಶಿವರಾಜ ಹರಿಜನ, ಬಸವರಾಜ ಹೆಡಿಗ್ಗೊಂಡ, ಸಂಜಯಗಾಂಧಿ ಸಂಜೀವಣ್ಣನವರ, ಎನ್.ಎಂ. ಗಾಳೆಮ್ಮನವರ, ರಮೇಶ ಕೊರವರ, ಅಜ್ಜಪ್ಪ ಗೋಣೆಮ್ಮನವರ, ಯಲ್ಲಪ್ಪ ದೇವಗಿರಿ, ಜಗದೀಶ ಅವರುಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಸುತ್ತಿರುವ ಪೌರ ಕಾರ್ಮಿಕರ ವೇತನ ಪಾವತಿಗೆ ಮೊದಲ ಆದ್ಯತೆ ನೀಡಬೇಕು. ಜೊತೆಗೆ ಕರ ವಸೂಲಿಗೆ ಹೆಚ್ಚಿನ ಗಮನಹರಿಸಬೇಕು. ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಬೇಕು. ಸ್ಮಶಾನದ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ಸ್ಮಶಾನಕ್ಕೆ ಹೋಗಲು ದಾರಿ ಸಮಸ್ಯೆ ಇರುವ ಬಗ್ಗೆ ಮಾಹಿತಿ ಪಡೆದುಕೊಂಡು ಕೂಡಲೇ ಜಮೀನು ಗುರುತಿಸಬೇಕು. ಸಭೆಯ ಗಮನಕ್ಕೆ ತರಲಾದ ಎಲ್ಲ ಸಮಸ್ಯೆಗಳನ್ನು ಆದ್ಯತೆ ಮೇರಗೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ, ಅಕ್ಟೋಬರ್‌ನಿಂದ ಡಿಸೆಂಬರ್‌ ವರೆಗೆ 17 ಪ್ರಕರಣಗಳು ದಾಖಲಾಗಿದ್ದು, ಎಲ್ಲ ಪ್ರಕರಣಗಳಲ್ಲಿ ಪರಿಹಾರ ಮಂಜೂರ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್ ಮಾತನಾಡಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಮೀಸಲಾದ ಅನುದಾನವನ್ನು ಆಯಾ ಸಮುದಾಯಕ್ಕೆ ವೆಚ್ಚ ಮಾಡಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಮಾತನಾಡಿ, ದೌರ್ಜನ್ಯ ಪ್ರಕರಣಗಳ ತಡೆಗೆ ಸಮಾಜದ ಮುಖಂಡರ ಸಹಕಾರ ತುಂಬಾ ಅಗತ್ಯವಾಗಿದೆ. ಕಾಯ್ದೆಗಳ ದುರುಪಯೋಗಬಾರದು. ಈ ಹಿನ್ನೆಲೆಯಲ್ಲಿ ಎಲ್ಲರ ಸಹಕಾರ ಬಹಳ ಮುಖ್ಯವಾಗಿದೆ ಎಂದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ಜಂಟಿ ಕೃಷಿ ನಿರ್ದೇಶಕ ಡಾ. ಮಲ್ಲಿಕಾರ್ಜುನ, ತೋಟಗಾರಿಕೆ ಜಂಟಿ ನಿರ್ದೇಶಕ ಸಿದ್ದರಾಮಯ್ಯ ಬರಗಿಮಠ, ಜಿಲ್ಲಾ ಸರ್ಕಾರಿ ಅಭಿಯೋಜಕ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರಗಳು, ಸ್ಥಳೀಯ ನಗರ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಇತರರು ಉಪಸ್ಥಿತರಿದ್ದರು.