ಸಾರಾಂಶ
ತಾಲೂಕಿನಲ್ಲಿ ಸತತ ಮಳೆಯಿಂದಾಗಿ ಬೆಳೆಗಳು ಹಾನಿಗೀಡಾಗಿವೆ. ರೈತರು ಬೆಳೆಹಾನಿ ಸಮೀಕ್ಷೆಯ ನಿರೀಕ್ಷೆಯಲ್ಲಿದ್ದು, ಜನ ಪ್ರತಿನಿಧಿಗಳು ಹಾಗೂ ತಾಲ್ಲೂಕು ಆಡಳಿತ ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಕೂಡಲೇ ಸರ್ವೆ ಕ್ರಮ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕೆಂದು ಎಂದು ಬಿಜೆಪಿ ಮುಖಂಡ ದುರುಗಪ್ಪ ನಾಯಕ ಒತ್ತಾಯಿಸಿದ್ದಾರೆ.
ಕನ್ನಡಪ್ರಭ ವಾರ್ತೆ ದೇವದುರ್ಗ
ತಾಲೂಕಿನಲ್ಲಿ ಸತತ ಮಳೆಯಿಂದಾಗಿ ಬೆಳೆಗಳು ಹಾನಿಗೀಡಾಗಿವೆ. ರೈತರು ಬೆಳೆಹಾನಿ ಸಮೀಕ್ಷೆಯ ನಿರೀಕ್ಷೆಯಲ್ಲಿದ್ದು, ಜನ ಪ್ರತಿನಿಧಿಗಳು ಹಾಗೂ ತಾಲ್ಲೂಕು ಆಡಳಿತ ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಕೂಡಲೇ ಸರ್ವೆ ಕ್ರಮ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕೆಂದು ಎಂದು ಬಿಜೆಪಿ ಮುಖಂಡ ದುರುಗಪ್ಪ ನಾಯಕ ಒತ್ತಾಯಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ಭಾರಿ ಮಳೆಯಾಗಿದ್ದರಿಂದ ಬೆಳೆಗಳು ಬಹಳಷ್ಟು ಹಾನಿಯಾಗಿವೆ. ರೈತರ ನೆರವಿಗೆ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಬರುವ ನಿಟ್ಟಿನಲ್ಲಿ ಒಂದು ವಾರದಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೆತ್ತಿಕೊಳ್ಳಬೇಕು. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನೊಳಗೊಂಡು ಜಂಟಿ ಸರ್ವೇ ಕಾರ್ಯ ನಡೆಸಿ ಹೆಕ್ಟೇರ್ಗೆ 30-50 ಸಾವಿರ ರು.ಗಳ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರವು ರೈತರು ಮತ್ತು ಜನರ ಬಗ್ಗೆ ಕಾಳಜಿ ವಹಿಸಬೇಕು. ಸಂಬಂಧಪಟ್ಟ ಸಚಿವರು, ಅಧಿಕಾರಿಗಳು ನೆರೆಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ನಷ್ಟಕ್ಕೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿ, ಸರ್ಕಾರಕ್ಕೆ ಸಲ್ಲಿಸಬೇಕು. ಸೂಕ್ತ ಪರಿಹಾರದ ಜೊತೆಗೆ ರೈತರ ಬೆಳೆ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.ರಾಜ್ಯ ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳ ಬೆನ್ನು ಬಿದ್ದಿದೆ. ಅತಿಯಾದ ಮಳೆಯಿಂದ ಹೆಸರು, ಹತ್ತಿ, ಇತರೆ ಬೆಳೆಗಳು ಹಾಳಾಗಿವೆ. ಸಂತ್ರಸ್ತ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು. ಸಂಪೂರ್ಣ ಹಾನಿಗೀಡಾದ ಮನೆಗಳಿಗೆ 5 ಲಕ್ಷ ರು. ಪರಿಹಾರ ಕೊಡಬೇಕು. ಅತಿವೃಷ್ಟಿಯಿಂದ ಹಾನಿಗೊಳಗಾಗಿ ಸಂಕಷ್ಟದಲ್ಲಿರುವ ರೈತರಿಗೆ, ಸರ್ಕಾರ ಮಲತಾಯಿ ಧೋರಣೆ ಅನುಸದೆ ಅವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.