ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವ ₹5,300 ಕೋಟಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆಯ ರೈತ ಸಂಘಟನೆಗಳು ಸೋಮವಾರ ಸಂಸದ ಗೋವಿಂದ ಎಂ.ಕಾರಜೋಳ ಅವರ ಮನೆ ಮುಂಭಾಗ ಪ್ರತಿಭಟನೆ ನಡೆಸಿದವು. ಮಾರ್ಚ್ ಅಂತ್ಯದೊಳಗೆ ಹಣ ಬಿಡುಗಡೆಯಾಗದಿದ್ದರೆ ಏಪ್ರಿಲ್‌ನಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

​2022-23ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ನೀಡುವುದಾಗಿ ಘೋಷಿಸಿದ್ದರು. ಆದರೆ, ಘೋಷಣೆಯಾಗಿ ವರ್ಷಗಳೇ ಕಳೆದರೂ ಈವರೆಗೆ ಒಂದು ಪೈಸೆ ಅನುದಾನವೂ ಬಿಡುಗಡೆಯಾಗಿಲ್ಲ. ಇದರಿಂದಾಗಿ ಈ ಭಾಗದ ಬಹುನಿರೀಕ್ಷಿತ ನೀರಾವರಿ ಯೋಜನೆ ಕುಂಠಿತಗೊಂಡಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯು ಸತತ ಬರಗಾಲಕ್ಕೆ ತುತ್ತಾಗಿದ್ದು, ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿದೆ. ಕೇಂದ್ರ ಅಂತರ್ಜಲ ಮಂಡಳಿಯ ವರದಿಯಂತೆ ಜಿಲ್ಲೆಯಲ್ಲಿ ಶೇ 144.43 ರಷ್ಟು ಅಂತರ್ಜಲ ಬಳಕೆಯಾಗುತ್ತಿದ್ದು, ಅಪಾಯಕಾರಿ ಮಟ್ಟ ತಲುಪಿದೆ. ಕುಡಿಯುವ ನೀರಿಗೂ ಆಹಾಕಾರ ಉಂಟಾಗಿದ್ದು, ರೈತರು ಸಾಲಬಾದೆಯಿಂದ ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಚುನಾವಣೆ ಸಂದರ್ಭದಲ್ಲಿ ಸಂಸದನಾಗಿ ಆಯ್ಕೆಯಾದ ಮೂರು ತಿಂಗಳೊಳಗೆ ಅನುದಾನ ಕೊಡಿಸುತ್ತೇನೆ ಎಂದು ನೀಡಿದ್ದ ಭರವಸೆಯನ್ನು ರೈತರು ನೆನಪಿಸಿದ್ದಾರೆ. ಕಳೆದ ನಾಲ್ಕೈದು ತಿಂಗಳಿನಿಂದ ಜಿಲ್ಲೆಯಾದ್ಯಂತ ನಿರಂತರ ಹೋರಾಟಗಳು ನಡೆಯುತ್ತಿದ್ದರೂ ಕೇಂದ್ರ ಸರ್ಕಾರ ಮೌನ ವಹಿಸಿದೆ. ಮಾರ್ಚ್ ಅಂತ್ಯದೊಳಗೆ ಈ ಯೋಜನೆಗೆ ಹಣ ಬಿಡುಗಡೆ ಮಾಡಿಸದಿದ್ದರೆ, ಏಪ್ರಿಲ್ ಮೊದಲ ವಾರದಲ್ಲಿ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ರೈತ ಮುಖಂಡರು ಎಚ್ಚರಿಸಿದ್ದಾರೆ.

ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆಯಲ್ಲಿ ಬಂದ ರೈತರು ಜಿಲ್ಲಾಧಿಕಾರಿ ಕಚೇರಿ ಬಳಿ ಘೋಷಣೆ ಕೂಗಿ ನಂತರ ಸಂಸದರ ಕಚೇರಿಗೆ ಆಗಮಿಸಿದರು. ರೈತ ಸಂಘದ ಮುಖಂಡರಾದ ಕೆ.ಟಿ.ತಿಪ್ಪೇಸ್ವಾಮಿ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಈಚಗಟ್ಟದ ಸಿದ್ದವೀರಪ್ಪ, ರೆಡ್ಡಿಹಳ್ಳಿ ವೀರಣ್ಣ, ಸಿದ್ದರಾಮಣ್ಣ, ಆರ್.ರಂಗಸ್ವಾಮಿ, ಪಿ.ನಾಗರಾಜ್, ತಿಮ್ಮಣ್ಮ, ರಾಜಣ್ಣ,ಟಿ.ಗಂಗಾಧರ, ಪಾಲಯ್ಯ ಪ್ರತಿಭಟನೆ ನೇತೃತ್ವ ವಹಿಸಿದ್ದರು.