.ಕನ್ನಡದ ಬಗ್ಗೆ ಮಕ್ಕಳಲ್ಲಿ ಹೆಚ್ಚಿನ ಆಸಕ್ತಿ ಬರುವಂತೆ ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಈ ಕಾರ್ಯ ಶ್ಲಾಘನೀಯ.
ಕನ್ನಡಪ್ರಭ ವಾರ್ತೆ ಸಿದ್ದಾಪುರ
ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಪಡೆದು ಎಷ್ಟೇ ದೊಡ್ಡ ಸ್ಥಾನಕ್ಕೇರಿದರೂ ಕನ್ನಡವನ್ನು ಮರೆಯದೇ ಭಾಷಾ ಪ್ರೀತಿ, ಅಭಿಮಾನ ಬೆಳೆಸಿಕೊಳ್ಳಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪಟ್ಟಣದ ಪ್ರಶಾಂತಿ ಪ್ರೌಢಶಾಲೆಯಲ್ಲಿ ೨೦೨೫-೨೬ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ ನೂರಕ್ಕೆ ನೂರರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡದ ಬಗ್ಗೆ ಮಕ್ಕಳಲ್ಲಿ ಹೆಚ್ಚಿನ ಆಸಕ್ತಿ ಬರುವಂತೆ ಮಾಡುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಈ ಕಾರ್ಯ ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿ, ಕನ್ನಡ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡು ಮಾದರಿ ವಿದ್ಯಾರ್ಥಿಗಳಾಗಬೇಕು ಎಂದರು.ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ, ಹಿರಿಯ ಸಾಹಿತಿ ತಮ್ಮಣ್ಣ ಬೀಗಾರ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ ಜಿ. ನಾಗರಾಜ, ಹಿರಿಯ ಕಸಾಪ ಆಜೀವ ಸದಸ್ಯೆ ಸ್ವರ್ಣಲತಾ ಶಾನಭಾಗ, ತಾಲೂಕು ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ. ನಾಯ್ಕ, ಪ್ರಶಾಂತಿ ಪ್ರೌಢಶಾಲೆ ಮುಖ್ಯ ಶಿಕ್ಷಕ ದಿನೇಶ್ ಶೆಟ್ಟಿ ಮಾತನಾಡಿದರು. ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಕೆ. ನಾಯ್ಕ ಕಡಕೇರಿ, ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಗೋಪಾಲ ನಾಯ್ಕ, ಕಸಾಪ ಗೌರವ ಕಾರ್ಯದರ್ಶಿ ಅಣ್ಣಪ್ಪ ನಾಯ್ಕ ವೇದಿಕೆಯಲ್ಲಿದ್ದರು.
ಕಸಾಪ ತಾಲೂಕು ಅಧ್ಯಕ್ಷ ಚಂದ್ರಶೇಖರ ನಾಯ್ಕ ಕುಂಬ್ರಿಗದ್ದೆ ಪ್ರಾಸ್ತಾವಿಕ ಮಾತನಾಡಿದರು.ಈ ಸಂದರ್ಭ ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ಸಾಧಕ ಮಕ್ಕಳ ಜೊತೆಗೆ ಕನ್ನಡ ಶಿಕ್ಷಕರು, ಕನ್ನಡ ಉಪನ್ಯಾಸಕರನ್ನು ಅಭಿನಂದಿಸಿ ಗೌರವಿಸಲಾಯಿತು. ಕಸಾಪ ಪದಾಧಿಕಾರಿಗಳಾದ ರತ್ನಾಕರ ನಾಯ್ಕ, ಟಿಕೆಎಂ ಆಜಾದ್, ನಿವೃತ್ತ ನೌಕರ ಸಂಘದ ಅಧ್ಯಕ್ಷ ಸಿ.ಎಸ್. ಗೌಡರ, ಪ್ರಾಚಾರ್ಯ ಎಂ.ಕೆ. ನಾಯ್ಕ ಹೊಸಳ್ಳಿ, ವಿದ್ಯಾರ್ಥಿಗಳ ಪೋಷಕರು, ಶಿಕ್ಷಕರು, ಉಪನ್ಯಾಸಕರು ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಪ್ರಶಾಂತಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ, ನಾಡಗೀತೆ ಹಾಡಿದರು.
ಕಸಾಪ ತಾಲೂಕು ಗೌರವ ಕಾರ್ಯದರ್ಶಿ ಪ್ರಶಾಂತ ಶೇಟ್ ಸ್ವಾಗತಿಸಿದರು. ಕಸಾಪ ಗೌರವ ಕೋಶಾಧ್ಯಕ್ಷ ಪಿ.ಬಿ. ಹೊಸೂರು ವಂದಿಸಿದರು. ಪದಾಧಿಕಾರಿ ಸುಜಾತಾ ಹೆಗಡೆ ದಂಟಗಲ್ ನಿರೂಪಿಸಿದರು.