ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿ ಸಾಧನೆ ಮಾಡಬೇಕು. ಗುರು-ಹಿರಿಯರು ಹಾಗೂ ತಂದೆ-ತಾಯಿಗಳನ್ನು ಗೌರವದಿಂದ ಕಾಣುವ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಸಲಹೆ ನೀಡಿದರು.

ಪಟ್ಟಣದ ಪ್ರಿಯದರ್ಶನಿ ಆಂಗ್ಲ ಮಾಧ್ಯಮ ಶಾಲೆಯ 36ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಪ್ರಿಯೋತ್ಸವ -2026 ಸಾಂಸ್ಕೃತಿಕ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.

ಪಟ್ಟಣದಲ್ಲಿ ಕಳೆದ 35 ವರ್ಷಗಳಿಂದ ಪ್ರಿಯದರ್ಶಿನಿ ಶಾಲೆ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಶಾಲೆಯ ಸಂಸ್ಥಾಪಕ ದಿವಂಗತ ತಾರಾ ಕಿರಣ್ ಅವರ ಸತತ ಪರಿಶ್ರಮದ ಫಲವಾಗಿ ಸಾವಿರಾರು ವಿದ್ಯಾರ್ಥಿಗಳು ಇಂದು ಸಮಾಜದ ವಿವಿಧ ಸ್ಥಳಗಳಲ್ಲಿ ಕೆಲಸ ಮಾಡಿ ಸಾಧನೆ ಮಾಡಲು ಪ್ರೇರಕ ಶಕ್ತಿಯಾಗಿದ್ದಾರೆ ಎಂದರು.

ತಾಲೂಕಿನ ಸಾವಿರಾರು ಮಕ್ಕಳು ಇಂದು ಮೂಡಬಿದರೆ ಮಂಗಳೂರು ಸೇರಿದಂತೆ ವಿವಿಧ ಕಾಲೇಜುಗಳಿಗೆ ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ಶಿಕ್ಷಣ ಕೊಡಿಸುತ್ತಿದ್ದಾರೆ. ನಮ್ಮ ಪಟ್ಟಣದಲ್ಲಿಯೇ ಒಂದು ಹೈಟೆಕ್ ಶಾಲೆ ನಿರ್ಮಾಣವಾದರೆ ವಿದ್ಯಾರ್ಥಿಗಳೆಲ್ಲರೂ ನಮ್ಮೂರಿನಲ್ಲಿಯೇ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ಪಡೆದು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.


ಕಾಪನಹಳ್ಳಿ ಗವಿಮಠದ ಪೀಠಾಧಿಪತಿಗಳಾದ ಶ್ರೀಸ್ವತಂತ್ರ ಚನ್ನವೀರಯ್ಯ ಸ್ವಾಮಿಜಿ ದಿವ್ಯ ಸಾನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಆರ್‌ಟಿಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಮಹಾರಾಷ್ಟ್ರದ ಕೊಲ್ಲಾಪುರ ಶಿವ ಸಂಸ್ಥಾನದ ಶಿವಾನಂದ ಮಹಾರಾಜ್ ಸ್ವಾಮೀಜಿ, ವಕೀಲರಾದ ದೇವಾನಂದ್ ಸೇರಿದಂತೆ ಮಕ್ಕಳ ಪೋಷಕರು ಪ್ರಿಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲಾ ಮಕ್ಕಳು ನೀಡಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕರಾಟೆ ಪ್ರದರ್ಶನವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.