ಜಾನಪದ ಕಲೆಗಳ ಮೈಗೂಡಿಸಿಕೊಳ್ಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಕಲೆ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಜಾನಪದ ಪರಿಷತ್ ನಿರಂತರ ಪ್ರಯತ್ನಿಸುತ್ತಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಜಾನಪದ ಕಲೆಗಳ ಮೈಗೂಡಿಸಿಕೊಳ್ಳುವ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಕಲೆ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಜಾನಪದ ಪರಿಷತ್ ನಿರಂತರ ಪ್ರಯತ್ನಿಸುತ್ತಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು.

ಕರ್ನಾಟಕ ಜಾನಪದ ಪರಿಷತ್‌ನ ತಾಲೂಕು ಶಾಖೆ ವತಿಯಿಂದ ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಶನಿವಾರ ಆಯೋಜನೆಗೊಂಡಿದ್ದ ವಿಶ್ವ ಜಾನಪದ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಾನಪದ ಕಲೆಗಳು ತಮ್ಮದೇ ಆದ ವೈಶಿಷ್ಟ್ಯತೆ ಹೊಂದಿವೆ. ಪ್ರತಿಯೊಂದು ಕಲೆಗೂ ಅದರದ್ದೇ ಆದ ಮಹತ್ವವಿದ್ದು, ಇವುಗಳ ಕುರಿತು ಪ್ರತಿಯೊಬ್ಬರು ಸಮಗ್ರ ಅಧ್ಯಯನ ನಡೆಸಿ ತಿಳಿದುಕೊಳ್ಳುವ ಅಗತ್ಯವಿದೆ ಎಂದರು.

ಜಾನಪದ ಕಲೆಗಳ ಸಮಗ್ರ ಮಾಹಿತಿಯನ್ನು ಕರ್ನಾಟಕ ಜಾನಪದ ಪರಿಷತ್ ಸಂಗ್ರಹಿಸಿ ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದೆ. ಜಿಲ್ಲಾ ಮತ್ತು ತಾಲೂಕು ಶಾಖೆಗಳು ಈ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ನಿರಂತರವಾಗಿ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿವೆ. ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಉದ್ಯಮಿ ಬಿ.ಕೆ ಜಗನ್ನಾಥ್ ಮಾತನಾಡಿ, ಜಾನಪದ ಕಲೆಗಳ ಮಹತ್ವವನ್ನು ಇಂದಿನ ಪೀಳಿಗೆ ಅರಿತುಕೊಂಡು ಅವುಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಈ ರೀತಿಯ ಕಾರ್ಯಕ್ರಮಗಳು ಸಾರ್ಥಕಗೊಳ್ಳುತ್ತವೆ ಎಂದರು.

ತರೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ. ರವಿ ಜಾನಪದ ಕಲೆ ಹಾಗು ಅವುಗಳ ಮಹತ್ವ ವಿವರಿಸಿದರು. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಚ್. ತಿಮ್ಮಪ್ಪ, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸಹಿತ ಇನ್ನಿತರರು ಉಪಸ್ಥಿತರಿದ್ದರು.

ಜಾನಪದ ಕಲಾವಿದ ರಂಗರಾಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಜಾನಪದ ಗೀತೆಗಳ ಗಾಯನ ಸ್ಪರ್ಧೆಯಲ್ಲಿ ಸುಮಾರು 20 ತಂಡಗಳು ಭಾಗವಹಿಸಿದ್ದವು. ಸಂಗೀತ ಶಿಕ್ಷಕಿ ಅನಿತಾ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು.

ಜಾನಪದ ಪರಿಷತ್ ತಾಲೂಕು ಶಾಖೆ ಅಧ್ಯಕ್ಷ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ಅಧ್ಯಕ್ಷತೆ ವಹಿಸಿದ್ದರು. ಹರೀಶ್ ಮತ್ತು ದಿವಾಕರ್ ಪ್ರಾರ್ಥಿಸಿದರು. ಕಮಲಾಕರ ಸ್ವಾಗತಿಸಿದರು. ಬಿ.ಎಲ್ ಮೋಹನ್ ನಿರೂಪಿಸಿದರು.