ರೋಟರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಕ್ರಿಯಾಶೀಲ ಶಿಕ್ಷಕರ ತಂಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದೆ. ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ್ ಅವರು ಶಾಲೆಯ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಕೇವಲ ಪರೀಕ್ಷಾ ಫಲಿತಾಂಶಕ್ಕೆ ಒತ್ತು ನೀಡದೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ. ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಮತ್ತಷ್ಟು ಪ್ರಯತ್ನಗಳು ನಡೆಯಬೇಕು ಎಂದರು.

ಅರಸೀಕೆರೆ: ಪಠ್ಯಪುಸ್ತಕದ ಜ್ಞಾನವಷ್ಟೇ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದಿಲ್ಲ. ಶಿಕ್ಷಣದ ಜತೆಗೆ ಕಲೆ, ಸಾಹಿತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಮಕ್ಕಳು ತೊಡಗಿಸಿಕೊಂಡಾಗ ಅವರಲ್ಲಿರುವ ಸುಪ್ತ ಪ್ರತಿಭೆ ಹೊರಹೊಮ್ಮಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಅಭಿಪ್ರಾಯಪಟ್ಟರು.ನಗರದ ಶ್ರೀ ಪ್ರಸನ್ನ ಗಣಪತಿ ಆಸ್ಥಾನ ಮಂಟಪದ ಸಾಂಸ್ಕೃತಿಕ ವೇದಿಕೆಯಲ್ಲಿ ರೋಟರಿ ಶಾಲೆ ವತಿಯಿಂದ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ರೋಟರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಕ್ರಿಯಾಶೀಲ ಶಿಕ್ಷಕರ ತಂಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದೆ. ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ್ ಅವರು ಶಾಲೆಯ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಕೇವಲ ಪರೀಕ್ಷಾ ಫಲಿತಾಂಶಕ್ಕೆ ಒತ್ತು ನೀಡದೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ. ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಮತ್ತಷ್ಟು ಪ್ರಯತ್ನಗಳು ನಡೆಯಬೇಕು ಎಂದರು.ಇನ್ನರ್‌ವ್ಹೀಲ್ ಅಧ್ಯಕ್ಷೆ ಶ್ವೇತ ಮಾತನಾಡಿ, ನಮ್ಮ ಮನವಿಗೆ ಸ್ಪಂದಿಸಿ ಶಾಲಾ ಆಡಳಿತ ಮಂಡಳಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ಸಂಗತಿ. ಶಾಲೆಯಲ್ಲಿ ಉತ್ತಮ ಶಿಕ್ಷಣದ ಜತೆಗೆ ಮಕ್ಕಳ ಪ್ರತಿಭೆ ಬೆಳೆಸುವ ಕಾರ್ಯ ನಡೆಯುತ್ತಿದೆ. ಇತ್ತೀಚೆಗೆ ನಡೆದ ಆಹಾರ ಮೇಳ ಹಾಗೂ ಮಕ್ಕಳ ಸಂತೆಗೆ ಪೋಷಕರು ಉತ್ತಮ ಪ್ರೋತ್ಸಾಹ ನೀಡಿರುವುದು ಮೆಚ್ಚುವಂತಹದ್ದು. ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವಂತಾಗಲಿ ಎಂದು ಆಶಿಸಿದರು.ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಕುಮಾರ್, ರೋಟರಿ ಮೆಂಬರ್ಷಿಪ್ ಚೇರ್ಮನ್ ಯೋಗೀಶಾಚಾರ್, ರೋಟರಿ ಅಧ್ಯಕ್ಷ ಸುರೇಶ್, ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ್, ರೋಟರಿ ಸದಸ್ಯ ರಾಜೇಗೌಡ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಕಲ್ಯಾಣ ಕುಮಾರ್ ಹಾಗೂ ಸಿಆರ್‌ಪಿ ವಿಷ್ಣುವರ್ಧನ್ ಉಪಸ್ಥಿತರಿದ್ದು ಶುಭ ಹಾರೈಸಿದರು.ನಂತರ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದ ಪ್ರೇಕ್ಷಕರ ಮನಸೂರೆಗೊಂಡವು.