ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 55,208 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಇದರಲ್ಲಿ 51,690 ಹೆಕ್ಟೇರ್ ಕೃಷಿ ಬೆಳೆ ಹಾಗೂ 3,518 ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 55,208 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಇದರಲ್ಲಿ 51,690 ಹೆಕ್ಟೇರ್ ಕೃಷಿ ಬೆಳೆ ಹಾಗೂ 3,518 ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿ, 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 7,905.54 ಕ್ವಿಂಟಾಲ್ ಬಿತ್ತನೆ ಬೀಜದ ಗುರಿ ಹೊಂದಿದ್ದು, ಈವರೆಗೆ 3,331.42 ಕ್ವಿಂಟಾಲ್ ವಿತರಿಸಲಾಗಿದೆ. ಅಕ್ಟೋಬರ್ 31ರ ಅಂತ್ಯಕ್ಕೆ 39,704 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ ಎಂದರು.

ಜಿಲ್ಲೆಯಲ್ಲಿ 4,84,298 ದೊಡ್ಡ ಜಾನುವಾರುಗಳು ಹಾಗೂ 86,130 ಸಣ್ಣ ಜಾನುವಾರುಗಳಿವೆ. ಪ್ರಸ್ತುತ 11,35,970 ಟನ್ ಮೇವು ಲಭ್ಯವಿದ್ದು, ಇದು ಮುಂದಿನ 55 ವಾರಗಳಿಗೆ ಸಾಕಾಗುವಷ್ಟಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಸಮಸ್ಯಾತ್ಮಕ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಿ, ಅಲ್ಲಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಅಥವಾ ತುರ್ತು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸನ್ನದ್ಧರಾಗಿರುವಂತೆ ತಹಸೀಲ್ದಾರ್ ಮತ್ತು ತಾಲೂಕು ಪಂಚಾಯಿತಿ ಇಒಗಳಿಗೆ ಸೂಚಿಸಿದರು. ಜೂನ್‌ವರೆಗೂ ಬರ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇರುವುದರಿಂದ ನೀರಿನ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಲು ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಎಲ್-ನಿನೊ ಪರಿಣಾಮದಿಂದಾಗಿ ಮಾರ್ಚ್‌ನಿಂದ ಮೇ ವರೆಗೆ ಶೇ. 39ರಷ್ಟು ಮಳೆ ಕೊರತೆಯಾಗಿದ್ದರೆ, ಅಕ್ಟೋಬರ್‌ನಿಂದ ನವೆಂಬರ್‌ವರೆಗೆ ಶೇ. 52ರಷ್ಟು ಮಳೆ ಕಡಿಮೆಯಾಗಿದೆ. ಒಟ್ಟಾರೆ ಶೇ. 37ರಷ್ಟು ಮಳೆ ಕೊರತೆಯಾಗಿದ್ದು, ತೀವ್ರ ಮಳೆ ಅಭಾವ ಸೃಷ್ಟಿಯಾಗಿದೆ.

ಭದ್ರಾ ಜಲಾಶಯ: ಪ್ರಸ್ತುತ 54 ಟಿಎಂಸಿ ನೀರಿದ್ದು, ಇದರಲ್ಲಿ 13 ಟಿಎಂಸಿ ಡೆಡ್ ಸ್ಟೋರೇಜ್ ಇದೆ. ಸದ್ಯ 10 ದಿನಕ್ಕೆ 1 ಟಿಎಂಸಿ ನೀರು ಬಿಡಲಾಗುತ್ತಿದೆ. ತುಂಗಾ ಜಲಾಶಯ: 2.411 ಟಿಎಂಸಿ ನೀರಿನ ಸಂಗ್ರಹವಿದ್ದು, ಮೇ ತಿಂಗಳವರೆಗೆ ಕುಡಿಯುವ ನೀರಿಗೆ ಯಾವುದೇ ತೊಂದರೆಯಿಲ್ಲ. ಲಿಂಗನಮಕ್ಕಿ 73.70 ಟಿಎಂಸಿ‌ ನೀರಿದ್ದು ಮೇವರೆಗೆ ಬಳಸಬಹುದು ಎಂದು ಮಾಹಿತಿ ನೀಡಿದರು.

ಕುಡಿಯುವ ನೀರು ಮತ್ತು ಬೋರ್‌ವೆಲ್ ನಿರ್ವಹಣೆ: ಈಗಾಗಲೇ ಜಿಲ್ಲೆಯ 17 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 20 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ 5-6 ಗ್ರಾಮ ಪಂಚಾಯಿತಿಗಳಲ್ಲಿ ಸಮಸ್ಯೆ ಕಂಡುಬಂದಿದ್ದು, ಸಮಸ್ಯೆ ಇರುವ ಗ್ರಾ.ಪಂ.ಗಳ ಸಂಪೂರ್ಣ ವಿವರ ಪಡೆಯಲು ಸೂಚಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿರುವ ಟೆಲಿಮೆಟ್ರಿಕ್ ಮಳೆ ಮಾಪಕಗಳು (ಟಿ ಆರ್ ಜಿ) ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ನಿರಂತರವಾಗಿ ಪರಿಶೀಲಿಸಿ ಮಾಹಿತಿ ನೀಡಬೇಕು. ಇದಕ್ಕಾಗಿ ವಿಎಒಗಳನ್ನು ನೋಡಲ್ ಆಫೀಸರ್‌ಗಳನ್ನಾಗಿ ನೇಮಿಸಲಾಗಿದ್ದು, ಒಂದು ತಿಂಗಳೊಳಗೆ ವರದಿ ಪಡೆಯಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್, ಸಾಗರ ಉಪವಿಭಾಗಾಧಿಕಾರಿ ಸತ್ಯನಾರಾಯಣ್, ಜಿ.ಪಂ. ಉಪಕಾರ್ಯದರ್ಶಿ ಅನ್ನಪೂರ್ಣ, ಕೃಷಿ ಜಂಟಿ ನಿರ್ದೇಶಕಿ ಪೂರ್ಣಿಮಾ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.