ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಪಂಡಿತ್ ಜವಾಹರಲಾಲ್ ನೆಹರು ಅವರು ಆಧುನಿಕ ಭಾರತದ ಶಿಲ್ಪಿ. 17 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶ ಮತ್ತು ಸಮಾಜ ಕಟ್ಟಿದರು. ಆದರೆ, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ಬ್ರಿಟಿಷರ ಜತೆ ಕೈಜೋಡಿಸಿದ್ದವರು. ನೆಹರು ಮತ್ತು ಮಹಾತ್ಮಾ ಗಾಂಧಿ ಅವರಂಥ ಮಹಾನ್ ವ್ಯಕ್ತಿಗಳನ್ನು ಟೀಕಿಸುತ್ತಿದ್ದಾರೆ. ಅದರ ಬಗ್ಗೆ ಎಲ್ಲರೂ ಜಾಗೃತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬುಧವಾರ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜವಾಹರಲಾಲ್ ನೆಹರು ಅವರು ತಮ್ಮ ಯೌವ್ವನದ 3,200ಕ್ಕೂ ಹೆಚ್ಚಿನ ದಿನಗಳನ್ನು ಜೈಲಿನಲ್ಲಿ ಕಳೆದವರು. ಶ್ರೀಮಂತ ಕುಟುಂಬದವರಾಗಿದ್ದರೂ ದೇಶದ ಸ್ವಾತಂತ್ರ್ಯಕ್ಕಾಗಿ ಜೈಲು ಸೇರಿದರು. ಪ್ರಧಾನಿಯಾಗಿ ಐಐಟಿ, ಇಸ್ರೋ, ಏಮ್ಸ್ ಸೇರಿ ಹಲವು ಉನ್ನತ ಸಂಸ್ಥೆಗಳನ್ನು ಸ್ಥಾಪಿಸಿ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಇಷ್ಟೆಲ್ಲ ಸೇವೆ ಸಲ್ಲಿಸಿದ್ದರೂ ಕೆಲವರು ಅವರ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಜತೆಗೆ ಕೈ ಜೋಡಿಸದವರು ಹೀಗೆ ನೆಹರು ಮತ್ತು ಮಹಾತ್ಮ ಗಾಂಧೀಜಿ ಬಗ್ಗೆ ಮಾತನಾಡುತ್ತಿದ್ದಾರೆ. ಅದರ ಬಗ್ಗೆ ಮಕ್ಕಳು ಮತ್ತು ಪೋಷಕರು ಎಚ್ಚರದಿಂದಿರಬೇಕು ಎಂದರು.
ಈ ವರ್ಷ 900 ಪಬ್ಲಿಕ್ ಶಾಲೆ:ವೈಚಾರಿಕ ಮತ್ತು ವೈಜ್ಞಾನಿಕ ಮನೋಭಾವ ಹೊಂದಿದ ಮಕ್ಕಳು ದೇಶದ ಭವಿಷ್ಯ ರೂಪಿಸುತ್ತಾರೆ. ಅದಕ್ಕಾಗಿ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ದೂರು ಉಳಿಯುವಂತೆ ಮಾಡಬೇಕು. ರಾಜ್ಯದಲ್ಲಿ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ 65 ಸಾವಿರ ಕೋಟಿ ರು. ಖರ್ಚು ಮಾಡಲಾಗುತ್ತಿದೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಧರ್ಮ ರೂಪಿಸುವ ಶಿಕ್ಷಣಕ್ಕೆ ಒತ್ತು ನೀಡಲಾಗುವುದು. ಬಡ ಕುಟುಂಬದ ಮಕ್ಕಳೂ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆಯುವಂತೆ ಮಾಡುವ ಉದ್ದೇಶದೊಂದಿಗೆ ಈ ವರ್ಷ 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಕಾರ್ಯಕ್ರಮದಲ್ಲಿ ಒಂದರಿಂದ 10ನೇ ತರಗತಿಯ ಮೌಲ್ಯ ಶಿಕ್ಷಣ ಚಟುವಟಿಕೆ ಪುಸ್ತಕದ ಡಿಜಿಟಲ್ ಅವತರಣಿಕೆ ಬಿಡುಗಡೆ ಮಾಡಲಾಯಿತು. 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ-ಪಿಯು ಮತ್ತು ಪದವಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗ ಪ್ರತಿಭಾ ಪುರಸ್ಕಾರ ನೀಡಲಾಯಿತು.ಐಐಟಿ ಖರಗ್‌ಪುರ್ ಪ್ರವೇಶಕ್ಕೆ ಅರ್ಹತೆ ಪಡೆದ ಸಂಕೇತ್ ಅವರಿಗೆ ಅಭಿನಂದನಾ ಪತ್ರ ಮತ್ತು ಶಿಕ್ಷಕರ ಕಲ್ಯಾಣ ನಿಧಿಯಿಂದ 1 ಲಕ್ಷ ರು. ಪ್ರೋತ್ಸಾಹ ಧನ ನೀಡಲಾಯಿತು. ಜತೆಗೆ ಫೇಸ್ ರೆಕಗ್ನಿಷನ್ ಹಾಜರಾತಿ ಆವಿಷ್ಕರಿಸಿದ ಕೊಂಬೆಟ್ಟು ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ವಿ. ಅರುಣ್‌ಕುಮಾರ್ ಅವರಿಗೆ ಶಿಕ್ಷಕರ ಕಲ್ಯಾಣ ನಿಧಿಯಿಂದ 15 ಸಾವಿರ ರು. ಪ್ರೋತ್ಸಾಹ ಧನ ನೀಡಿ ಸನ್ಮಾನಿಸಲಾಯಿತು.
ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಶಾಸಕರಾದ ವಿಜಯಾನಂದ ಕಾಶಪ್ಪನವರ್, ಬಿ.ಬಿ. ಚಿಮ್ಮನಕಟ್ಟಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ಇತರರಿದ್ದರು.;Resize=(128,128))
;Resize=(128,128))