ರಾಮನಗರ: ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಕುರಿತು ಜಿಲ್ಲೆಯ ಯುವ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ಹಾಗೂ ಜಿಲ್ಲೆಯನ್ನು ತಂಬಾಕು ಮುಕ್ತವನ್ನಾಗಿಸಲು ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಸಮನ್ವಯ ಸಮಿತಿಯ ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಗಸ್ಟ್ 1ರಂದು ಮ.ನಿ.ಪ್ರ ಡಾ.ಮಹಾಂತ್ ಶಿವಯೋಗಿ ಸ್ವಾಮೀಜಿ ಜನ್ಮ ದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಪ್ರಯುಕ್ತ ಜಿಲ್ಲೆಯ ಪ್ರತೀ ತಾಲೂಕಿನ ಕನಿಷ್ಠ 2 ರಿಂದ 3 ಶಾಲಾ-ಕಾಲೇಜುಗಳಲ್ಲಿ ಆರೋಗ್ಯ ಇಲಾಖೆ, ಆರಕ್ಷಕ ಇಲಾಖೆ, ಗ್ರಾಮ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಮನ್ವಯದೊಂದಿಗೆ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ಹಾನಿಕಾರಕ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿರುವ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ಪ್ರತೀ ತಿಂಗಳಿಗೊಮ್ಮೆ ತಮ್ಮ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು. ಜಿಲ್ಲೆಯನ್ನು ತಂಬಾಕು ಮುಕ್ತವನ್ನಾಗಿಸಲು ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ 2026-27ನೇ ಸಾಲಿನಲ್ಲಿ, ಬೆಂಗಳೂರು ದಕ್ಷಿಣ ಜಿಲ್ಲೆಗೆ ನಿಗದಿಪಡಿಸಿದ್ದ 48 ಕೋಟ್ಪಾ ಕಾಯ್ದೆ ಕಾರ್ಯಾಚರಣೆಯಲ್ಲಿ ಜಿಲ್ಲೆಯಲ್ಲಿ ಇದೂವರೆಗೂ 13 ಕಾರ್ಯಾಚರಣೆಗಳನ್ನು ನಡೆಸಿ, 90 ಕೋಟ್ಪಾ ಕಾಯ್ದೆ ಉಲ್ಲಂಘನೆಯ ಪ್ರಕರಣಗಳನ್ನು ದಾಖಲು ಮಾಡಿ, ಒಟ್ಟು 17,400 ರು.ಗಳ ದಂಡ ವಿಧಿಸಲಾಗಿದೆ. ಅದೇ ರೀತಿಯಲ್ಲಿ ಪ್ರತೀ ತಾಲೂಕುಗಳಿಗೆ ಮಾಸಿಕವಾಗಿ ಕನಿಷ್ಠ 4 ಕೋಟ್ಪಾ ಕಾಯ್ದೆ ಕಾರ್ಯಾಚರಣೆಗಳನ್ನು ನಡೆಸಿ, ಪ್ರಕರಣ ದಾಖಲು ಮಾಡಿ ದಂಡ ವಿಧಿಸುವಂತೆ ಸೂಚಿಸಿದರು.


ಜಿಲ್ಲಾ ವ್ಯಾಪ್ತಿಯ ಪ್ರತಿ ಹೋಬಳಿಯ ತಲಾ ಒಂದು ಗ್ರಾಮವನ್ನು ತಂಬಾಕು ಮುಕ್ತ ಗ್ರಾಮ ಎಂದು ಘೋಷಿಸುವ ಉದ್ದೇಶದಿಂದ ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕು ಪಂಚಾಯಿತಿಗಳ ಮೂಲಕ ಸೂಕ್ತ ಗ್ರಾಮಗಳನ್ನು ಗುರುತಿಸಿ ಪಟ್ಟಿಯನ್ನು ಜಿಲ್ಲಾ ತಂಬಾಕು ನಿಯಂತ್ರಣ ಕೋಶಕ್ಕೆ ಸಲ್ಲಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರ ಪ್ರದೇಶದಲ್ಲಿರುವ ಶಾಲಾ ಕಾಲೇಜುಗಳ ಆವರಣದಲ್ಲಿ ಸೆಕ್ಷನ್ 6(ಬಿ)ರಂತೆ 100 ಗಜ/ ಯಾರ್ಡ್ಗಳ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು 3-2 ಅಡಿ ಅಳತೆಯ ನಾಮಫಲಕವನ್ನು ಕಡ್ಡಾಯವಾಗಿ ಸಂಸ್ಥೆ ಪ್ರವೇಶ ದ್ವಾರದಲ್ಲಿ ಪ್ರದರ್ಶನ ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಶಾಲಾ-ಕಾಲೇಜಿನ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಪದಾರ್ಥ ಮಾರುವುದು ಕಂಡು ಬಂದರೆ ಕಾನೂನು ರೀತಿ ಕಠಿಣ ಕ್ರಮ ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶೇಖರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕಿರಣ್‌ಶಂಕರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್, ತಾಲೂಕು ಆರೋಗ್ಯಾಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು.24ಕೆಆರ್ ಎಂಎನ್ 2.ಜೆಪಿಜಿ

ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮನ್ವಯ ಸಮಿತಿಯ ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.