ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲರ
ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ಸಲುವಾಗಿ ರಸ್ತೆ ಸುರಕ್ಷತಾ ನಿಯಮ ಪಾಲನೆಯಾಗುವಂತೆ ಅಧಿಕಾರಿಗಳು ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಪಘಾತ ಪ್ರಮಾಣ ಕಡಿಮೆ ಮಾಡಲು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಕುರಿತು ಅಧಿಕಾರಿಗಳು ನಿಯಮಗಳ ಬಗ್ಗೆ ಅರಿವು ಮೂಡಿಸಬೇಕು.
ರಸ್ತೆಯ ಮಧ್ಯದಲ್ಲಿರುವ ವಿದ್ಯುತ್ ಕಂಬಗಳನ್ನು ತೆರವುಗೊಳಿಸಬೇಕು. ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವಲ್ಲಿ ರಸ್ತೆ ಸುಧಾರಣೆ ಹಾಗೂ ರಸ್ತೆ ಸುರಕ್ಷಾ ನಿಯಮ ಅನುಸರಿಸುವಂತೆ ಮತ್ತು ವೈಜ್ಞಾನಿಕ ರಸ್ತೆ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆ ಕ್ರಮ ಕೈಗೊಂಡು ಅಪಘಾತ ಕಡಿಮೆಯಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದಾಗ ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗುವ ಸಲುವಾಗಿ ಅಂಬುಲೆನ್ಸ್ ವ್ಯವಸ್ಥೆ ಮಾಡಬೇಕು ಎಂದರು.
ಪೊಲೀಸ್ ಅಧಿಕಾರಿಗಳು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಶಾಲೆಗಳಿಗೆ ಹೋಗಿ ಮಕ್ಕಳಿಗೆ ರಸ್ತೆ ಸುರಕ್ಷಾ ನಿಯಮಗಳ ಪಾಲನೆಯ ಕುರಿತು ವಿವರಣೆ ನೀಡಬೇಕು. ಶಾಲಾ ವಾಹನಗಳ ಸುರಕ್ಷತೆ ಮತ್ತು ವಾಹನಗಳ ಅಗತ್ಯ ದಾಖಲಾತಿ ನಿರ್ವಹಿಸುತ್ತಿರುವ ಬಗ್ಗೆ ಆಗಾಗ ಖಚಿತಪಡಿಸಿಕೊಂಡು ಮಾಹಿತಿ ಸಂಗ್ರಹಿಸಬೇಕು ಎಂದು ಹೇಳಿದರು.ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳನ್ನು ಸಾರಿಗೆ ಇಲಾಖೆ ತಪಾಸಣೆ ನಡೆಸಬೇಕು. ಸಂಚಾರ ದಟ್ಟಣೆ ಹೆಚ್ಚುವ ಸ್ಥಳದಲ್ಲಿ ಅಗತ್ಯ ಮಾಹಿತಿ ಫಲಕ ಅಳವಡಿಸಬೇಕು ಎಂದು ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿಯಿಂದ ಪಟ್ಟಣಕ್ಕೆ ಸೇರುವ ಒಳರಸ್ತೆಯಲ್ಲಿ ರೋಡ್ ಬ್ರೇಕರ್‌ಗಳನ್ನು ಅಳವಡಿಸಬೇಕು. ಹೆದ್ದಾರಿಯಲ್ಲಿ ಪೊಲೀಸ್ ಪೆಟ್ರೋಲಿಂಗ್ ವಾಹನ ಕಾಯ್ದಿರಿಸಬೇಕು. ಅಪಘಾತ ಸಂಭವಿಸಿದ ತಕ್ಷಣ ಗಾಯಾಳುಗಳಿಗೆ ವೈದ್ಯಕೀಯ ಚಿಕಿತ್ಸೆ ದೊರಕಿಸಲು ಕ್ರಮ ಕೈಗೊಳ್ಳಬೇಕು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ, ಕೆ.ಜಿ.ಎಫ್ ಪೊಲೀಸ್ ವರಿಷ್ಠಾಧಿಕಾರಿ ಶಾಂತಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ನಯಾಜ್ ಪಾಷ, ಡಿಎಚ್‌ಓ ಡಾ. ಜಗದೀಶ್ ಇದ್ದರು.