ಸಾರಾಂಶ
ಕೊಪ್ಪಳ: ಜಿಲ್ಲೆಯಲ್ಲಿ ಕುಷ್ಠರೋಗ ಪ್ರಕರಣಗಳು ಕಂಡುಬಂದ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2025ರ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕುಷ್ಠರೋಗ ಪ್ರಕರಣಗಳು ಪತ್ತೆಯಾದ ಪ್ರದೇಶ, ವಾರ್ಡುಗಳಿಗೆ ಆದ್ಯತೆ ನೀಡಿ. ಕುಷ್ಠರೋಗ ಸಂಪೂರ್ಣ ವಾಸಿಯಾಗಬಲ್ಲದು. ವೈಜ್ಞಾನಿಕವಾಗಿ ನಿರಂತರ ಚಿಕಿತ್ಸೆಯ ಅಗತ್ಯವಿದೆ ಎಂಬುದನ್ನು ರೋಗಿಗೆ ಹಾಗೂ ರೋಗಿಯ ಕುಟುಂಬಕ್ಕೆ ಮನದಟ್ಟು ಮಾಡಬೇಕು. ರೋಗದ ಲಕ್ಷಣಗಳು ಕಂಡುಬರುವವರಿಗೆ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವಂತೆ ಅರಿವು ಮೂಡಿಸಬೇಕು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮೂಲಕ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಬೇಕು. ಜಿಲ್ಲೆಯ ಆಶ್ರಮ ಶಾಲೆ, ಹಾಸ್ಟೆಲ್‌ಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಶಾಲೆಗಳಲ್ಲಿ ಪ್ರಾರ್ಥನೆ ಸಂದರ್ಭದಲ್ಲಿ ರೋಗದ ಬಗ್ಗೆ ಅರಿವು ಮೂಡಿಸಬೇಕು ಎಂದರು.ಜಿಲ್ಲೆಯಲ್ಲಿ ಕಂಡುಬಂದ ಕುಷ್ಠರೋಗ ಪ್ರಕರಣ, ರೋಗಿಯ ಚಿಕಿತ್ಸೆ, ನಿರಂತರ ಚಿಕಿತ್ಸೆಯ ನಂತರ ಗುಣಮುಖರಾದ ಬಗ್ಗೆ ದೃಢೀಕರಣ, ರೋಗಿಗಳಿಗೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳು ದೊರೆತಿರುವ ಬಗ್ಗೆ ಹಾಗೂ ನಿರಂತರ ಚಿಕಿತ್ಸೆ ನಂತರ ಅಥವಾ ಸಮರ್ಪಕ ಚಿಕಿತ್ಸೆಯ ಕೊರತೆಯಿಂದಾಗಿ ರೋಗ ವಾಸಿಯಾಗದೆ ಇರುವ ಕುರಿತಾಗಿ 5 ವರ್ಷಗಳ ಒಟ್ಟಾರೆ ತಾಲೂಕುವಾರು ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಪ್ರಕಾಶ ಎಚ್. ಮಾತನಾಡಿ, ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನವನ್ನು ಜ. 30ರಿಂದ ಫೆ. 13ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಈ ವರ್ಷದ ಘೋಷ ವಾಕ್ಯ `ಒಟ್ಟಾಗಿ ನಾವು ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ ಮತ್ತು ಕುಷ್ಠರೋಗದಿಂದ ಬಾಧಿತರಾದ ಎಲ್ಲರನ್ನು ಹಿಂದುಳಿಯಂತೆ ನೋಡಿಕೊಳ್ಳೋಣ'''' ಎಂಬುದಾಗಿದೆ. ಜನರಲ್ಲಿ ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ದೇಹದ ಮೇಲೆ ಸ್ಪರ್ಶಜ್ಞಾನವಿಲ್ಲದ ಮಚ್ಚೆಗಳು ಹಾಗೂ ದೇಹದ ಮೇಲೆ ಯಾವುದೇ ಅಸಹಜ ವ್ಯತ್ಯಾಸಗಳು ಕಂಡುಬಂದಲ್ಲಿ ಅಂತಹವರಿಗೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಪರೀಕ್ಷೆಗೆ ಒಳಪಡುವಂತೆ ಅರಿವು ಮೂಡಿಸಲಾಗುತ್ತಿದೆ ಎಂದರು.ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2025ರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜು ಟಿ., ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಪ್ರಕಾಶ ವಿ., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಶಶಿಧರ ಎ., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ವೆಂಕಟೇಶ, ತಾಲೂಕು ಆರೋಗ್ಯಾಧಿಕಾರಿ ಡಾ. ರಾಮಾಂಜನೇಯ, ಡಾ. ಗೌರಿಶಂಕರ ಹಾಗೂ ಡಾ. ಅಮರೇಶ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ ಹಾಗೂ ಇತರ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.