ತಂಬಾಕು ನಿಯಂತ್ರಣಕ್ಕೆ ಹೆಚ್ಚು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ

| Published : Mar 26 2025, 01:36 AM IST

ತಂಬಾಕು ನಿಯಂತ್ರಣಕ್ಕೆ ಹೆಚ್ಚು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ವಿಶ್ವಾದ್ಯಂತ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆಗಳಿಗೆ ತಂಬಾಕು ಸೇವನೆಯೇ ಮುಖ್ಯ ಕಾರಣವಾಗಿದೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಹೆಣ್ಣು ಮಕ್ಕಳಿಗೆ ಗರ್ಭಪಾತ, ಗರ್ಭಕಂಠದ ಕ್ಯಾನ್ಸರ್ ಹಾಗೂ ಇತ್ಯಾದಿ ದುಷ್ಪರಿಣಾಮಗಳ ತಿಳಿವಳಿಕೆ ಮೂಡಿಸಬೇಕು.

ಕೊಪ್ಪಳ:

ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚು ಜಾಗೃತಿ ಮೂಡಿಸಿ ತಂಬಾಕು ನಿಯಂತ್ರಣಕ್ಕೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಶ್ವಾದ್ಯಂತ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆಗಳಿಗೆ ತಂಬಾಕು ಸೇವನೆಯೇ ಮುಖ್ಯ ಕಾರಣವಾಗಿದೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಹೆಣ್ಣು ಮಕ್ಕಳಿಗೆ ಗರ್ಭಪಾತ, ಗರ್ಭಕಂಠದ ಕ್ಯಾನ್ಸರ್ ಹಾಗೂ ಇತ್ಯಾದಿ ದುಷ್ಪರಿಣಾಮಗಳ ತಿಳಿವಳಿಕೆ ಮೂಡಿಸಬೇಕು ಎಂದರು.

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಕಿರಾಣಿ ಅಂಗಡಿ, ಪಾನ್‌ಶಾಪ್, ಹೊಟೇಲ್‌ಗಳಿಗೆ ಟೋಬ್ಯಾಕೋ ವೆಂಡರ್ ಲೈಸನ್ಸ್ ನೀಡುವ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಅಪ್ರಾಪ್ತರಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದು ಹಾಗೂ ಮಾಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ತಂಬಾಕು ಮಾರಾಟ ಮಾಡುವ ಅಂಗಡಿ ಮಾಲೀಕರು ಆರೋಗ್ಯ ಎಚ್ಚರಿಕೆ ನಾಮಫಲಕ ಕಡ್ಡಾಯವಾಗಿ ಅಂಗಡಿ ಮುಂದೆ ಪ್ರದರ್ಶಿಸಬೇಕು. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಒಂದು ವೇಳೆ ನಿಯಮ ಉಲ್ಲಂಘಿಸಿದ ಸಂದರ್ಭದಲ್ಲಿ ತಂಬಾಕು ನಿಯಂತ್ರಣ ಕೋಶದಿಂದ ದಾಳ ನಡೆಸಿದಾಗ ಪೊಲೀಸರು ಸಹಕಾರ ನೀಡಬೇಕು. ಸರ್ಕಾರಿ ಕಚೇರಿ ಸುತ್ತಲಿನ ಆವರಣದಲ್ಲಿ ತಂಬಾಕು ಮಾರಾಟ ಮಾಡದಂತೆ ನಿಗಾವಹಿಸಬೇಕು. ಈ ಮೂಲಕ ಧೂಮಪಾನ ಮುಕ್ತ ಕಚೇರಿಯಾಗಿಸಬೇಕು. ಬಸ್‌ ನಿಲ್ದಾಣದಲ್ಲಿ ಸೆಕ್ಷನ್ 4ರ ನಾಮಫಲಕವನ್ನು ಕಡ್ಡಾಯವಾಗಿ ಹಾಕಿಕೊಳ್ಳಲು ಸಾರಿಗೆ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ ಮಾತನಾಡಿ, ತಂಬಾಕು ಮಾರಾಟ ಮತ್ತು ಸೇವನೆ ಕುರಿತು ಇರುವ ಕಾನೂನು, ದಂಡ ಮತ್ತು ಶಿಕ್ಷೆಗಳ ಸಂಪೂರ್ಣ ಮಾಹಿತಿಯನ್ನು ಜನರಿಗೆ ತಿಳಿಸಿದಾಗ ಮಾತ್ರ ತಂಬಾಕು ಮಾರಾಟ ಮತ್ತು ಸೇವನೆಯ ಮೇಲೆ ಪರಿಣಾಮಕಾರಿ ಬದಲಾವಣೆ ಸಾಧ್ಯವಾಗಿದೆ ಎಂದರು.

ಸಭೆಯಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ, ಶಿಶು ಮತ್ತು ತಾಯಿ ಮರಣ ಪ್ರಮಾಣ ತಡೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು.

ಈ ವೇಳೆ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಟಿ. ಲಿಂಗರಾಜು, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರವಿಂದ್ರ, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ. ಪ್ರಾಕಾಶ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಶಶಿಧರ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ವೆಂಕಟೇಶ, ಗಂಗಾವತಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಈಶ್ವರ ಸವಡಿ, ಜಿಲ್ಲೆಯ ತಾಲೂಕು ಆರೋಗ್ಯಾಧಿಕಾರಿಗಳು, ಕಿಮ್ಸ್ ತಜ್ಞ ವೈದ್ಯ ಡಾ. ನಾರಾಯಣ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.25ಕೆಪಿಎಲ್207ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಂಗವಾಗಿ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.